ಮಣಿಪುರದ ಇಬ್ಬರು ಮಹಿಳೆಯರ ವಿವಸ್ತ್ರಗೊಳಿಸಿ ಮೆರವಣಿಗೆ; ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಂತ್ರಸ್ತೆಯರು
ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ, ಮೆರವಣಿಗೆ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಬ್ಬರು ಸಂತ್ರಸ್ತೆಯರು ಇದೀಗ ಕೇಂದ್ರ ಮತ್ತು ಮಣಿಪುರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

ನವದೆಹಲಿ: ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ, ಮೆರವಣಿಗೆ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಬ್ಬರು ಸಂತ್ರಸ್ತೆಯರು ಇದೀಗ ಕೇಂದ್ರ ಮತ್ತು ಮಣಿಪುರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ನ್ಯಾಯಯುತ ಮತ್ತು ನಿಷ್ಪಕ್ಷಪಾತ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶಿಸಬೇಕು ಎಂದು ಇಬ್ಬರು ಮಹಿಳೆಯರು ಸಲ್ಲಿಸಿರುವ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ. ಸದ್ಯದ ಕಾನೂನಿನ ಪ್ರಕಾರ ತಮ್ಮ ಗುರುತನ್ನು ಗೌಪ್ಯವಾಗಿಡಬೇಕೆಂದು ವಿನಂತಿಸಿದ್ದಾರೆ.
ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠ ಇಂದು ಅರ್ಜಿಯ ವಿಚಾರಣೆ ನಡೆಸಲಿದೆ.
ಕಲಹ ಪೀಡಿತ ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ, ಮೆರವಣಿಗೆ ಮಾಡಿದ ಪ್ರಕರಣವನ್ನು ಬೇರೆ ರಾಜ್ಯಕ್ಕೆ ವರ್ಗಾಯಿಸುವಂತೆ ಕೇಂದ್ರ ಸರ್ಕಾರ ಮಾಡಿರುವ ಮನವಿಯನ್ನು ಕೂಡ ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಲಿದೆ.
ಇದನ್ನೂ ಓದಿ: ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ: ಸರ್ಕಾರ ಕ್ರಮ ಕೈಗೊಳ್ಳದಿದ್ದರೇ ನಾವು ಕೈಗೊಳ್ಳುತ್ತೇವೆ- ಸುಪ್ರೀಂ ಕೋರ್ಟ್ ಎಚ್ಟರಿಕೆ
ಮಣಿಪುರದಲ್ಲಿ ಮೇ 4ರಂದು ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ ವೈರಲ್ ವಿಡಿಯೋಗೆ ಸಂಬಂಧಿಸಿದಂತೆ ಯಾವ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬುದನ್ನು ತಿಳಿಸುವಂತೆ ಕೇಂದ್ರ ಮತ್ತು ಮಣಿಪುರ ಸರ್ಕಾರವನ್ನು ಜುಲೈ 20 ರಂದು ಸುಪ್ರೀಂ ಕೋರ್ಟ್ ಕೇಳಿದೆ. ಈ ಘಟನೆಯು ಬಹುದೊಡ್ಡ ಸಾಂವಿಧಾನಿಕ ಮತ್ತು ಮಾನವ ಹಕ್ಕುಗಳ ಉಲ್ಲಂಘನೆ ಎಂದು ಬಣ್ಣಿಸಿದೆ.
ಇದಕ್ಕೆ ಕೇಂದ್ರ ಸರ್ಕಾರ ಗುರುವಾರ ಉತ್ತರ ಸಲ್ಲಿಸಿದ್ದು, ಘಟನೆಯನ್ನು ಸಿಬಿಐ ತನಿಖೆಗೆ ವರ್ಗಾಯಿಸಲಾಗಿದೆ ಮತ್ತು ವಿಚಾರಣೆ ಸೇರಿದಂತೆ ಘಟನೆಗೆ ಸಂಬಂಧಿಸಿದ ಎಲ್ಲಾ ಪ್ರಕರಣಗಳನ್ನು ಮಣಿಪುರದಿಂದ ಹೊರಗೆ ಯಾವುದೇ ರಾಜ್ಯಕ್ಕೆ ವರ್ಗಾಯಿಸುವಂತೆ ಮನವಿ ಮಾಡಿದೆ.
ಇದನ್ನೂ ಓದಿ: ಮಣಿಪುರ ನಗ್ನ ವೈರಲ್ ವಿಡಿಯೋ ಪ್ರಕರಣ: ಸಿಬಿಐ ತನಿಖೆಗೆ ಆದೇಶ; ಮಣಿಪುರದಿಂದ ಹೊರಗೆ ವಿಚಾರಣೆ ಕೋರಿ ಸುಪ್ರೀಂ'ಗೆ ಮನವಿ
ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರು ಸಲ್ಲಿಸಿರುವ ಅಫಿಡವಿಟ್‌ನಲ್ಲಿ, 'ರಾಜ್ಯ ಸರ್ಕಾರದ ಒಪ್ಪಿಗೆಯೊಂದಿಗೆ ಕೇಂದ್ರ ಸರ್ಕಾರವು ತನಿಖೆಯನ್ನು ಸ್ವತಂತ್ರ ತನಿಖಾ ಸಂಸ್ಥೆಗೆ ಅಂದರೆ ಸಿಬಿಐಗೆ ವಹಿಸುವ ನಿರ್ಧಾರ ತೆಗೆದುಕೊಂಡಿದೆ' ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


