ವಿಚಿತ್ರ ಆದ್ರೂ ಸತ್ಯ.. ಹೆಂಡತಿ ಎಸೆದ ಮೊಬೈಲ್ ತಲೆಗೆ ಬಡಿದು ಗಂಡ ಸಾವು!
ಒಡಿಶಾದ ಬಲಾಂಗೀರ್ ಜಿಲ್ಲೆಯಲ್ಲಿ ಈ ಘಟನೆ ವರದಿಯಾಗಿದ್ದು, ಕುಟುಂಬ ಕಲಹದ ವೇಳೆ ಪತ್ನಿ ಮೊಬೈಲ್ ಫೋನ್‌ನಿಂದ ತಲೆಗೆ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾನೆ.

ಭುವನೇಶ್ವರ: ಮನುಷ್ಯನ ಜೀವನ ನೀರಿನ ಮೇಲಿನ ಗುಳ್ಳೆಯಂತೆ ಎಂಬ ಮಾತು ಎಷ್ಟು ಸತ್ಯ ಎಂದರೆ ಮನುಷ್ಯ ಎಂತೆಂಥಹ ವಿಚಿತ್ರ ಕಾರಣಗಳಿಂದೆಲ್ಲಾ ಸಾಯುತ್ತಿದ್ದು, ಈ ಪಟ್ಟಿಗೆ ಮತ್ತೊಂದು ಘಟನೆ ಸೇರ್ಪಡೆಯಾಗಿದ್ದು ಪತ್ನಿ ಎಸೆದ ಮೊಬೈಲ್ ಫೋನ್ ತಲೆಗೆ ಬಡಿದು ಪತಿ ಸಾವನ್ನಪ್ಪಿರುವ ವಿಚಿತ್ರ ಘಟನೆ ವರದಿಯಾಗಿದೆ.
ಒಡಿಶಾದ ಬಲಾಂಗೀರ್ ಜಿಲ್ಲೆಯಲ್ಲಿ ಈ ಘಟನೆ ವರದಿಯಾಗಿದ್ದು, ಕುಟುಂಬ ಕಲಹದ ವೇಳೆ ಪತ್ನಿ ಮೊಬೈಲ್ ಫೋನ್‌ನಿಂದ ತಲೆಗೆ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ.
ಮೂಲಗಳ ಪ್ರಕಾರ, ಶನಿವಾರ ದಂಪತಿಯ ನಡುವೆ ಮನೆಯಲ್ಲಿ ಮಾತಿನ ಚಕಮಕಿ ನಡೆದಿದ್ದು, ಅದು ತೀವ್ರ ವಾಗ್ವಾದಕ್ಕೆ ತಿರುಗಿದೆ. ಈ ವೇಳೆ ಆಕ್ರೋಶದಿಂದ ಪತ್ನಿ ತನ್ನ ಕೈಯಲ್ಲಿದ್ದ ಮೊಬೈಲ್ ಫೋನ್ ಅನ್ನು ಪತಿ ಮೇಲೆ ರಭಸವಾಗಿ ಎಸೆದಿದ್ದಾಳೆ. ಅದು ನೇರವಾಗಿ ಪತಿಯ ತಲೆಗೆ ಬಡಿದಿದ್ದು, ಆತ ಗಂಭೀರವಾಗಿ ಗಾಯಗೊಂಡಿದ್ದಾನೆ ಎನ್ನಲಾಗಿದೆ.
ಕೂಡಲೇ ಗಾಯಗೊಂಡ ವ್ಯಕ್ತಿಯನ್ನು ಕೂಡಲೇ ಬಲಾಂಗೀರ್ ಜಿಲ್ಲಾ ಮುಖ್ಯ ಆಸ್ಪತ್ರೆ (ಡಿಎಚ್‌ಎಚ್)ಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಚಿಕಿತ್ಸೆ ಬಳಿಕ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದ ಹಿನ್ನೆಲೆಯಲ್ಲಿ ವೈದ್ಯರು ಆಸ್ಪತ್ರೆಯಿಂದ ಬಿಡುಗಡೆ ಮಾಡಿದ್ದರು.
ಆದರೆ ಮನೆಗೆ ಮರಳಿದ ಕೆಲವೇ ಸಮಯದಲ್ಲಿ ಅವರ ಆರೋಗ್ಯ ಏಕಾಏಕಿ ಹದಗೆಟ್ಟಿದೆ ಎಂದು ಕುಟುಂಬದವರು ತಿಳಿಸಿದ್ದಾರೆ. ಕೂಡಲೇ ಅವರನ್ನು ಮತ್ತೆ ಜಿಲ್ಲಾ ಮುಖ್ಯ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ವೈದ್ಯರ ಎಲ್ಲಾ ಪ್ರಯತ್ನಗಳ ನಡುವೆಯೂ ಅವರನ್ನು ಬದುಕಿಸಲು ಸಾಧ್ಯವಾಗಲಿಲ್ಲ. ಆಸ್ಪತ್ರೆಗೆ ದಾಖಲಿಸಿದ ಬಳಿಕ ವೈದ್ಯರು ಅವರನ್ನು ಮೃತಪಟ್ಟಿರುವುದಾಗಿ ಘೋಷಿಸಿದರು.
ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಘಟನೆಯ ನಿಖರ ಕಾರಣ ಹಾಗೂ ಸಾವಿಗೆ ಕಾರಣವಾದ ಪರಿಸ್ಥಿತಿಯನ್ನು ಪತ್ತೆಹಚ್ಚುವ ನಿಟ್ಟಿನಲ್ಲಿ ತನಿಖೆ ನಡೆಯುತ್ತಿದೆ.
ಮರಣೋತ್ತರ ಪರೀಕ್ಷೆಯ ವರದಿಗಾಗಿ ಪೊಲೀಸರು ಕಾಯುತ್ತಿದ್ದು, ವರದಿ ಬಂದ ಬಳಿಕ ಸಾವಿನ ನಿಖರ ಕಾರಣದ ಬಗ್ಗೆ ಸ್ಪಷ್ಟತೆ ಸಿಗುವ ನಿರೀಕ್ಷೆಯಿದೆ. ತನಿಖೆಯ ವರದಿ ಆಧರಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಘಟನೆ ಸ್ಥಳೀಯರಲ್ಲಿ ಆಘಾತ ಮೂಡಿಸಿದ್ದು, ಕೌಟುಂಬಿಕ ಕಲಹಗಳು ಕೆಲವೊಮ್ಮೆ ಎಷ್ಟು ದುರ್ಘಟನಾತ್ಮಕ ಪರಿಣಾಮಗಳಿಗೆ ಕಾರಣವಾಗಬಹುದು ಎಂಬುದನ್ನು ಮತ್ತೊಮ್ಮೆ ಬೆಳಕಿಗೆ ತಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



