ಪತ್ರಕರ್ತನಿಗೆ ಗುಂಡಿಕ್ಕಿ ಹತ್ಯೆ ನಿಜಕ್ಕೂ ದುಃಖಕರ: ಬಿಹಾರ ಸಿಎಂ ನಿತೀಶ್ ಕುಮಾರ್
ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ಪತ್ರಕರ್ತರೊಬ್ಬರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಾಟ್ನಾ: ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ಪತ್ರಕರ್ತರೊಬ್ಬರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಿಂದಿ ದಿನಪತ್ರಿಕೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ವಿಮಲ್ ಕುಮಾರ್ ಯಾದವ್(35) ಅವರರನ್ನು ಪ್ರೇಮನಗರದ ಅವರ ನಿವಾಸದಲ್ಲಿಯೇ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ದುಷ್ಕರ್ಮಿಗಳು ಇಂದು ಬೆಳಗಿನ ಜಾವ 5.30 ರ ಸುಮಾರಿಗೆ ಯಾದವ್ ಅವರ ಮನೆಗೆ ತೆರಳಿದ್ದು, ಅವರು ಗೇಟ್ ತೆರೆದ ತಕ್ಷಣ ಗುಂಡಿನ ದಾಳಿ ನಡೆಸಿದ್ದಾರೆ" ಎಂದು ಬಿಹಾರ ಪೊಲೀಸರು ಟ್ವೀಟ್ ಮಾಡಿದ್ದಾರೆ.
ಯಾದವ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದು, ಸುದ್ದಿ ತಿಳಿದು ಜಿಲ್ಲಾ ಪೊಲೀಸ್ ಮುಖ್ಯಸ್ಥರು ಮತ್ತು ಸಂಬಂಧಪಟ್ಟ ರಾಣಿಗಂಜ್ ಪೊಲೀಸ್ ಠಾಣೆಯ ಎಸ್‌ಎಚ್‌ಒ ಅವರು ಪತ್ರಕರ್ತನ ನಿವಾಸಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ತನಿಖೆ ನಡೆಯುತ್ತಿದೆ. ವಿಧಿವಿಜ್ಞಾನ ತಜ್ಞರು ಮತ್ತು ಶ್ವಾನದಳವನ್ನು ಸ್ಥಳಕ್ಕೆ ಕರೆಸಲಾಗಿದೆ. ಯಾದವ್ ಅವರು ನೆರೆಹೊರೆಯವರೊಂದಿಗೆ ಹಿಂದೆ ಯಾವುದಾದರೂ ಜಗಳದಲ್ಲಿ ಭಾಗಿಯಾಗಿದ್ದರೇ ಎಂಬುದು ಸೇರಿದಂತೆ ಎಲ್ಲಾ ಕೋನಗಳಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಅರಾರಿಯಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕುಮಾರ್ ಸಿಂಗ್ ಅವರು ತಿಳಿಸಿದ್ದಾರೆ.
ಘಟನೆ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು, ಘಟನೆಯಿಂದ ನನಗೆ ನಿಜಕ್ಕೂ ತುಂಬಾ ದುಃಖವಾಗಿದೆ. ತಕ್ಷಣ ಘಟನೆಯ ಬಗ್ಗೆ ಪರಿಶೀಲಿಸಲು ಸಂಬಂಧಿಸಿದ ಅಧಿಕಾರಿಗಳನ್ನು ಸೂಚಿಸಿದ್ದೇನೆ. ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರನ್ನು ಶಿಕ್ಷೆಗೆ ಒಳಪಡಿಸಲಾಗುವುದು" ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


