ಜಮ್ಮು-ಕಾಶ್ಮೀರದಲ್ಲಿ ಮಳೆಯ ಆರ್ಭಟ; ಭೂಕುಸಿತ-ಪ್ರವಾಹಕ್ಕೆ 12 ಮಂದಿ ಬಲಿ, ಹಲವರು ನಾಪತ್ತೆ
ಲೋವರ್ ಮುರ್ರಾ ಪ್ರದೇಶದಲ್ಲಿ ಮತ್ತೊಂದು ಭೂಕುಸಿತ ಸಂಭವಿಸಿ ಮೊಹಮ್ಮದ್ ಲತೀಫ್ ಅವರ ಮನೆ ಮಣ್ಣಿನಡಿ ಸಿಲುಕಿದೆ.

ಜಮ್ಮು: ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭಾನುವಾರ ಮುಂಜಾನೆ ಸುರಿದ ಭಾರೀ ಮಳೆಯಿಂದ ಭೂಕುಸಿತ ಮತ್ತು ಹಠಾತ್ ಪ್ರವಾಹ ಉಂಟಾಗಿ ಕನಿಷ್ಠ 12 ಮಂದಿ ಮೃತಪಟ್ಟಿದ್ದು, ಹಲವರು ನಾಪತ್ತೆಯಾಗಿದ್ದಾರೆ.
ಅತಿಹೆಚ್ಚು ಹಾನಿ ಸುರಂಕೋಟ್ ತಹಸೀಲಿನಲ್ಲಿ ಸಂಭವಿಸಿದ್ದು, ಸಂಕಷ್ಟಕ್ಕೆ ಸಿಲುಕಿರುವ ನಿವಾಸಿಗಳನ್ನು ರಕ್ಷಿಸಲು, ಹಾನಿಗೊಳಗಾದ ಪ್ರದೇಶಗಳನ್ನು ತೆರವುಗೊಳಿಸಲು ಹಾಗೂ ಸಂತ್ರಸ್ತರಿಗೆ ತುರ್ತು ನೆರವು ಒದಗಿಸಲು ರಕ್ಷಣಾ ತಂಡಗಳನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನೂನಾಬಂಡಿ ಗ್ರಾಮದಲ್ಲಿ ಭೂಕುಸಿತದಿಂದ ಮನೆ ಕುಸಿದು 28 ವರ್ಷದ ನಾಜಿಯಾ ಕೌಸರ್ ಮೃತಪಟ್ಟಿದ್ದಾರೆ. ಅವರ ಪತಿ ಮೊಹಮ್ಮದ್ ಹಫೀಜ್ ಹಾಗೂ 2-6 ವರ್ಷದೊಳಗಿನ ಮೂವರು ಮಕ್ಕಳನ್ನು ಗಾಯಗೊಂಡ ಸ್ಥಿತಿಯಲ್ಲಿ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಲೋವರ್ ಮುರ್ರಾ ಪ್ರದೇಶದಲ್ಲಿ ಮತ್ತೊಂದು ಭೂಕುಸಿತ ಸಂಭವಿಸಿ ಮೊಹಮ್ಮದ್ ಲತೀಫ್ ಅವರ ಮನೆ ಮಣ್ಣಿನಡಿ ಸಿಲುಕಿದೆ. ಲತೀಫ್ ಸೇರಿದಂತೆ ಅವರ ಕುಟುಂಬದ ಐವರು ಸದಸ್ಯರು ನಾಪತ್ತೆಯಾಗಿದ್ದು, ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ಮರ್ಹೋಟೆ ಪ್ರದೇಶದಲ್ಲಿ ಇರಾಮ್ ಎಂಬ ಅಪ್ರಾಪ್ತ ಬಾಲಕಿ ನೀರಿನಲ್ಲಿ ಕೊಚ್ಚಿಹೋಗಿ ಮೃತಪಟ್ಟಿದ್ದಾಳೆ. ಇದೇ ವೇಳೆ ಧುಂದಾಕ್ ಲಥೂಂಗ್ ಸೇತುವೆ ಸಮೀಪದ ಹೊಳೆಯಲ್ಲಿ ಗುರುತು ಪತ್ತೆಯಾಗದ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಾರೀ ಮಳೆಯ ಪರಿಣಾಮ ಪೂಂಚ್ ಜಿಲ್ಲೆಯ ಹಲವೆಡೆ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಹವಾಮಾನ ಇಲಾಖೆ ಮುಂದಿನ ಕೆಲ ಗಂಟೆಗಳಲ್ಲೂ ಭಾರೀ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಜನರು ಎಚ್ಚರಿಕೆಯಿಂದ ಇರುವಂತೆ ಆಡಳಿತ ಮಂಡಳಿ ಸೂಚನೆ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



