ದೇಶ

ಅರವಿಂದ ಕೇಜ್ರಿವಾಲ್ ಬಂಧನ ಖಂಡಿಸಿ ಎಎಪಿ ಪ್ರತಿಭಟನೆ; ಬಿಜೆಪಿ ಪ್ರಧಾನ ಕಚೇರಿ ಬಳಿ ಭದ್ರತೆ ಹೆಚ್ಚಳ

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನ ಖಂಡಿಸಿ ಎಎಪಿ ನಾಯಕರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಲಿರುವ ಹಿನ್ನೆಲೆಯಲ್ಲಿ ದೆಹಲಿಯ ಬಿಜೆಪಿ ಪ್ರಧಾನ ಕಚೇರಿ ಸುತ್ತಮುತ್ತ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಅರವಿಂದ ಕೇಜ್ರಿವಾಲ್ ಬಂಧನ ಖಂಡಿಸಿ ಎಎಪಿ ಪ್ರತಿಭಟನೆ; ಬಿಜೆಪಿ ಪ್ರಧಾನ ಕಚೇರಿ ಬಳಿ ಭದ್ರತೆ ಹೆಚ್ಚಳ
ಅರವಿಂದ ಕೇಜ್ರಿವಾಲ್ ಬಂಧನ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ಎಎಪಿ ಶಾಸಕರನ್ನು ಬಂಧಿಸಿದ ಪೊಲೀಸರು
Published On :

ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನ ಖಂಡಿಸಿ ಎಎಪಿ ನಾಯಕರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಲಿರುವ ಹಿನ್ನೆಲೆಯಲ್ಲಿ ದೆಹಲಿಯ ಬಿಜೆಪಿ ಪ್ರಧಾನ ಕಚೇರಿ ಸುತ್ತಮುತ್ತ ಭದ್ರತೆಯನ್ನು ಹೆಚ್ಚಿಸಲಾಗಿದೆ

ಬಿಜೆಪಿ ಕಚೇರಿ ಸುತ್ತಮುತ್ತಲಿನ ರಸ್ತೆಗಳಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಲಾಗಿದ್ದು, ಅರೆಸೇನಾ ಪಡೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಎಎಪಿ ಕಾರ್ಯಕರ್ತರ ಬೃಹತ್ ಪ್ರತಿಭಟನೆ ಹಿನ್ನೆಲೆಯಲ್ಲಿ ಸೆಂಟ್ರಲ್ ದೆಹಲಿಗೆ ತೆರಳುವ ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಲು ಪೊಲೀಸರು ಪ್ರಯಾಣಿಕರಿಗೆ ವಿನಂತಿ ಮಾಡಿದ್ದಾರೆ. ಕೇಂದ್ರ ದೆಹಲಿಯಲ್ಲಿರುವ ಬಿಜೆಪಿ ಪ್ರಧಾನ ಕಚೇರಿ ಮತ್ತು ಇ.ಡಿ ಕಚೇರಿಗೆ ಹೋಗುವ ರಸ್ತೆಗಳನ್ನು ಮುಚ್ಚಲಾಗಿದೆ.

ಕೇಜ್ರಿವಾಲ್ ಬಂಧನವನ್ನು ಖಂಡಿಸಿ ಶುಕ್ರವಾರ ಬೆಳಗ್ಗೆ 10 ಗಂಟೆಗೆ ಬಿಜೆಪಿ ಪ್ರಧಾನ ಕಚೇರಿ ಬಳಿಗೆ ಆಗಮಿಸಿ ಪ್ರತಿಭಟನೆ ಆರಂಭಿಸುವಂತೆ ಆಪ್ ನಾಯಕರು ಪಕ್ಷದ ಕಾರ್ಯಕರ್ತರಿಗೆ ಸೂಚಿಸಿದ್ದಾರೆ.

ದೆಹಲಿಯ ಎಲ್ಲಾ ಶಾಸಕರು ಮತ್ತು ಕೌನ್ಸಿಲರ್‌ಗಳು ಬಿಜೆಪಿ ಪ್ರಧಾನ ಕಚೇರಿ ಬಳಿಯಲ್ಲಿ ಸೇರಲು ಸೂಚಿಸಲಾಗಿದೆ ಮತ್ತು ಕೇಜ್ರಿವಾಲ್ ಅವರ ಬಂಧನ ವಿರೋಧಿಸಿ ಪ್ರತಿಭಟಿಸಲು ಹೆಚ್ಚಿನ ಸಂಖ್ಯೆಯ ಜನರು ಬೀದಿಗಿಳಿಯಲಿದ್ದಾರೆ ಎಂದು ಪಕ್ಷ ನಿರೀಕ್ಷಿಸುತ್ತದೆ ಎಂದು ಎಎಪಿ ಮೂಲಗಳು ತಿಳಿಸಿವೆ.

ಎಎಪಿ ಕಾರ್ಯಕರ್ತರು ನೆರೆಯ ರಾಜ್ಯಗಳಿಂದ ರಾಷ್ಟ್ರ ರಾಜಧಾನಿಗೆ ಪ್ರವೇಶಿಸುವುದನ್ನು ತಡೆಯಲು ದೆಹಲಿಯ ಗಡಿಗಳಲ್ಲಿ ಈಗಾಗಲೇ ತಪಾಸಣೆಯನ್ನು ತೀವ್ರಗೊಳಿಸಲಾಗಿದೆ.

ಗುರುವಾರ ರಾತ್ರಿ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಅರವಿಂದ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿಗಳ ಪ್ರಕಾರ, ಬಿಜೆಪಿ ಪ್ರಧಾನ ಕಚೇರಿ ಮತ್ತು ಇ.ಡಿ ಕಚೇರಿಯ ಹೊರಗೆ ಸೆಕ್ಷನ್ 144 ವಿಧಿಸಿರುವುದರಿಂದ ಪ್ರತಿಭಟನಾಕಾರರನ್ನು ಬಂಧಿಸಲು ಸೂಚನೆಗಳನ್ನು ನೀಡಲಾಗಿದೆ. ಪ್ರತಿಭಟನಾಕಾರರನ್ನು ಬಂಧಿಸಲು ಮತ್ತು ಕೇಂದ್ರ ದೆಹಲಿಯಿಂದ ದೂರಕ್ಕೆ ಕರೆದೊಯ್ಯಲು ಹೆಚ್ಚಿನ ಸಂಖ್ಯೆಯ ಬಸ್‌ಗಳನ್ನು ನಿಯೋಜಿಸಲಾಗಿದೆ.

ದೆಹಲಿ ಪೊಲೀಸ್‌ನ ಎಲ್ಲಾ ಹಿರಿಯ ಅಧಿಕಾರಿಗಳು ತಮ್ಮ ಪ್ರದೇಶಗಳಲ್ಲಿ ಕಟ್ಟುನಿಟ್ಟಾದ ಜಾಗರೂಕತೆ ಮತ್ತು ನಿಗಾ ಇರಿಸಲು ಕೇಳಲಾಗಿದೆ. ಯಾರಾದರೂ ಕಾನೂನು ಉಲ್ಲಂಘಿಸಲು ಪ್ರಯತ್ನಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.