ಅಸ್ಸಾಂ: 15 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಕೊಲೆ; ಗುಪ್ತಾಂಗಕ್ಕೆ ರಾಡ್ ತುರುಕಿ ದುಷ್ಕರ್ಮಿಗಳು ಪರಾರಿ!
ಲೈಂಗಿಕ ದೌರ್ಜನ್ಯದ ಆರೋಪಗಳು ಮತ್ತು ಸಾವಿಗೆ ನಿಖರ ಕಾರಣವನ್ನು ಖಚಿತಪಡಿಸಿಕೊಳ್ಳಲು ಪೊಲೀಸರು ಮರಣೋತ್ತರ ಪರೀಕ್ಷೆಯ ವರದಿಗೆ ಕಾಯುತ್ತಿದ್ದಾರೆ.

ಗುವಾಹಟಿ: ಅಸ್ಸಾಂನಲ್ಲಿ ನಡೆದ ಅತ್ಯಂತ ಆಘಾತಕಾರಿ ಘಟನೆಯೊಂದರಲ್ಲಿ, 15 ವರ್ಷದ ಬಾಲಕಿಯೊಬ್ಬಳ ಮೇಲೆ ಆಕೆಯ ಮನೆಯಲ್ಲೇ ಅತ್ಯಾಚಾರ ಎಸಗಿ, ಹತ್ಯೆಗೈಯಲಾಗಿದೆ; ಆಕೆಯ ಮೃತದೇಹವು ಗುರುತಿಸಲಾಗದಷ್ಟು ವಿರೂಪಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹತ್ತಿರದ ಸಂಬಂಧಿಕರ ಮನೆಯಲ್ಲಿದ್ದ ಔತಣಕೂಟವೊಂದರಲ್ಲಿ ಪಾಲ್ಗೊಂಡು ಹಿಂತಿರುಗಿದ ನಂತರ ಕುಟುಂಬಸ್ಥರಿಗೆ ಹೈಲಾಕಂಡಿ ಜಿಲ್ಲೆಯಲ್ಲಿರುವ ತಮ್ಮ ಮನೆಯಲ್ಲಿ ಬಾಲಕಿಯ ಮೃತದೇಹ ಕಂಡುಬಂದಿದೆ.
ಆಕೆಯ ತಲೆ ಮತ್ತು ಮುಖವನ್ನು ಜಜ್ಜಲಾಗಿದ್ದು, ಆಕೆಯ ಗುಪ್ತಾಂಗದೊಳಗೆ ರಾಡ್ ತುರುಕಲಾಗಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕೊಲೆಗೂ ಮುನ್ನ ಆಕೆಯ ಮೇಲೆ ಅತ್ಯಾಚಾರ ನಡೆದಿದೆ ಎಂದು ಕುಟುಂಬವು ಆರೋಪಿಸುತ್ತಿದ್ದರೆ, ಲೈಂಗಿಕ ದೌರ್ಜನ್ಯದ ಆರೋಪಗಳು ಮತ್ತು ಸಾವಿಗೆ ನಿಖರ ಕಾರಣವನ್ನು ಖಚಿತಪಡಿಸಿಕೊಳ್ಳಲು ಪೊಲೀಸರು ಮರಣೋತ್ತರ ಪರೀಕ್ಷೆಯ ವರದಿಗೆ ಕಾಯುತ್ತಿದ್ದಾರೆ.
ಶನಿವಾರ ರಾತ್ರಿ ಸುಮಾರು 11 ಗಂಟೆ ಸುಮಾರಿಗೆ ಕಟ್ಲಿಚೆರಾ ಪೊಲೀಸ್ ಠಾಣಾ ವ್ಯಾಪ್ತಿಯ ಅಲೋಯಿಚೋರಾ ಪ್ರದೇಶದಲ್ಲಿ ಈ ಅಪರಾಧ ನಡೆದಿದೆ. ಬಾಲಕಿ ಕೂಡ ತನ್ನ ಕುಟುಂಬದೊಂದಿಗೆ ಔತಣಕೂಟವೊಂದರಲ್ಲಿ ಭಾಗವಹಿಸಲು ಸಂಬಂಧಿಕರೊಬ್ಬರ ಮನೆಗೆ ಹೋಗಿದ್ದಳು. ಆದರೆ, ತನ್ನ ಸೋದರಸಂಬಂಧಿಯೊಂದಿಗೆ ಜಗಳವಾಡಿದ ನಂತರ ಬೇಗ ಆಕೆ ಮನೆಗೆ ಮರಳಿದ್ದಳು ಎಂದು ಮೂಲಗಳು ತಿಳಿಸಿವೆ.
ಕುಟುಂಬದವರು ಮನೆಗೆ ಮರಳಿದಾಗ ಆಕೆಯ ಮೃತದೇಹ ನೆಲದ ಮೇಲೆ ಪತ್ತೆಯಾಗಿದೆ. ಆಕೆಯ ಮುಖ ಗುರುತಿಸಲಾಗದಷ್ಟು ವಿರೂಪಗೊಂಡಿತ್ತು ಎಂದು ಅವರು ತಿಳಿಸಿದ್ದಾರೆ.
ಈ ಘಟನೆಯ ಹಿನ್ನೆಲೆಯಲ್ಲಿ, ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದು ಆಗ್ರಹಿಸಿ ಸ್ಥಳೀಯರು ರಾಷ್ಟ್ರೀಯ ಹೆದ್ದಾರಿ (NH) 6 ಅನ್ನು ತಡೆದು ಪ್ರತಿಭಟನೆ ನಡೆಸಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಿಸಲಾಗಿದ್ದು, ವಿಚಾರಣೆಗಾಗಿ ಐವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (SSP) ಅಮಿತಾಭ್ ಸಿನ್ಹಾ ಖಚಿತಪಡಿಸಿದ್ದಾರೆ. ಲೈಂಗಿಕ ದೌರ್ಜನ್ಯದ ಆರೋಪಗಳನ್ನು ವೈದ್ಯಕೀಯವಾಗಿ ಇನ್ನೂ ದೃಢಪಡಿಸಬೇಕಿದೆ ಎಂದು ಅವರು ತಿಳಿಸಿದ್ದಾರೆ.
'ಆಕೆ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಕುಟುಂಬದವರು ಆರೋಪಿಸುತ್ತಿದ್ದಾರೆ. ಆದರೆ, ಯಾವುದೇ ತೀರ್ಮಾನಕ್ಕೆ ಬರುವ ಮುನ್ನ ನಾವು ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದೇವೆ. ನಾವು ಈ ವಿಷಯದ ಬಗ್ಗೆ ಕೂಲಂಕಷವಾಗಿ ತನಿಖೆ ನಡೆಸುತ್ತಿದ್ದೇವೆ ಮತ್ತು ಸದ್ಯ ನಾಲ್ವರನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ' ಎಂದು ಎಸ್‌ಎಸ್‌ಪಿ ಸಿನ್ಹಾ ಸುದ್ದಿಗಾರರಿಗೆ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



