ದೇಶ

ಸ್ಕಿಲ್ ಡೆವಲೆಪ್ಮೆಂಟ್ ಸ್ಕೀಮ್ ಹಗರಣ: 'ಸುಪ್ರೀಂ' ಮೊರೆ ಹೋದ ಆಂಧ್ರ ಪ್ರದೇಶ ಮಾಜಿ ಸಿಎಂ ಚಂದ್ರಬಾಬು ನಾಯ್ಡು, ಪ್ರಕರಣ ರದ್ದು ಕೋರಿ ಅರ್ಜಿ!

ಆಂಧ್ರಪ್ರದೇಶದ ಕೌಶಲ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಗೊಳಿಸುವಂತೆ ಕೋರಿ ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಅವರು ಶನಿವಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

ಸ್ಕಿಲ್ ಡೆವಲೆಪ್ಮೆಂಟ್ ಸ್ಕೀಮ್ ಹಗರಣ: 'ಸುಪ್ರೀಂ' ಮೊರೆ ಹೋದ ಆಂಧ್ರ ಪ್ರದೇಶ ಮಾಜಿ ಸಿಎಂ ಚಂದ್ರಬಾಬು ನಾಯ್ಡು, ಪ್ರಕರಣ ರದ್ದು ಕೋರಿ ಅರ್ಜಿ!
ಆಂಧ್ರ ಮಾಜಿ ಸಿಎಂ ಚಂದ್ರಬಾಬು ನಾಯ್ಡು
Published On :

ಅಮರಾವತಿ: ಆಂಧ್ರಪ್ರದೇಶದ ಕೌಶಲ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಗೊಳಿಸುವಂತೆ ಕೋರಿ ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಅವರು ಶನಿವಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

ಆಂಧ್ರಪ್ರದೇಶದ ಮಾಜಿ ಸಿಎಂ ಮತ್ತು ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರು ಕೌಶಲ್ಯಾಭಿವೃದ್ಧಿ ಹಗರಣದ ಆರೋಪದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಶನಿವಾರ ಅರ್ಜಿ ಸಲ್ಲಿಸಿದ್ದಾರೆ. ಶುಕ್ರವಾರವಷ್ಟೇ ಅವರ ಅರ್ಜಿಯನ್ನು ಆಂಧ್ರಪ್ರದೇಶ ಹೈಕೋರ್ಟ್ ವಜಾಗೊಳಿಸಿತ್ತು. ಹೀಗಾಗಿ ಚಂದ್ರಬಾಬು ನಾಯ್ಡು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

ಅರ್ಜಿ ವಜಾಗೊಳಿಸಿದ್ದ ಹೈಕೋರ್ಟ್
ಇದೇ ಪ್ರಕರಣಕ್ಕೆ ಸಂಬಂಧಿಸಿ ಶುಕ್ರವಾರ ಅರ್ಜಿ ವಿಚಾರಣೆ ನಡೆಸಿದ್ದ ಆಂಧ್ರಪ್ರದೇಶ ಹೈಕೋರ್ಟ್, ಚಂದ್ರಬಾಬು ನಾಯ್ಡು ಅವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತ್ತು. ಜತೆಗೆ, ಭ್ರಷ್ಟಾಚಾರ ನಿಗ್ರಹ ದಳದ ವಿಶೇಷ ನ್ಯಾಯಾಲಯವು, ನಾಯ್ಡು ಅವರನ್ನು ಎರಡು ದಿನ ಸಿಐಡಿ ವಶಕ್ಕೆ ಒಪ್ಪಿಸಿ, ಆದೇಶ ಹೊರಡಿಸಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ್ದ ಎಸಿಬಿ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಜಿ. ಹಿಮಬಿಂದು ಅವರು, ನಾಯ್ಡು ಅವರನ್ನು ಎರಡು ದಿನಗಳ ಕಾಲ ಸಿಐಡಿ ವಶಕ್ಕೆ ನೀಡಲಾಗಿದ್ದು, ರಾಜಮಹೇಂದ್ರವರಂ ಕೇಂದ್ರೀಯ ಕಾರಾಗೃಹದಲ್ಲಿ ಅವರನ್ನು ಬೆಳಿಗ್ಗೆ 9.30ರಿಂದ ಸಂಜೆ ಐದು ಗಂಟೆವರೆಗೆ ಸಿಐಡಿ ವಿಚಾರಣೆ ನಡೆಸಲಿದೆ ಎಂದು ಹೇಳಿದ್ದರು.

ಅಲ್ಲದೆ, ನಾಯ್ಡು ವಿಚಾರಣೆ ಪೂರ್ಣವಾದ ಬಳಿಕ ಅವರನ್ನು ಮತ್ತೆ ನ್ಯಾಯಾಲಯದ ಮುಂದೆ ಹಾಜರು ಪಡಿಸಬೇಕು. ಈ ವಿಚಾರಣೆಯ ವಿಸ್ತೃತ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಬೇಕು. ಪ್ರಕರಣದ ತನಿಖಾಧಿಕಾರಿಗಳು, ವಿಡಿಯೊ ಮತ್ತು ಫೋಟೊಗಳನ್ನು ಬಹಿರಂಗಪಡಿಸಬಾರದು ಎಂದು ಸಿಐಡಿ ಅಧಿಕಾರಿಗಳಿಗೆ ನ್ಯಾಯಾಲಯ ಸೂಚಿಸಿತ್ತು.

ಜೈಲಿನಲ್ಲೇ ವಿಚಾರಣೆ
ಆಂಧ್ರಪ್ರದೇಶದ ಕೌಶಲ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎನ್‌.ಚಂದ್ರಬಾಬು ನಾಯ್ಡು ಅವರ ವಿಚಾರಣೆಯನ್ನು ಅಪರಾಧ ತನಿಖಾ ದಳ (ಸಿಐಡಿ) ಶನಿವಾರ ಜೈಲಿನಲ್ಲೇ ಆರಂಭಿಸಿದೆ. ನಾಯ್ಡು ಪರ ವಕೀಲ ಡಿ.ಶ್ರೀನಿವಾಸ್‌ ಅವರ ಉಪಸ್ಥಿತಿಯಲ್ಲಿ ಬೆಳಿಗ್ಗೆ 9.30ರಿಂದ ಸಂಜೆ 5ರ ವರೆಗೆ ವಿಚಾರಣೆಗೆ ಅವಕಾಶ ಕಲ್ಪಿಸಲಾಗಿದೆ. ಅಷ್ಟಲ್ಲದೆ ವಿಚಾರಣೆ ಸಂದರ್ಭದ ವಿಡಿಯೊ ಮತ್ತು ಫೋಟೊಗಳನ್ನು ಬಹಿರಂಗಪಡಿಸದಂತೆಯೂ ನಿರ್ದೇಶನ ನೀಡಿದೆ. ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥರೂ ಆಗಿರುವ ನಾಯ್ಡು ಅವರು ಸದ್ಯ ರಾಜಮಹೇಂದ್ರವರಂ ಕೇಂದ್ರೀಯ ಕಾರಾಗೃಹದಲ್ಲಿದ್ದಾರೆ. 12 ಅಧಿಕಾರಿಗಳನ್ನೊಳಗೊಂಡ ಸಿಐಡಿ ತಂಡ ಜೈಲಿನಲ್ಲೇ ಬೆಳಿಗ್ಗೆ 9.30ಕ್ಕೆ ವಿಚಾರಣೆ ಆರಂಭಿಸಿದೆ.

ಕೌಶಲ ಅಭಿವೃದ್ಧಿ ನಿಗಮದ ಹಣ ದುರ್ಬಳಕೆಯಿಂದಾಗಿ ರಾಜ್ಯ ಸರ್ಕಾರದ ಬೊಕ್ಕಸಕ್ಕೆ 300 ಕೋಟಿ ರೂಗೂ ಹೆಚ್ಚು ನಷ್ಟವಾಗಿದೆ ಎನ್ನಲಾಗಿದ್ದು, ಈ ಪ್ರಕರಣ ಸಂಬಂಧ ಸೆ.9ರಂದು ನಾಯ್ಡು ಅವರನ್ನು ಬಂಧಿಸಲಾಗಿದೆ.
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.