ದೇಶ

ಡೇಟಿಂಗ್ ಆ್ಯಪ್‌ ಮೂಲಕ 500ಕ್ಕೂ ಹೆಚ್ಚು ಯುವತಿಯರಿಗೆ 2 ಕೋಟಿ ರೂ ವಂಚನೆ! ವ್ಯಕ್ತಿಯ ಬಂಧನ!

ಮಹಿಳೆಯರ ವಿಶ್ವಾಸ ಗಳಿಸಲು ವೈದ್ಯ, ಉದ್ಯಮಿ ಅಥವಾ ಚಲನಚಿತ್ರ ನಿರ್ಮಾಪಕ ಎಂದು ನಂಬಿಸಿ ಅನೇಕ ನಕಲಿ ಸಾಮಾಜಿಕ ಮಾಧ್ಯಮ ಪ್ರೊಫೈಲ್‌ಗಳನ್ನು ರಚಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಡೇಟಿಂಗ್ ಆ್ಯಪ್‌ ಮೂಲಕ 500ಕ್ಕೂ ಹೆಚ್ಚು ಯುವತಿಯರಿಗೆ 2 ಕೋಟಿ ರೂ ವಂಚನೆ! ವ್ಯಕ್ತಿಯ ಬಂಧನ!
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ಡೇಟಿಂಗ್ ಮತ್ತು ವೈವಾಹಿಕ ಆ್ಯಪ್ ಮೂಲಕ ದೇಶಾದ್ಯಂತ 500ಕ್ಕೂ ಹೆಚ್ಚು ಯುವತಿಯರನ್ನು ಗುರಿಯಾಗಿಸಿಕೊಂಡು ಸುಮಾರು 2 ಕೋಟಿ ರೂ. ವಂಚಿಸಿದ ಆರೋಪದ ಮೇಲೆ ದೆಹಲಿ ಪೊಲೀಸರು ಗುರುವಾರ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಂಧಿತ ಆರೋಪಿಯನ್ನು ಪಶ್ಚಿಮ ಬಂಗಾಳದ ನಿವಾಸಿ ಆನಂದ್ ಕುಮಾರ್ ಎಂದು ಗುರುತಿಸಲಾಗಿದೆ. ಈತ ಅಸಂಖ್ಯಾತ ಪ್ರಮಾಣದ ಹನಿ-ಟ್ರ್ಯಾಪಿಂಗ್, ಪ್ರಣಯ ವಂಚನೆಗಳು ಮತ್ತು ಬ್ಲ್ಯಾಕ್‌ ಮೇಲಿಂಗ್‌ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ.

ಮಹಿಳೆಯರ ವಿಶ್ವಾಸ ಗಳಿಸಲು ವೈದ್ಯ, ಉದ್ಯಮಿ ಅಥವಾ ಚಲನಚಿತ್ರ ನಿರ್ಮಾಪಕ ಎಂದು ನಂಬಿಸಿ ಅನೇಕ ನಕಲಿ ಸಾಮಾಜಿಕ ಮಾಧ್ಯಮ ಪ್ರೊಫೈಲ್‌ಗಳನ್ನು ರಚಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಪ್ರೀತಿ ಮತ್ತು ಮದುವೆ ಭರವಸೆ ನೀಡುವ ಮೂಲಕ ಸಂತ್ರಸ್ತೆಯರೊಂದಿಗೆ ಸಂಪರ್ಕ ಸಾಧಿಸುತ್ತಿದ್ದ. ನಂತರ, ವೈದ್ಯಕೀಯ ತುರ್ತು ಪರಿಸ್ಥಿತಿ, ವ್ಯವಹಾರ ನಷ್ಟ ಅಂತಾ ಹೇಳಿ ಕಥೆ ಕಟ್ಟುತ್ತಿದ್ದ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಹಲವಾರು ಸಂದರ್ಭಗಳಲ್ಲಿ ಸಂತ್ರಸ್ತೆಯರ ಖಾಸಗಿ ಫೋಟೋಗಳು ಮತ್ತು ವೀಡಿಯೊಗಳನ್ನು ಆನ್‌ಲೈನ್‌ನಲ್ಲಿ ಹಾಕುವುದಾಗಿ ಬೆದರಿಕೆ ಹಾಕುವ ಮೂಲಕ ಬ್ಲ್ಯಾಕ್‌ಮೇಲ್ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಕುಮಾರ್ 500 ಕ್ಕೂ ಹೆಚ್ಚು ಮಹಿಳೆಯರನ್ನು ಗುರಿಯಾಗಿಸಿಕೊಂಡು ಸುಮಾರು 2 ಕೋಟಿ ರೂ. ವಂಚಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುಮಾರು 7 ಲಕ್ಷ ರೂಪಾಯಿ ನಷ್ಟವಾಗಿದೆ ಎಂದು ಆರೋಪಿಸಿ ಸಂತ್ರಸ್ತೆಯೊಬ್ಬರು ನೀಡಿದ ದೂರಿನಿಂದ ಪ್ರಕರಣ ಬೆಳಕಿಗೆ ಬಂದಿದೆ. ಡಿಜಿಟಲ್ ಟ್ರ್ಯಾಕಿಂಗ್ ಬಳಸಿ ಪಶ್ಚಿಮ ಬಂಗಾಳದ 24 ಪರಗಣ ಪ್ರದೇಶದಿಂದ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಲಾಗಿದೆ. ಅಧಿಕಾರಿಗಳು ಆತನ ಬಳಿಯಿಂದ ನಾಲ್ಕು ಮೊಬೈಲ್ ಫೋನ್‌ಗಳು, ಎಂಟು ಸಿಮ್ ಕಾರ್ಡ್‌ಗಳು, ಡೆಬಿಟ್ ಕಾರ್ಡ್‌ಗಳು ಮತ್ತು ಚಿನ್ನದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.