ಉತ್ತರಾಖಂಡ: ಹಿಮಪಾತದಲ್ಲಿ ಸಿಲುಕಿದ್ದ 32 ಕಾರ್ಮಿಕರ ರಕ್ಷಣೆ, ಹಿಮದಡಿ ಇನ್ನೂ 23 ಮಂದಿ; ರಕ್ಷಣಾ ಕಾರ್ಯಾಚರಣೆ ಸ್ಥಗಿತ
ರಸ್ತೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ 55ಕ್ಕೂ ಹೆಚ್ಚು ಕಾರ್ಮಿಕರು ಹಿಮಪಾತದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚಮೋಲಿ: ಉತ್ತರಾಖಂಡದ ಚಮೋಲಿ ಜಿಲ್ಲೆಯ ಮಾನಾ ಬಳಿ ಶುಕ್ರವಾರ ಸಂಭವಿಸಿದ ಭಾರೀ ಹಿಮಪಾತದಲ್ಲಿ ಸಿಲುಕಿದ್ದ ಗಡಿ ರಸ್ತೆ ಸಂಸ್ಥೆ(ಬಿಆರ್‌ಒ) 55 ಕಾರ್ಮಿಕರ ಪೈಕಿ 32 ಮಂದಿಯನ್ನು ರಕ್ಷಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ರಸ್ತೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ 55ಕ್ಕೂ ಹೆಚ್ಚು ಕಾರ್ಮಿಕರು ಹಿಮಪಾತದಲ್ಲಿ ಸಿಲುಕಿಕೊಂಡಿದ್ದರು. ಇದುವರೆಗೆ 32 ಜನರನ್ನು ರಕ್ಷಿಸಲಾಗಿದೆ. ಇನ್ನೂ 23 ಕಾರ್ಮಿಕರು ಹಿಮದಡಿ ಸಿಲುಕಿದ್ದು, ಭಾರೀ ಹಿಮಪಾತದಿಂದಾಗಿ ರಕ್ಷಣಾ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
"ಮಾನಾದ ಗಡಿ ಪ್ರದೇಶದ ಗಡಿ ರಸ್ತೆ ಸಂಸ್ಥೆ ಶಿಬಿರದ ಬಳಿ ಭಾರೀ ಹಿಮಪಾತ ಸಂಭವಿಸಿದ್ದು, ರಸ್ತೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ 57 ಕಾರ್ಮಿಕರು ಸಿಲುಕಿಕೊಂಡಿದ್ದಾರೆ. ಈ ಕಾರ್ಮಿಕರಲ್ಲಿ 32 ಕಾರ್ಮಿಕರನ್ನು ರಕ್ಷಿಸಿ ಮಾನಾ ಬಳಿಯ ಸೇನಾ ಶಿಬಿರಕ್ಕೆ ಕಳುಹಿಸಲಾಗಿದೆ" ಎಂದು ಉತ್ತರಾಖಂಡ ಪೊಲೀಸ್ ವಕ್ತಾರ ನೀಲೇಶ್ ಆನಂದ್ ಭರ್ನೆ ಎಎನ್‌ಐಗೆ ತಿಳಿಸಿದ್ದಾರೆ.
ಮೂರರಿಂದ ನಾಲ್ಕು ಆಂಬ್ಯುಲೆನ್ಸ್‌ಗಳನ್ನು ಕಳುಹಿಸಲಾಗಿದೆ. ಆದರೆ ಭಾರೀ ಹಿಮಪಾತದಿಂದಾಗಿ, ರಕ್ಷಣಾ ತಂಡ ಸ್ಥಳಕ್ಕೆ ತಲುಪಲು ಸಾಕಷ್ಟು ತೊಂದರೆಗಳನ್ನು ಎದುರಿಸುತ್ತಿದೆ ಎಂದು ಬಿಆರ್‌ಒ(ಗಡಿ ರಸ್ತೆ ಸಂಸ್ಥೆ) ಕಾರ್ಯನಿರ್ವಾಹಕ ಎಂಜಿನಿಯರ್ ಸಿಆರ್ ಮೀನಾ ಅವರು ಹೇಳಿದ್ದಾರೆ.
ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಘಟನೆಯ ಬಗ್ಗೆ ಎಕ್ಸ್‌ನಲ್ಲಿ ದುಃಖ ವ್ಯಕ್ತಪಡಿಸಿದ್ದು, ಐಟಿಬಿಪಿ, ಬಿಆರ್‌ಒ ಮತ್ತು ಇತರ ರಕ್ಷಣಾ ತಂಡಗಳು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ ಎಂದು ತಿಳಿಸಿದ್ದಾರೆ.
"ಚಮೋಲಿ ಜಿಲ್ಲೆಯ ಮಾನಾ ಗ್ರಾಮದ ಬಳಿ ಬಿಆರ್‌ಒ ನಡೆಸುತ್ತಿರುವ ನಿರ್ಮಾಣ ಕಾರ್ಯದ ಸಮಯದಲ್ಲಿ ಅನೇಕ ಕಾರ್ಮಿಕರು ಹಿಮಪಾತದ ಅಡಿಯಲ್ಲಿ ಸಮಾಧಿಯಾಗಿರುವ ಬಗ್ಗೆ ದುಃಖದ ಸುದ್ದಿ ಬಂದಿದೆ. ಐಟಿಬಿಪಿ, ಬಿಆರ್‌ಒ ಮತ್ತು ಇತರ ರಕ್ಷಣಾ ತಂಡಗಳು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಎಲ್ಲಾ ಕಾರ್ಮಿಕ ಸಹೋದರರ ಸುರಕ್ಷತೆಗಾಗಿ ನಾನು ಭಗವಾನ್ ಬದ್ರಿ ವಿಶಾಲ್‌ನಲ್ಲಿ ಪ್ರಾರ್ಥಿಸುತ್ತೇನೆ" ಎಂದು ಧಾಮಿ ಹಿಂದಿಯಲ್ಲಿ ಪೋಸ್ಟ್ ಮಾಡಿದ್ದಾರೆ.
ಉತ್ತರಖಂಡ್‌ನ ಮಾಲಾದಿಂದ ಘಸೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಈ ಸುದ್ದಿ ತಿಳಿಯುತ್ತಿದ್ದಂತೆ ಪ್ರಧಾನಿ ನರೇಂದ್ರಮೋದಿ ಅವರು ಉತ್ತರಖಂಡ್ ಮುಖ್ಯಮಂತ್ರಿ ಪುಷ್ಕರ್ ಧಾಮಿ ಜೊತೆ ಮಾತನಾಡಿ ರಕ್ಷಣಾ ಕಾರ್ಯದ ಬಗ್ಗೆ ಎಲ್ಲಾ ರೀತಿಯ ನೆರವು ನೀಡುವುದಾಗಿ ಅಭಯ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



