ಉತ್ತರಕಾಶಿಯಲ್ಲಿ ನಿರ್ಮಾಣ ಹಂತದ ಸುರಂಗ ಕುಸಿತ ಪ್ರಕರಣ: 40 ಮಂದಿ ಕಾರ್ಮಿಕರು ಸುರಕ್ಷಿತ, ಆಹಾರ, ನೀರು ಪೂರೈಕೆ
ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿರುವಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಾಣ ಹಂತದಲ್ಲಿರುವ ಸುರಂಗ ಕುಸಿದು 30 ಗಂಟೆ ಕಳೆದಿದ್ದು, ಅದೃಷ್ಟವಶಾತ್ ಸುರಂಗದಲ್ಲಿ ಸಿಲುಕಿಕೊಂಡಿದ್ದ 40 ಮಂದಿ ಕಾರ್ಮಿಕರು ಸುರಕ್ಷಿತರಾಗಿದ್ದಾರೆಂದು ತಿಳಿದುಬಂದಿದೆ.

ಉತ್ತರಕಾಶಿ (ಉತ್ತರಾಖಂಡ): ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿರುವ ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಾಣ ಹಂತದಲ್ಲಿರುವ ಸುರಂಗ ಕುಸಿದು 30 ಗಂಟೆ ಕಳೆದಿದ್ದು, ಅದೃಷ್ಟವಶಾತ್ ಸುರಂಗದಲ್ಲಿ ಸಿಲುಕಿಕೊಂಡಿದ್ದ 40 ಮಂದಿ ಕಾರ್ಮಿಕರು ಸುರಕ್ಷಿತರಾಗಿದ್ದಾರೆಂದು ತಿಳಿದುಬಂದಿದೆ.
ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಸಿಬ್ಬಂದಿಗಳು ಕಾರ್ಮಿಕರೊಂದಿಗೆ ಸಂಪರ್ಕ ಸಾಧಿಸಿದ್ದು, ಎಲ್ಲರೂ ಸುರಕ್ಷಿತರಾಗಿದ್ದಾರೆಂದು ತಿಳಿಸಿದ್ದಾರೆ.
“ಸುರಂಗದಲ್ಲಿ ಸಿಲುಕಿರುವವರ ರಕ್ಷಣೆಗೆ ಕಾರ್ಯಾಚರಣೆ ನಡೆಯುತ್ತಿದೆ. ಒಳಗಿರುವ 40 ಕಾರ್ಮಿಕರ ಜೊತೆ ಸಂಪರ್ಕ ಸಾಧಿಸಲಾಗಿದೆ. ನಾವೆಲ್ಲರೂ ಸುರಕ್ಷಿತವಾಗಿದ್ದೇವೆ ಎಂದು ಕಾರ್ಮಿಕರು ನಮಗೆ ಮಾಹಿತಿ ನೀಡಿದ್ದಾರೆ. ಕುಸಿದಿರುವ ಸುರಂಗದೊಳಗೆ ಅವಶೇಷಗಳನ್ನು ತೆಗೆಯುತ್ತ 15 ಮೀಟರ್ ಸಾಗಿದ್ದೇವೆ. ಇನ್ನೂ 35 ಮೀಟರ್ ಕೊರೆದು, ಒಳಗೆ ಹೋಗಿ ಕಾರ್ಮಿಕರನ್ನು ರಕ್ಷಿಸುತ್ತೇವೆ. ಅವರಿಗೆ ನೀರು, ಆಹಾರ, ಕೃತಕ ಆಮ್ಲಜನಕ ಸೇರಿ ಹಲವು ಮೂಲ ಸೌಕರ್ಯಗಳನ್ನು ಒದಗಿಸಲಾಗಿದೆ” ಎಂದು ಉತ್ತರಕಾಶಿ ಸರ್ಕಲ್ ಆಫೀಸರ್ ಪ್ರಶಾಂತ್ ಕುಮಾರ್ ಅವರು ಹೇಳಿದ್ದಾರೆ.
ಉತ್ತರಕಾಶಿ ಜಿಲ್ಲೆಯ ಸಿಲ್‌ಕ್ಯಾರ ಹಾಗೂ ದಂಡಲ್‌ಗಾಂವ್‌ಗೆ ಸಂಪರ್ಕ ಕಲ್ಪಿಸಲು ಚಾರ್ ಧಾಮ್ ರಸ್ತೆ ಯೋಜನೆ ಅಡಿಯಲ್ಲಿ ಸುರಂಗ ಮಾರ್ಗ ನಿರ್ಮಿಸಲಾಗುತ್ತಿದೆ. ಸುಮಾರು 4.5 ಕಿಲೋ ಮೀಟರ್ ದೂರದ ಸುರಂಗ ನಿರ್ಮಾಣದ ವೇಳೆ ಸುಮಾರು 150 ಮೀಟರ್ ಉದ್ದದ ಸುರಂಗ ಕುಸಿದು ಬಿದ್ದಿತ್ತು. ಭಾನುವಾರ ಬೆಳಗಿನ (ನವೆಂಬರ್ 12) ಜಾವ 4 ಗಂಟೆ ಸುಮಾರಿಗೆ ಸುರಂಗ ಕುಸಿದಿ ಬಿದ್ದಿತ್ತು. ಕೂಡಲೇ ರಕ್ಷಣಾ ಸಿಬ್ಬಂದಿಯು ಸ್ಥಳಕ್ಕೆ ಆಗಮಿಸಿ, ಕಾರ್ಯಾಚರಣೆ ಆರಂಭಿಸಿದೆ.
ಸ್ಥಳಕ್ಕೆ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಭೇಟಿ, ಪರಿಶೀಲನೆ
ಈ ನಡುವೆ ಘಟನಾ ಸ್ಥಳಕ್ಕೆ ಉತ್ತರಾಖಂಡ ರಾಜ್ಯದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಭೇಟಿ ನೀಡಿದ್ದು, ರಕ್ಷಣಾ ಕಾರ್ಯಾಚರಣೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ.
ಸ್ಥಳ ಪರಿಶೀಲನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರಕಾಶಿ-ಯಮನೋತ್ರಿ ರಸ್ತೆಯಲ್ಲಿರುವ ಸಿಲ್ಕ್ಯಾರಾ ಸುರಂಗದಲ್ಲಿ 40 ಮಂದಿ ಸಿಕ್ಕಿಬಿದ್ದಿದ್ದಾರೆ. ಎಲ್ಲರೂ ಸುರಕ್ಷಿತರಾಗಿದ್ದು, ಆಕ್ಸಿಜನ್ ಜೊತೆಗೆ ಆಹಾರ ಮತ್ತು ನೀರನ್ನು ನಿರಂತರವಾಗಿ ಒದಗಿಸಲಾಗುತ್ತಿದೆ. ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರೊಂದಿಗೆ ಸಂವಹನ ನಡೆಸಲಾಗುತ್ತಿದೆ. ಎಲ್ಲರನ್ನು ಶೀಘ್ರದಲ್ಲೇ ರಕ್ಷಿಸಲಾಗುವುದು ಎಂದು ಭರವಸೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


