ಮಹಾರಾಷ್ಟ್ರ: ಚಲಿಸುತ್ತಿದ್ದ ಬಸ್'ಗೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡು 25 ಮಂದಿ ದುರ್ಮರಣ, 8 ಪ್ರಯಾಣಿಕರಿಗೆ ಗಾಯ
ಚಲಿಸುತ್ತಿದ್ದ ಬಸ್'ವೊಂದಕ್ಕೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡ ಪರಿಣಾಮ 25 ಮಂದಿ ಸಜೀವ ದಹನವಾಗಿ, 8 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರ ಸಮೃದ್ಧಿ ಮಹಾಮಾರ್ಗ್ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಶನಿವಾರ ನಡೆದಿದೆ.

ಮುಂಬೈ: ಚಲಿಸುತ್ತಿದ್ದ ಬಸ್'ವೊಂದಕ್ಕೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡ ಪರಿಣಾಮ 25 ಮಂದಿ ಸಜೀವ ದಹನವಾಗಿ, 8 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರ ಸಮೃದ್ಧಿ ಮಹಾಮಾರ್ಗ್ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಶನಿವಾರ ನಡೆದಿದೆ.
ಬುಲ್ಧಾನ ಜಿಲ್ಲೆಯ ಸಿಂಧಖೇದರಾಜ ಬಳಿಯ ಪಿಂಪಲಖುಟಾ ಗ್ರಾಮದ ಬಳಿ ಸಮೃದ್ಧಿ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಈ ಪ್ರಯಾಣಿಕರ ಬಸ್ ನಾಗ್ಪುರದಿಂದ ಪುಣೆಗೆ ಹೋಗುತ್ತಿತ್ತು ಎನ್ನಲಾಗಿದ್ದು, ಇಂದು ಬೆಳಗಿನ ಜಾವ 2 ಗಂಟೆಗೆ ಸುಮಾರಿಗೆ ಈ ಭೀಕರ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ಅಪಘಾತಕ್ಕೀಡಾದ ಬಸ್ ವಿದರ್ಭ ಟ್ರಾವೆಲ್ಸ್ಗೆ ಸೇರಿದ್ದಾಗಿದ್ದು, ಬಸ್‌ನಲ್ಲಿ ನಾಗ್ಪುರ, ವಾರ್ಧಾ ಮತ್ತು ಯವತ್ಮಾಲ್‌ನಿಂದ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ವರದಿಗಳು ತಿಳಿಸಿವೆ.
ಸಿಂಧಖೇಡರಾಜ ಸಮೀಪದ ಪಿಂಪಲಖುಟಾ ಗ್ರಾಮದ ಬಳಿ ಸಮೃದ್ಧಿ ಹೆದ್ದಾರಿಯಲ್ಲಿ ಬಸ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ಬಸ್'ಗೆ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಕಾಣಿಸಿಕೊಂಡ ನಂತರ ಕೇವಲ ಎಂಟು ಮಂದಿ ಪ್ರಯಾಣಿಕರು ಮಾತ್ರ ಹೊರಬರಲು ಸಾಧ್ಯವಾಗಿದೆ. ಇನ್ನುಳಿದ 25 ಮಂದಿ ಪ್ರಯಾಣಿಕರು ಸಜೀವ ದಹನವಾಗಿದ್ದಾರೆ.
ಇದನ್ನೂ ಓದಿ: ಮಹಾರಾಷ್ಟ್ರ ಬಸ್ ದುರಂತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ರೂ.2 ಲಕ್ಷ, ರಾಜ್ಯ ಸರ್ಕಾರದಿಂದ ರೂ.5 ಲಕ್ಷ ಪರಿಹಾರ ಘೋಷಣೆ
ಇನ್ನು ಬಸ್ಗೆ ಬೆಂಕಿ ಬಿದ್ದ ಸುದ್ದಿ ತಿಳಿದ ಪೊಲೀಸರು ಮತ್ತು ಅಗ್ನಿ ಶಾಮಕದಳ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡರು. ಬಸ್ಸಿನಿಂದ 25 ಮೃತದೇಹಗಳನ್ನು ಹೊರತೆಗೆದು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಅಲ್ಲದೆ, ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಗೊಂಡಿದ್ದ 8 ಮಂದಿಯ ಪೈಕಿ ಇದೀಗ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಇದರೊಂದಿಗೆ ಮೃತರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ.
ಘಟನೆ ವೇಳೆ ಬಸ್ಸಿನಲ್ಲಿ ಒಟ್ಟು 33 ಜನರು ಪ್ರಯಾಣಿಸುತ್ತಿದ್ದರು ಎಂದು ಎನ್ನಲಾಗಿದೆ. ಗಾಯಾಳುಗಳನ್ನು ಬುಲ್ಧಾನ ಸಿವಿಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಬುಲ್ಧಾನ ಪೊಲೀಸ್ ಉಪ ಎಸ್ಪಿ ಬಾಬುರಾವ್ ಮಹಾಮುನಿ ತಿಳಿಸಿದ್ದಾರೆ.
ಸುರಕ್ಷಿತವಾಗಿ ಪಾರಾದವರಲ್ಲಿ ಚಾಲಕ ಮತ್ತು ಸಹಾಯಕ ಸೇರಿದ್ದಾರೆ. ಇದೇ ವೇಳೆ ಗಾಯಾಳುಗಳನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿಯ ಪ್ರಕಾರ, ಈ ಪ್ರಯಾಣಿಕರಲ್ಲಿ ಹೆಚ್ಚಿನವರು ನಾಗ್ಪುರ, ವಾರ್ಧಾ ಮತ್ತು ಯವತ್ಮಾಲ್ ನಿವಾಸಿಗಳಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಬಸ್ ಮೊದಲು ಕಬ್ಬಿಣದ ಕಂಬಕ್ಕೆ ಡಿಕ್ಕಿ ಹೊಡೆದು ನಂತರ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ ಪಲ್ಟಿಯಾಗಿದೆ. ಬಳಿಕ ಬದುಕುಳಿದ ಪ್ರಯಾಣಿಕರು ಬಸ್ಸಿನ ಬಾಗಿಲು ಒದ್ದು ಮತ್ತು ಗಾಜುಗಳನ್ನು ಒಡೆದು ಹೊರಬಂದಿದ್ದಾರೆಂದು ತಿಳಿದುಬಂದಿದೆ.
ಅಪಘಾತದ ನಂತರ ಬಸ್ಸಿನಿಂದ ಹೆಚ್ಚಿನ ಪ್ರಮಾಣದ ಡೀಸೆಲ್ ರಸ್ತೆಯ ಮೇಲೆ ಸೋರಿಕೆಯಾಗಿದೆ. ಈ ವೇಳೆ ಬಸ್ನ ಇಂಜಿನ್ನಲ್ಲಿ ಸ್ಪಾರ್ಕ್ ಆಗಿ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಬಸ್‌ನಿಂದ 25 ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಬಸ್ಸಿನಿಂದ ಹೊರತೆಗೆದ ಮೃತದೇಹಗಳನ್ನು ಗುರುತಿಸುವುದು ಕಷ್ಟವಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಈ ಘಟನೆ ಕುರಿತು ಬುಲ್ಧಾನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮೃತರ ಸಂಬಂಧಿಗಳಿಗೆ ಮಾಹಿತಿ ರವಾನಿಸುವ ಕಾರ್ಯವನ್ನು ಕೈಗೊಂಡಿದ್ದಾರೆ. ಸುದ್ದಿ ತಿಳಿದ ಕುಟುಂಬಸ್ಥರು ಬುಲ್ಧಾನ್ನ ಸರ್ಕಾರಿ ಆಸ್ಪತ್ರೆಗೆ ದೌಡಾಯಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


