ಕಾಂಗ್ರೆಸ್ ಕಾರ್ಯಕರ್ತೆ ಮೃತದೇಹ ಸೂಟ್‌ಕೇಸ್‌ನಲ್ಲಿ ಪತ್ತೆ: ಉನ್ನತ ಮಟ್ಟದ ತನಿಖೆಗೆ ಆಗ್ರಹ
ಕಳೆದ ವರ್ಷ ಸಂಸದ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದ ಮೃತ ಹಿಮಾನಿ ನರ್ವಾಲ್ (22) ಅವರ ಮೃತದೇಹ ಸೂಟ್‌ಕೇಸ್‌ನಲ್ಲಿ ಪತ್ತೆಯಾಗಿದೆ.

ಚಂಡೀಗಢ: ಭಾರತ್ ಜೋಡೋ ಯಾತ್ರೆ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೊತೆ ಕಾಣಿಸಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತೆಯೊಬ್ಬರ ಮೃತದೇಹ ಸೂಟ್‌ಕೇಸ್‌ನಲ್ಲಿ ಪತ್ತೆಯಾಗಿದ್ದು, ಈ ಘಟನೆ ನಗರದ ಪೊಲೀಸರನ್ನೇ ಬೆಚ್ಚಿಬೀಳಿಸಿದೆ.
ಕಳೆದ ವರ್ಷ ಸಂಸದ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದ ಮೃತ ಹಿಮಾನಿ ನರ್ವಾಲ್ (22) ಅವರ ಮೃತದೇಹ ಸೂಟ್‌ಕೇಸ್‌ನಲ್ಲಿ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.
ಹಿಮಾನಿ ಸಾವಿನ ಬಗ್ಗೆ ಅನುಮಾನಗಳು ಭುಗಿಲೆದ್ದಿದ್ದು, ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಕಾಂಗ್ರೆಸ್ ನಾಯಕರು ಹಾಗೂ ಮುಖಂಡರು ಆಗ್ರಹಿಸಿದ್ದಾರೆ.
ಸಂಪ್ಲಾ ಬಸ್ ನಿಲ್ದಾಣದ ಬಳಿ ದಾರಿಹೋಕರು ಸೂಟ್‌ಕೇಸ್ ಅನ್ನು ಪತ್ತೆಹಚ್ಚಿದ್ದು, ಅನುಮಾನಗೊಂಡು ಪೊಲೀಸರಿಗೆ ಕರೆ ಮಾಡಿ, ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ನಗರ ಪೊಲೀಸರು, ವಿಧಿವಿಜ್ಞಾನ ತಂಡದೊಂದಿಗೆ ಸೂಟ್‌ಕೇಸ್ ಒಳಗೆ ಏನಿದೆ ಎಂಬುದನ್ನು ತೆರೆದು ನೋಡಿದ್ದಾರೆ. ಈ ಸೂಟ್‌ಕೇಸ್‌ನಲ್ಲಿ ನರ್ವಾಲ್ ರುಂಡವನ್ನು ದೇಹದಿಂದ ಬೇರ್ಪಡಿಸಿ, ಆಕೆಯ ದುಪಟ್ಟಾದಿಂದ ಸುತ್ತಿಟ್ಟಿರುವುದು ಕಂಡು ಬಂದಿದೆ.
ಸಂಪ್ಲಾ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಬಿಜೇಂದರ್ ಸಿಂಗ್ ಅವರು ಮಾತನಾಡಿ, ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.
ಏತನ್ಮಧ್ಯೆ, ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಈ ಘಟನೆಯ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿದ್ದು, ಇದು ಅತ್ಯಂತ ದುಃಖಕರ ಸಂಗತಿ ಎಂದು ಹೇಳಿದ್ದಾರೆ.
ಈ ರೀತಿಯ ಕೊಲೆ ಮತ್ತು ಸೂಟ್‌ಕೇಸ್‌ನಲ್ಲಿ ಆಕೆಯ ಮೃತದೇಹ ಪತ್ತೆಯಾಗಿರುವುದು ಅತ್ಯಂತ ದುಃಖಕರ ಮತ್ತು ಆಘಾತ ತಂದಿದೆ ಎಂದು ತಿಳಿಸಿದ್ದಾರೆ.
ಘಟನೆಯಿಂದ ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯುಂಟಾಗಿದೆ. ಈ ಇಡೀ ಪ್ರಕರಣದ ಬಗ್ಗೆ ಉನ್ನತ ಮಟ್ಟದ, ನಿಷ್ಪಕ್ಷಪಾತ ತನಿಖೆ ನಡೆಯಬೇಕು ಮತ್ತು ಅಪರಾಧಿಗಳಿಗೆ ಸಾಧ್ಯವಾದಷ್ಟು ಬೇಗ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ. ಇದೇ ವೇಳೆ ಮಹಿಳೆಯರ ಮೇಲಿನ ಅಪರಾಧಗಳಲ್ಲಿ ಕಠಿಣ ಕ್ರಮ ಕೈಗೊಳ್ಳುವ ಅಗತ್ಯವನ್ನು ಅವರು ಒತ್ತಿ ಹೇಳಿದ್ದಾರೆ.
ಮಹಿಳೆಯರ ಮೇಲೆ ನಡೆಯುವ ಅಪರಾಧ ಕೃತ್ಯಗಳಲ್ಲಿ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಇದರಿಂದ ಭವಿಷ್ಯದಲ್ಲಿ ಇಂತಹ ಕೃತ್ಯಕ್ಕೆ ಕೈಹಾಕುವವರು ಸಾವಿರ ಬಾರಿ ಯೋಜನೆ ಮಾಡುವಂತಾಗುತ್ತದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



