ಹಿಂಸಾಚಾರ ಬಳಿಕ ಸಹಜ ಸ್ಥಿತಿಗೆ ಮರಳಿದ ಕೊಲ್ಲಾಪುರ: ಎಲ್ಲೆಡೆ ಬಿಗಿ ಭದ್ರತೆ ಮುಂದುವರಿಕೆ
ಹಿಂಸಾಚಾರಕ್ಕೆ ಸಾಕ್ಷಿಯಾದ ಮಹಾರಾಷ್ಟ್ರದ ಕೊಲ್ಹಾಪುರ ಗುರುವಾರ ಸಹಜ ಸ್ಥಿತಿಗೆ ಮರಳಿದ್ದು, ಮುಂಜಾಗ್ರತಾ ಕ್ರಮವಾಗಿ ಎಲ್ಲೆಡೆ ಬಿಗಿಭದ್ರತೆ ಮುಂದುವರೆಸಲಾಗಿದೆ ಎಂದು ತಿಳಿದುಬಂದಿದೆ.

ಪುಣೆ: ಹಿಂಸಾಚಾರಕ್ಕೆ ಸಾಕ್ಷಿಯಾದ ಮಹಾರಾಷ್ಟ್ರದ ಕೊಲ್ಹಾಪುರ ಗುರುವಾರ ಸಹಜ ಸ್ಥಿತಿಗೆ ಮರಳಿದ್ದು, ಮುಂಜಾಗ್ರತಾ ಕ್ರಮವಾಗಿ ಎಲ್ಲೆಡೆ ಬಿಗಿಭದ್ರತೆ ಮುಂದುವರೆಸಲಾಗಿದೆ ಎಂದು ತಿಳಿದುಬಂದಿದೆ.
ಪರಿಸ್ಥಿತಿ ತಿಳಿಗೊಂಡಿರುವ ಹಿನ್ನೆಲೆಯಲ್ಲಿ ನಿಧಾನಗತಿಯಲ್ಲಿ ಇಂಟರ್ನೆಟ್ ಸೇವೆಗಳನ್ನು ಪುನರಾರಂಭಿಸಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ.
ಟಿಪ್ಪು ಸುಲ್ತಾನ್ ಮತ್ತು ಔರಂಗಜೇಬ್ ಫೋಟೋ ಹಾಗೂ ಆಡಿಯೋವುಳ್ಳ ವಾಟ್ಸ್‌ಆ್ಯಪ್ ಸ್ಟೇಟಸ್ ವಿರುದ್ಧ ಬುಧವಾರ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು, ಈ ಪ್ರತಿಭಟನೆ ವೇಳೆ ಕಲ್ಲು ತೂರಾಟ ನಡೆದಿದ್ದು, ಬಳಿಕ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಈ ಹಿನ್ನೆಲೆಯಲ್ಲಿ ಕೊಲ್ಹಾಪುರದಲ್ಲಿ ಕರ್ಫ್ಯೂ ಜಾರಿ ಮಾಡಲಾಗಿತ್ತು.
ಕೊಲ್ಹಾಪುರ ಪೊಲೀಸ್ ವರಿಷ್ಠಾಧಿಕಾರಿ ಮಹೇಂದ್ರ ಪಂಡಿತ್ ಮಾತನಾಡಿ, ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದ್ದು, ದೈನಂದಿನ ವ್ಯಾಪಾರ ವಹಿವಾಟುಗಳು ಎಂದಿನಂತೆ ಆರಂಭವಾಗಿದೆ ಎಂದು ಹೇಳಿದ್ದಾರೆ.
ಶುಕ್ರವಾರ ಬೆಳಿಗ್ಗೆ 10 ಗಂಟೆಯವರೆಗೆ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಮರಳಿ ಸೇವೆಗಳ ಪುನರ್ ಸ್ಥಾಪನೆಗೆ ಸಮಯ ತೆಗೆದುಕೊಳ್ಳುತ್ತದೆ ಎಂದು ತಿಳಿಸಿದ್ದಾರೆ.
ಹಿಂಸಾಚಾರ ಪ್ರಕರಣದ ತನಿಖೆ ಕುರಿತು ಮಾತನಾಡಿದ, ಪ್ರಕರಣ ಸಂಬಂಧ ಕೆಲವರನ್ನು ಗುರ್ತಿಸಲಾಗಿದೆ. ಆದರೆ, ಅವರು ತಲೆಮರೆಸಿಕೊಂಡಿದ್ದಾರೆ. ಹಿಂಸಾಚಾರ ನಡೆದ ಸ್ಥಳದ ಸುತ್ತಮುತ್ತಲಿನ ಅಂಗಡಿಗಳಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ. ಶಂಕಿತರನ್ನು ಗುರುತಿಸುವ ಪ್ರಕ್ರಿಯೆ ಮುಂದುವರೆದಿದೆ ಎಂದು ಮಾಹಿತಿ ನೀಡಿದ್ದಾರೆ.
ಮುನ್ನೆಚ್ಚರಿಕೆ ಕ್ರಮವಾಗಿ ನಗರದ ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕೊಲ್ಹಾಪುರ ನಗರ ಮತ್ತು ಜಿಲ್ಲೆಯಲ್ಲಿ ಸೂಕ್ಷ್ಮ ಸ್ಥಳಗಳಲ್ಲಿ ಪೊಲೀಸ್ ನಿಯೋಜನೆ ಮುಂದುವರಿದಿದೆ, ಒಟ್ಟು 60 ಪೊಲೀಸ್ ಅಧಿಕಾರಿಗಳು. 300 ಇತರ ಸಿಬ್ಬಂದಿ ನಗರದಲ್ಲಿ ಭಧ್ರತೆಗೆ ನಿಯೋಜನೆಗೊಂಡಿದ್ದಾರೆ. 1000 ಕ್ಕೂ ಹೆಚ್ಚು ಗೃಹ ರಕ್ಷಕರು ಜಿಲ್ಲೆಯಲ್ಲಿ ಗಸ್ತು ತಿರುಗುತ್ತಿದ್ದಾರೆ. ಜೊತೆಗೆ, ರಾಜ್ಯ ಮೀಸಲು ಪೊಲೀಸ್ ಪಡೆ (ಎಸ್‌ಆರ್‌ಪಿಎಫ್)ಯನ್ನೂ ಕೂಡ ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


