ಬಿಹಾರ ಸಿಎಂ ನಿತೀಶ್ ಕುಮಾರ್ಗೆ ಭಾರೀ ಹಿನ್ನಡೆ: ಮಣಿಪುರದ ಐವರು ಜೆಡಿಯು ಶಾಸಕರು ಬಿಜೆಪಿ ತೆಕ್ಕೆಗೆ!
ಮಣಿಪುರದ ಐವರು ಜೆಡಿಯು ಶಾಸಕರು ಶುಕ್ರವಾರ ಬಿಜೆಪಿಗೆ ಸೇರ್ಪಡೆಯಾಗಿದ್ದು, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಬಹುದೊಡ್ಡ ಆಘಾತ ನೀಡಿದ್ದಾರೆ.

ಇಂಫಾಲ(ಮಣಿಪುರ): ಶುಕ್ರವಾರ ರಾತ್ರಿ ನಡೆದ ದಿಢೀರ್ ಬೆಳವಣಿಗೆಯಲ್ಲಿ ಮಣಿಪುರದ ಐವರು ಜೆಡಿಯು ಶಾಸಕರು ಬಿಜೆಪಿಗೆ ಸೇರ್ಪಡೆಯಾಗಿದ್ದು, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಬಹುದೊಡ್ಡ ಆಘಾತ ನೀಡಿದ್ದಾರೆ.
ಈ ಕುರಿತು ಮಣಿಪುರ ವಿಧಾನಸಭೆಯ ಕಾರ್ಯದರ್ಶಿ ಕೆ.ಮೇಘಜಿತ್ ಸಿಂಗ್ ಅವರು ಹೇಳಿಕೆ ಬಿಡುಗಡೆ ಮಾಡಿದ್ದು, ‘ಐವರು ಜೆಡಿಯು ಶಾಸಕರು ಬಿಜೆಪಿ ಸೇರ್ಪಡೆಯಾಗಿದ್ದನ್ನು ಸ್ಪೀಕರ್ ಅವರು ಅನುಮೋದಿಸಿದ್ದಾರೆ’ ಎಂದು ತಿಳಿಸಿದ್ದಾರೆ.
ಕಳೆದ ಕೆಲ ದಿನಗಳ ಹಿಂದೆ ಬಿಜೆಪಿ ಜೊತೆಗಿನ ಮೈತ್ರಿ ಮುರಿದುಕೊಂಡು ಆರ್ಜೆಡಿ ಮತ್ತು ಕಾಂಗ್ರೆಸ್ ಜೊತೆ ಕೈಜೋಡಿಸಿರುವ ನಿತೀಶ್ ಕುಮಾರ್ ಬಿಹಾರದಲ್ಲಿ ಹೊಸ ಸರ್ಕಾರ ರಚನೆ ಮಾಡಿದ್ದಾರೆ. ಇದರ ಮಧ್ಯೆ ಮಣಿಪುರದಲ್ಲಿ ಐವರು ಜೆಡಿಯು ಶಾಸಕರು ಬಿಜೆಪಿ ಸೇರ್ಪಡೆಗೊಂಡಿದ್ದಾರೆ.
ಕಳೆದ ಮಾರ್ಚ್ ತಿಂಗಳಲ್ಲಿ ನಡೆದ ಮಣಿಪುರ ವಿಧಾಸಭೆ ಚುನಾವಣೆಯಲ್ಲಿ ಜೆಡಿಯು 7 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. 60 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿ 32 ಸ್ಥಾನಗಳಲ್ಲಿ ಗೆಲುವು ದಾಖಲಿಸಿ, ಅಧಿಕಾರ ಉಳಿಸಿಕೊಂಡಿದೆ. ಈ ವೇಳೆ, ಜೆಡಿಯು ಶಾಸಕರು ಬಿಜೆಪಿಗೆ ಬೆಂಬಲ ವ್ಯಕ್ತಪಡಿಸಿದ್ದರು.
ಕೆ.ಎಚ್. ಜೋಯ್ಕಿಶನ್, ಎನ್.ಸನತೆ, ಎಂಡಿ ಅಚಾಬ್ ಉದ್ದೀನ್, ಮಾಜಿ ಡಿಜಿಪಿ ಎಲ್ ಎಂ ಖೌಟೆ ಮತ್ತು ತಂಗಜಮ್ ಅರುಣ್ಕುಮಾರ್ ಬಿಜೆಪಿ ಸೇರ್ಪಡೆಯಾಗಿರುವ ಶಾಸಕರಾಗಿದ್ದಾರೆ. ಇನ್ನು, ಬಿಹಾರದಲ್ಲಿ ಬಿಜೆಪಿ ಮತ್ತು ಜೆಡಿಯು ಮೈತ್ರಿ ಮುರಿದು ಬಿದ್ದ ಬೆನ್ನಲ್ಲೇ ಮಣಿಪುರದಲ್ಲೂ ಜೆಡಿಯು ಶಾಸಕರು ಬಿಜೆಪಿಗೆ ನೀಡಿದ್ದ ಬೆಂಬಲ ವಾಪಸ್ ಪಡೆದುಕೊಳ್ಳುತ್ತಾರೆಂಬ ಮಾತು ಕೇಳಿ ಬರಲು ಶುರುವಾಗಿತ್ತು. ಆದರೆ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಶಾಕ್ ನೀಡಿರುವ ಶಾಸಕರು, ಬಿಜೆಪಿ ಸೇರ್ಪಡೆಯಾಗಿದ್ದಾರೆ. ಮಣಿಪುರದಲ್ಲಿ ಸದ್ಯ ಬಿರೇನ್ ಸಿಂಗ್ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರ ನಡೆಸುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


