ಮಣಿಪುರ ನೂತನ ಸಿಎಂ ಆಗಿ ಖೇಮ್‌ಚಂದ್ ಸಿಂಗ್ ಪ್ರಮಾಣ ವಚನ ಸ್ವೀಕಾರ; ರಾಷ್ಟ್ರಪತಿ ಆಡಳಿತ ಅಂತ್ಯ
ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ರದ್ದುಗೊಳಿಸಿದ ನಂತರ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ವೈ ಖೇಮ್‌ಚಂದ್ ಸಿಂಗ್ ಅವರು ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು.

ಇಂಫಾಲ್: ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಒಂದು ವರ್ಷದ ರಾಷ್ಟ್ರಪತಿ ಆಡಳಿತ ಅಂತ್ಯವಾಗಿದ್ದು, ಮತ್ತೆ ಬಿಜೆಪಿ ಸರ್ಕಾರ ರಚನೆಯಾಗಿದೆ.
ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ರದ್ದುಗೊಳಿಸಿದ ನಂತರ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ವೈ ಖೇಮ್‌ಚಂದ್ ಸಿಂಗ್ ಅವರು ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು.
ಇಂದು ಇಂಫಾಲ್‌ನ ಲೋಕ ಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರು ಸಿಂಗ್ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.
ನಂತರ ಕುಕಿ-ಝೋ ಸಮುದಾಯದ ಬಿಜೆಪಿ ಶಾಸಕ ನೆಮ್ಚಾ ಕಿಪ್ಗೆನ್ ಮತ್ತು ನಾಗಾ ಮೂಲದ ಲೋಸಿ ದಿಖೋ ಅವರು ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯ(MHA) ಅಧಿಸೂಚನೆ ಹೊರಡಿಸಿದೆ. ಈ ಮೂಲಕ ಹಿಂಸಾಚಾರ ಪೀಡಿತ ಈಶಾನ್ಯ ರಾಜ್ಯದಲ್ಲಿ ಹೊಸ ಚುನಾಯಿತ ಸರ್ಕಾರ ರಚನೆಗೆ ದಾರಿ ಮಾಡಿಕೊಡಲಾಗಿದೆ.
ನಿನ್ನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ವೈ ಖೇಮ್‌ಚಂದ್ ಸಿಂಗ್ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿತ್ತು. ಸಭೆಯಲ್ಲಿ ಮಾಜಿ ಸಿಎಂ ಬಿರೇನ್ ಸಿಂಗ್, ಬಿಜೆಪಿ ಶಾಸಕರು, ಪಕ್ಷದ ಕೇಂದ್ರ ವೀಕ್ಷಕ ತರುಣ್ ಚುಗ್ ಮತ್ತು ಬಿಜೆಪಿ ಈಶಾನ್ಯ ಉಸ್ತುವಾರಿ ಸಂಬಿತ್ ಪಾತ್ರ ಸೇರಿದಂತೆ ಇತರರು ಭಾಗವಹಿಸಿದ್ದರು.
ಸಿಂಗ್‌ಜಮೇ ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಸಿಂಗ್ ಅವರು ಈ ಹಿಂದೆ, ಬಿರೇನ್ ಸಿಂಗ್ ಸರ್ಕಾರದ ಎರಡನೇ ಅವಧಿಯಲ್ಲಿ, ಕ್ಯಾಬಿನೆಟ್ ಸಚಿವರಾಗಿ ಸೇವೆ ಸಲ್ಲಿಸಿದ್ದರು.
ಕಳೆದ ಮೇ 2023ರಿಂದ ಮಣಿಪುರದಲ್ಲಿ ಆರಂಭವಾದ ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವಿನ ಜನಾಂಗೀಯ ಸಂಘರ್ಷವು ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಹದಗೆಡಿಸಿತ್ತು. ಈ ಹಿನ್ನೆಲೆಯಲ್ಲಿ ಉಂಟಾದ ರಾಜಕೀಯ ಅಸ್ಥಿರತೆಯಿಂದಾಗಿ, ಅಂದಿನ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ನೇತೃತ್ವದ ಸರ್ಕಾರ ಪತನಗೊಂಡ ನಂತರ, ಕಳೆದ ಒಂದು ವರ್ಷದಿಂದ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



