ದೇಶ

ನ್ಯೂಸ್‌ಕ್ಲಿಕ್: ಯುಎಪಿಎ ಅಡಿ ಬಂಧನ ಪ್ರಶ್ನಿಸಿದ ಪುರಕಾಯಸ್ಥ, ಚಕ್ರವರ್ತಿ; ದೆಹಲಿ ಪೊಲೀಸರ ಪ್ರತಿಕ್ರಿಯೆ ಕೇಳಿದ 'ಸುಪ್ರೀಂ'

ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರಕಾಯಸ್ಥ ಮತ್ತು ಅದರ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರು ಯುಎಪಿಎ ಅಡಿಯಲ್ಲಿ ತಮ್ಮನ್ನು ಬಂಧಿಸಿರುವುದನ್ನು ವಿರೋಧಿಸಿ ಸಲ್ಲಿಸಿದ ಮನವಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಬುಧವಾರ ದೆಹಲಿ ಪೊಲೀಸರ ಪ್ರತಿಕ್ರಿಯೆ ಕೇಳಿದೆ.

ನ್ಯೂಸ್‌ಕ್ಲಿಕ್: ಯುಎಪಿಎ ಅಡಿ ಬಂಧನ ಪ್ರಶ್ನಿಸಿದ ಪುರಕಾಯಸ್ಥ, ಚಕ್ರವರ್ತಿ; ದೆಹಲಿ ಪೊಲೀಸರ ಪ್ರತಿಕ್ರಿಯೆ ಕೇಳಿದ 'ಸುಪ್ರೀಂ'
ನ್ಯೂಸ್‌ಕ್ಲಿಕ್ ವೆಬ್‌ ಪೋರ್ಟಲ್‌ ಸಂಸ್ಥಾಪಕ ಪ್ರಬೀರ್ ಪುರಕಾಯಸ್ಥ
Published On :

ನವದೆಹಲಿ: ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರಕಾಯಸ್ಥ ಮತ್ತು ಅದರ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರು ಯುಎಪಿಎ ಅಡಿಯಲ್ಲಿ ತಮ್ಮನ್ನು ಬಂಧಿಸಿರುವುದನ್ನು ವಿರೋಧಿಸಿ ಸಲ್ಲಿಸಿದ ಮನವಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಬುಧವಾರ ದೆಹಲಿ ಪೊಲೀಸರ ಪ್ರತಿಕ್ರಿಯೆ ಕೇಳಿದೆ.

ಪುರಕಾಯಸ್ಥ ಮತ್ತು ಚಕ್ರವರ್ತಿ ಪರ ವಾದ ಮಂಡಿಸಿದ ಹಿರಿಯ ವಕೀಲರಾದ ಕಪಿಲ್ ಸಿಬಲ್ ಮತ್ತು ದೇವದತ್ತ ಕಾಮತ್, ಪುರಕಾಯಸ್ಥ ಮತ್ತು ಚಕ್ರವರ್ತಿ ಜೈಲಿನಲ್ಲಿದ್ದು, ಶೀಘ್ರ ಅರ್ಜಿ ವಿಚಾರಣೆ ನಡೆಸಬೇಕು ಎಂದು ಹೇಳಿದ ನಂತರ ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಪ್ರಶಾಂತ್ ಕುಮಾರ್ ಮಿಶ್ರಾ ಅವರ ಪೀಠವು, ದೆಹಲಿ ಪೊಲೀಸರಿಗೆ ನೋಟಿಸ್ ಜಾರಿ ಮಾಡಿತು ಮತ್ತು ಅಕ್ಟೋಬರ್ 30ರೊಳಗೆ ಪ್ರತಿಕ್ರಿಯೆ ನೀಡುವಂತೆ ಕೇಳಿದೆ.

ಅಕ್ಟೋಬರ್ 16 ರಂದು, ಸಿಬಲ್ ಅವರು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ ನೇತೃತ್ವದ ಪೀಠದ ಮುಂದೆ ಈ ವಿಷಯವನ್ನು ಪ್ರಸ್ತಾಪಿಸಿದ ನಂತರ ತುರ್ತು ವಿಚಾರಣೆಗೆ ಈ ವಿಷಯವನ್ನು ಪಟ್ಟಿ ಮಾಡಲು ಸುಪ್ರೀಂ ಕೋರ್ಟ್ ಒಪ್ಪಿಗೆ ಸೂಚಿಸಿತು.

ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸುವಂತೆ ಸಿಜೆಐ ಸಿಬಲ್ ಅವರಿಗೆ ಸೂಚಿಸಿದರು ಮತ್ತು ವಿಷಯದ ತುರ್ತು ವಿಚಾರಣೆಗೆ ಪಟ್ಟಿ ಮಾಡುವುದಾಗಿ ಹೇಳಿದ್ದರು.

ತಮ್ಮ ಬಂಧನ ಮತ್ತು ಏಳು ದಿನಗಳ ಪೊಲೀಸ್ ಕಸ್ಟಡಿಯನ್ನು ಪ್ರಶ್ನಿಸಿ ಪುರಕಾಯಸ್ಥ ಮತ್ತು ಚಕ್ರವರ್ತಿ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಮಧ್ಯಂತರ ಪರಿಹಾರವಾಗಿ ತಕ್ಷಣವೇ ಬಿಡುಗಡೆ ಮಾಡುವಂತೆ ಕೋರಿದ್ದರು. ಆದರೆ, ಅಕ್ಟೋಬರ್ 13 ರಂದು, ಈ ಪ್ರಕರಣದಲ್ಲಿ ಮಧ್ಯೆ ಪ್ರವೇಶಿಸಲು ನಿರಾಕರಿಸಿದ ದೆಹಲಿ ಹೈಕೋರ್ಟ್, ಇಬ್ಬರ ಮನವಿಯನ್ನು ವಜಾಗೊಳಿಸಿತ್ತು.

ಪುರಕಾಯಸ್ಥ ಮತ್ತು ಚಕ್ರವರ್ತಿಯನ್ನು ಅಕ್ಟೋಬರ್ 3ರಂದು ದೆಹಲಿ ಪೊಲೀಸರ ವಿಶೇಷ ಘಟಕವು ಬಂಧಿಸಿತ್ತು. ಚೀನಾ ಪರ ಪ್ರಚಾರ ಮಾಡಲು ಹಣ ಪಡೆದ ಆರೋಪವನ್ನು ಅವರ ಮೇಲೆ ಹೊರಿಸಲಾಗಿದೆ. ಇಬ್ಬರ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಅಕ್ಟೋಬರ್ 10 ರಂದು ವಿಚಾರಣಾ ನ್ಯಾಯಾಲಯವು ಅವರನ್ನು 10 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು.

ಎಫ್‌ಐಆರ್‌ನ ಪ್ರಕಾರ, ನ್ಯೂಸ್ ಪೋರ್ಟಲ್‌ಗೆ ಹೆಚ್ಚಿನ ಪ್ರಮಾಣದ ಹಣವನ್ನು ಚೀನಾದಿಂದ 'ಭಾರತದ ಸಾರ್ವಭೌಮತ್ವಕ್ಕೆ ಅಡ್ಡಿಪಡಿಸಲು' ಮತ್ತು ದೇಶದ ವಿರುದ್ಧ ಅಸಮಾಧಾನವನ್ನು ಉಂಟುಮಾಡಲು ಬಂದಿದೆ ಎಂದು ಹೇಳಲಾಗಿದೆ.

2019ರ ಲೋಕಸಭಾ ಚುನಾವಣೆ ಸಮಯದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಹಾಳುಮಾಡಲು ಪುರಕಾಯಸ್ಥ ಅವರು ಪೀಪಲ್ಸ್ ಅಲೈಯನ್ಸ್ ಫಾರ್ ಡೆಮಾಕ್ರಸಿ ಅಂಡ್ ಸೆಕ್ಯುಲರಿಸಂ (PADS) ಗುಂಪಿನೊಂದಿಗೆ ಪಿತೂರಿ ನಡೆಸಿದ್ದಾರೆ ಎಂದು ಅದು ಆರೋಪಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.