ದೆಹಲಿಯಲ್ಲಿ ಕರಡು ಮತದಾರರ ಪಟ್ಟಿ ಪ್ರಕಟ: SIR ಬಳಿಕ 47.7 ಲಕ್ಷ ಮತದಾರರ ಹೆಸರು ಡಿಲೀಟ್..!
ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಡಿ ಮನೆ-ಮನೆಗೆ ತೆರಳಿ ನಡೆಸಿದ ಪರಿಶೀಲನೆಯ ಬಳಿಕ ಒಟ್ಟು 1.45 ಕೋಟಿ ಮತದಾರರ ಪೈಕಿ 47.7 ಲಕ್ಷ ಮಂದಿಯ ಹೆಸರುಗಳನ್ನು ಕರಡು ಪಟ್ಟಿಯಿಂದ ಕೈಬಿಡಲಾಗಿದೆ.

ನವದೆಹಲಿ: ದೆಹಲಿ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯು ಇತ್ತೀಚಿನ ಕರಡು ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ರಾಜಧಾನಿಯ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದೆ.
ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ನಂತರ ಬರೋಬ್ಬರಿ 47.7 ಲಕ್ಷ ಮತದಾರರ ಹೆಸರುಗಳನ್ನು ಕರಡು ಪಟ್ಟಿಯಿಂದ ಕೈಬಿಡಲಾಗಿದೆ.
ದೆಹಲಿ ಚುನಾವಣಾ ಕಚೇರಿ ಸೋಮವಾರ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಡಿ ಮನೆ-ಮನೆಗೆ ತೆರಳಿ ನಡೆಸಿದ ಪರಿಶೀಲನೆಯ ಬಳಿಕ ಒಟ್ಟು 1.45 ಕೋಟಿ ಮತದಾರರ ಪೈಕಿ 47.7 ಲಕ್ಷ ಮಂದಿಯ ಹೆಸರುಗಳನ್ನು ಕರಡು ಪಟ್ಟಿಯಿಂದ ಕೈಬಿಡಲಾಗಿದೆ.
ಕರಡು ಪಟ್ಟಿಯಲ್ಲಿ ಹೆಸರು ಕಾಣಿಸದಿರುವ ಮತದಾರರು ಸೆಪ್ಟೆಂಬರ್ 30ರೊಳಗೆ ಅಗತ್ಯ ದಾಖಲೆಗಳೊಂದಿಗೆ ಫಾರ್ಮ್-6 ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗಾಗಿ ಅರ್ಜಿ ಸಲ್ಲಿಸಬಹುದು ಎಂದು ಮುಖ್ಯ ಚುನಾವಣಾಧಿಕಾರಿ ತಿಳಿಸಿದ್ದಾರೆ. ಅಂತಿಮ ಮತದಾರರ ಪಟ್ಟಿಯನ್ನು ನವೆಂಬರ್ 4ರಂದು ಪ್ರಕಟಿಸಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ.
ಚುನಾವಣಾ ಆಯೋಗ ಪರಿಷ್ಕರಿಸಿರುವ ವೇಳಾಪಟ್ಟಿಯ ಪ್ರಕಾರ, ಸೆಪ್ಟೆಂಬರ್ 30ರವರೆಗೆ ಸಲ್ಲಿಕೆಯಾಗುವ ಹಕ್ಕುಗಳು ಮತ್ತು ಆಕ್ಷೇಪಣೆಗಳನ್ನು ಪರಿಶೀಲಿಸುವ ಪ್ರಕ್ರಿಯೆ ಮುಂದುವರಿಯಲಿದೆ. ನೋಟಿಸ್ ಜಾರಿ ಹಾಗೂ ಅವುಗಳ ವಿಲೇವಾರಿ ಪ್ರಕ್ರಿಯೆ ಅಕ್ಟೋಬರ್ 29ರವರೆಗೆ ನಡೆಯಲಿದೆ ಎಂದು ತಿಳಿದುಬಂದಿದೆ.
ಎಸ್‌ಐಆರ್ ಪ್ರಕ್ರಿಯೆ ಜೂನ್ 30ರಂದು ಆರಂಭವಾಗಿ ಆಗಸ್ಟ್ 17ರಂದು ಪೂರ್ಣಗೊಂಡಿತ್ತು. ಈ ವೇಳೆ ಸ್ವೀಕರಿಸಿ ಡಿಜಿಟಲೀಕರಣಗೊಳಿಸಲಾದ ಗಣತಿ ನಮೂನೆಗಳ ಆಧಾರದ ಮೇಲೆ ಸುಮಾರು 97.5 ಲಕ್ಷ ಮತದಾರರನ್ನು ಕರಡು ಪಟ್ಟಿಯಲ್ಲಿ ಸೇರಿಸಲಾಗಿದೆ. ದೆಹಲಿಯ ಒಟ್ಟು 1,45,10,299 ಮತದಾರರ ಪೈಕಿ ಶೇ.67.18ರಷ್ಟು ಮಂದಿಯ ನಮೂನೆಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ.
ನಉಳಿದ 47.7 ಲಕ್ಷ ಮತದಾರರನ್ನು ಗೈರು, ಸ್ಥಳಾಂತರಗೊಂಡವರು, ಮೃತಪಟ್ಟವರು, ನಕಲಿ ಮತದಾರರು ಹಾಗೂ ಇತರರು ಎಂಬ ASDDO ವರ್ಗಗಳಿಗೆ ಸೇರಿಸಲಾಗಿದೆ. ಹೀಗಾಗಿ ಇವರ ಹೆಸರುಗಳನ್ನು ಕರಡು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ.
ದೆಹಲಿಯ 70 ವಿಧಾನಸಭಾ ಕ್ಷೇತ್ರಗಳಲ್ಲಿ ಗಣತಿ ನಮೂನೆಗಳ ಡಿಜಿಟಲೀಕರಣದ ಪ್ರಮಾಣದಲ್ಲಿ ಸಾಕಷ್ಟು ವ್ಯತ್ಯಾಸ ಕಂಡುಬಂದಿದೆ.
ರೋಹಿಣಿ ಕ್ಷೇತ್ರದಲ್ಲಿ ಶೇ.83.43ರಷ್ಟು ಡಿಜಿಟಲೀಕರಣವಾಗಿದ್ದು, ಇದು ಅತಿ ಹೆಚ್ಚು ಪ್ರಮಾಣವಾಗಿದೆ. ತುಘಲಕಾಬಾದ್‌ನಲ್ಲಿ ಶೇ.52.15ರಷ್ಟು ದಾಖಲಾಗಿದ್ದು, ಇದು ಅತ್ಯಂತ ಕಡಿಮೆ ಪ್ರಮಾಣವಾಗಿದೆ.
ಮನೆ-ಮನೆಗೆ ತೆರಳಿ ಮತದಾರರ ವಿವರಗಳನ್ನು ಪರಿಶೀಲಿಸುವ ಮೂಲಕ ಪರಿಷ್ಕೃತ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವ ಉದ್ದೇಶದಿಂದ ಎಸ್‌ಐಆರ್ ನಡೆಸಲಾಗಿತ್ತು.
ಈ ಪ್ರಕ್ರಿಯೆಯಲ್ಲಿ ಗಣತಿ ನಮೂನೆಗಳು ಸ್ವೀಕಾರವಾಗದ ಮತದಾರರು ಇದೀಗ ಹಕ್ಕು ಮತ್ತು ಆಕ್ಷೇಪಣೆಗಳ ಪ್ರಕ್ರಿಯೆಯ ಮೂಲಕ ಮತದಾರರ ಪಟ್ಟಿಗೆ ತಮ್ಮ ಹೆಸರು ಸೇರ್ಪಡೆ ಮಾಡಿಸಿಕೊಳ್ಳಲು ಅವಕಾಶವಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



