ಹತ್ರಾಸ್ ಕಾಲ್ತುಳಿತ ಪ್ರಕರಣ: ನ್ಯಾಯಾಂಗ ತನಿಖೆಗೆ ಯೋಗಿ ಆದಿತ್ಯನಾಥ್ ಆದೇಶ
ದುರಂತಕ್ಕೆ ಯಾರು ಹೊಣೆ, ಅಥವಾ ಇದು ಪಿತೂರಿಯೇ ಎಂದು ತನಿಖಾ ಸಮಿತಿ ಪತ್ತೆ ಮಾಡುತ್ತದೆ. ಭವಿಷ್ಯದಲ್ಲಿ ಇಂತಹ ಘಟನೆಗಳು ಸಂಭವಿಸದಂತೆ ನಾವು ಖಚಿತಪಡಿಸಿಕೊಳ್ಳುತ್ತೇವೆ.

ಹತ್ರಾಸ್: 122 ಜನರನ್ನು ಬಲಿ ಪಡೆದ ಹತ್ರಾಸ್ ಕಾಲ್ತುಳಿತ ಪ್ರಕರಣದ ಕುರಿತು ನ್ಯಾಯಾಂಗ ತನಿಖೆ ನಡೆಸುವುದಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬುಧವಾರ ಘೋಷಿಸಿದ್ದಾರೆ.
ಇಂದು ಬೆಳಗ್ಗೆ ದುರಂತ ನಡೆದ ಹತ್ರಾಸದ ಫುಲ್ರೈ ಗ್ರಾಮಕ್ಕೆ ಭೇಟಿ ನೀಡಿ, ಪರಿಸ್ಥಿತಿಯನ್ನು ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಯೋಗಿ ಆದಿತ್ಯನಾಥ್ ಅವರು, ಮೃತಪಟ್ಟವರಲ್ಲಿ ಆರು ಮಂದಿ ಇತರ ರಾಜ್ಯಗಳಿಂದ ಬಂದವರಿದ್ದಾರೆ. ಹರಿಯಾಣದ ನಾಲ್ವರು ಮತ್ತು ಮಧ್ಯಪ್ರದೇಶ ಹಾಗೂ ರಾಜಸ್ಥಾನದ ತಲಾ ಒಬ್ಬರು ಕಾಲ್ತುಳಿತದಲ್ಲಿ ಸಾವನ್ನಪ್ಪಿದ್ದಾರೆ ಎಂದರು.
ಕಾಲ್ತುಳಿತ ಪ್ರಕರಣದ ಕುರಿತು ಹೈಕೋರ್ಟ್ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಲಾಗುವುದು. ನಿವೃತ್ತ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಸಹ ಈ ನ್ಯಾಯಾಂಗ ತನಿಖೆಯ ಭಾಗವಾಗಲಿದ್ದಾರೆ ಎಂದು ಉತ್ತರ ಪ್ರದೇಶ ಸಿಎಂ ಹೇಳಿದರು.
ದುರಂತಕ್ಕೆ ಯಾರು ಹೊಣೆ, ಅಥವಾ ಇದು ಪಿತೂರಿಯೇ ಎಂದು ತನಿಖಾ ಸಮಿತಿ ಪತ್ತೆ ಮಾಡುತ್ತದೆ. ಭವಿಷ್ಯದಲ್ಲಿ ಇಂತಹ ಘಟನೆಗಳು ಸಂಭವಿಸದಂತೆ ನಾವು ಖಚಿತಪಡಿಸಿಕೊಳ್ಳುತ್ತೇವೆ. ಭವಿಷ್ಯದಲ್ಲಿ ಇಂತಹ ಘಟನೆಗಳ ತಡೆಗೆ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ ಅನ್ನು ಸರ್ಕಾರ ಜಾರಿಗೆ ತರಲಿದೆ ಎಂದು ಯೋಗಿ ಆದಿತ್ಯನಾಥ್ ತಿಳಿಸಿದರು.
ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಕಾಲ್ತುಳಿತದಿಂದ 122 ಜನ ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಧಾರ್ಮಿಕ ಸಭೆಯ ಸಂಘಟಕರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಬುಧವಾರ ಎಫ್‌ಐಆರ್ ದಾಖಲಿಸಿದ್ದಾರೆ. ಆದರೆ ಸ್ವಯಂ ಘೋಷಿತ ದೇವ ಮಾನವ ಭೋಲೆ ಬಾಬಾ ಹೆಸರನ್ನು ಎಫ್ಐಆರ್ ನಿಂದ ಕೈಬಿಡಲಾಗಿದೆ.
ಹತ್ರಾಸ್ ಪಟ್ಟಣದಿಂದ 47 ಕಿಮೀ ದೂರದಲ್ಲಿರುವ ಫುಲ್ರೈ ಗ್ರಾಮದಲ್ಲಿ ಈ ಘಟನೆ ನಡೆದಿದೆ. ದುರಂತದಲ್ಲಿ ನೂರಾರು ಭಕ್ತರು ಗಾಯಗೊಂಡಿದ್ದು, ಗಾಯಾಳುಗಳಲ್ಲಿ ಹಲವರ ಸ್ಥಿತಿ ಚಿಂತಾಜನಕವಾಗಿರುವುದರಿಂದ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



