ಚಾಮರಾಜನಗರ: 'ಮೃತರು ರೈತರೇ ಹೊರತು ಬೇಟೆಗಾರರಲ್ಲ'; ಮೂವರು ತಮಿಳರ ಹತ್ಯೆಗೆ ಸಿಎಂ ವಿಜಯ್ ತೀವ್ರ ಖಂಡನೆ, ಉನ್ನತ ಮಟ್ಟದ ತನಿಖೆಗೆ ಆಗ್ರಹ! Video
ಘಟನೆ ಕುರಿತು ಉನ್ನತ ಮಟ್ಟದ ತನಿಖಾ ಸಮಿತಿಯನ್ನು ರಚಿಸಿ, ತಪ್ಪಿತಸ್ಥರೆಂದು ಸಾಬೀತಾದವರಿಗೆ ಸೂಕ್ತ ಶಿಕ್ಷೆ ನೀಡಬೇಕು.

ಚೆನ್ನೈ: ಕರ್ನಾಟಕದ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ತಮಿಳು ಮೂಲದ ವ್ಯಕ್ತಿಗಳು ಮೃತಪಟ್ಟಿರುವುದನ್ನು ತಮಿಳುನಾಡು ಮುಖ್ಯಮಂತ್ರಿ ಹಾಗೂ ತಮಿಳಗ ವೆಟ್ರಿ ಕಳಗಂ ಅಧ್ಯಕ್ಷ ಸಿ. ಜೋಸೆಫ್ ವಿಜಯ್ ತೀವ್ರವಾಗಿ ಖಂಡಿಸಿದ್ದು, ಘಟನೆ ಕುರಿತು ಉನ್ನತ ಮಟ್ಟದ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ವಿಜಯ್, ಕರ್ನಾಟಕ ಅರಣ್ಯ ಇಲಾಖೆ ನೀಡಿರುವ ವಿವರಣೆ ಸ್ವೀಕಾರಾರ್ಹವಲ್ಲ. ಈ “ಭೀಕರ ಘಟನೆ” ಕುರಿತು ನ್ಯಾಯಸಮ್ಮತ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.
ಘಟನೆ ಕುರಿತು ಉನ್ನತ ಮಟ್ಟದ ತನಿಖಾ ಸಮಿತಿಯನ್ನು ರಚಿಸಿ, ತಪ್ಪಿತಸ್ಥರೆಂದು ಸಾಬೀತಾದವರಿಗೆ ಸೂಕ್ತ ಶಿಕ್ಷೆ ನೀಡಬೇಕು. ಅಲ್ಲದೆ, ಮೃತರ ಕುಟುಂಬಗಳಿಗೆ ಕರ್ನಾಟಕ ಸರ್ಕಾರ ಅಗತ್ಯ ನೆರವು ನೀಡಬೇಕು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ಆಗಸ್ಟ್ 15ರ ಮುಂಜಾನೆ ಆಂಥೋನಿ ಸಾಮಿ, ಜಾನ್ ರೋಸ್ ಪೀಟರ್ ಮತ್ತು ಕುಮಾರ್ ಎಂಬ ಮೂವರು ಗುಂಡಿನ ದಾಳಿಯಲ್ಲಿ ಮೃತಪಟ್ಟಿದ್ದಾರೆ.
ನಾಲ್ಕನೇ ವ್ಯಕ್ತಿ ಮಹಿಮಾ ದಾಸ್ ಸ್ಥಳದಿಂದ ತಪ್ಪಿಸಿಕೊಂಡಿದ್ದು, ಬಳಿಕ ಗಾಯಗೊಂಡ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಕರ್ನಾಟಕ ಅರಣ್ಯ ಇಲಾಖೆ ಮತ್ತು ಗೃಹ ಸಚಿವರು ಇದು ಬೇಟೆ ತಡೆ ಕಾರ್ಯಾಚರಣೆ ಆಗಿದ್ದು, ಮೃತರ ಬಳಿ ಬಂದೂಕುಗಳು ಮತ್ತು ಜಿಂಕೆ ಮಾಂಸ ಪತ್ತೆಯಾಗಿತ್ತು ಎಂದು ತಿಳಿಸಿದ್ದಾರೆ. ಆದರೆ, ಮೃತರ ಕುಟುಂಬಸ್ಥರು ಹಾಗೂ ಗಾಯಗೊಂಡು ಬದುಕುಳಿದ ವ್ಯಕ್ತಿ ಈ ಆರೋಪವನ್ನು ನಿರಾಕರಿಸಿದ್ದು, ಮೃತಪಟ್ಟವರು ರೈತರು ಎಂದು ಹೇಳಿದ್ದಾರೆ.
ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಕೂಡ ಮೂವರು ತಮಿಳರ ಹತ್ಯೆ ಆಘಾತಕಾರಿ ಹಾಗೂ ತೀವ್ರ ಖಂಡನೀಯ ಎಂದು ಹೇಳಿದ್ದಾರೆ. ಮಾನವ ಜೀವದ ಬಗ್ಗೆ ಯಾವುದೇ ಕಾಳಜಿ ಇಲ್ಲದೆ ಈ ಘಟನೆ ನಡೆದಿದೆ ಎಂದು ಆರೋಪಿಸಿದ್ದಾರೆ.
ಇದೇ ವೇಳೆ ಮೂವರ ಸಾವಿಗೆ ಕಾರಣರಾದವರನ್ನು ರಕ್ಷಿಸಲು ಕರ್ನಾಟಕ ಅರಣ್ಯ ಇಲಾಖೆ ಪ್ರಯತ್ನಿಸುತ್ತಿರುವಂತೆ ಕಾಣುತ್ತಿದೆ ಎಂದು ಆರೋಪಿಸಿದ ಸ್ಟಾಲಿನ್, ಕೊಲೆ ಪ್ರಕರಣ ದಾಖಲಿಸಿ ಪಾರದರ್ಶಕ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.
ಈ ವಿಚಾರವನ್ನು ತಮಿಳುನಾಡು ಸರ್ಕಾರ ಕರ್ನಾಟಕ ಸರ್ಕಾರದ ಗಮನಕ್ಕೆ ತರಬೇಕು. ಮೆಕೆದಾಟು ವಿವಾದದ ಸಂದರ್ಭದಲ್ಲಿ ನಡೆದುಕೊಂಡಂತೆ ಈ ಬಾರಿಯೂ ಮೌನವಾಗಿರಬಾರದು ಎಂದು ಸ್ಟಾಲಿನ್ ಹೇಳಿದ್ದಾರೆ.
ಮೃತರ ಕುಟುಂಬಗಳಿಗೆ ಪರಿಹಾರ ನೀಡಬೇಕು ಹಾಗೂ ಪ್ರತಿ ಕುಟುಂಬದ ಒಬ್ಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಪಿಎಂಕೆ ಅಧ್ಯಕ್ಷ ಅಂಬುಮಣಿ ರಾಮದಾಸ್ ಸಿಬಿಐ ತನಿಖೆಗೆ ಆಗ್ರಹಿಸಿದ್ದು, ಪ್ರತಿ ಮೃತರ ಕುಟುಂಬಕ್ಕೆ 1 ಕೋಟಿ ರೂ, ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಸಿಪಿಐ ರಾಜ್ಯ ಕಾರ್ಯದರ್ಶಿ ಎಂ. ವೀರಪಾಂಡಿಯನ್ ಅವರು ಮಾತನಾಡಿ, ಮೃತ ಮೂವರು ರೈತರಾಗಿದ್ದು, ಜಾನುವಾರುಗಳನ್ನು ಮೇಯಿಸಲು ಅರಣ್ಯಕ್ಕೆ ತೆರಳುತ್ತಿದ್ದರು. ಕಾಣೆಯಾಗಿದ್ದ ಜಾನುವಾರುಗಳನ್ನು ಹುಡುಕಲು ಅರಣ್ಯಕ್ಕೆ ತೆರಳಿದ್ದಾಗ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
ಸಂಬಂಧಪಟ್ಟ ಅರಣ್ಯಾಧಿಕಾರಿಗಳನ್ನು ಬಂಧಿಸಿ ವಜಾಗೊಳಿಸುವುದರ ಜೊತೆಗೆ ಕೊಲೆ ಪ್ರಕರಣ ದಾಖಲಿಸಬೇಕು ಎಂದು ಸಿಪಿಐ ಒತ್ತಾಯಿಸಿದೆ.
ಸಿಪಿಎಂ ರಾಜ್ಯ ಕಾರ್ಯದರ್ಶಿ ಶಣ್ಮುಗಂ ಕೂಡ ಘಟನೆಯಲ್ಲಿ ಭಾಗಿಯಾಗಿರುವ ಅಧಿಕಾರಿಗಳನ್ನು ವಜಾಗೊಳಿಸಿ ಬಂಧಿಸಬೇಕು ಎಂದು ಆಗ್ರಹಿಸಿದ್ದು, ಈ ವಿಚಾರವನ್ನು ಕರ್ನಾಟಕ ಸರ್ಕಾರದ ಗಮನಕ್ಕೆ ತರುವಂತೆ ತಮಿಳುನಾಡು ಸರ್ಕಾರವನ್ನು ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



