ದೇಶ

ಸಂಸತ್ ಚಲೋ ಪ್ರತಿಭಟನೆ ಹಿಂಸಾಚಾರ: ಅಪರಿಚಿತರ ವಿರುದ್ಧ FIR ದಾಖಲು; ಆರೋಪಿಗಳಿಗಾಗಿ ತೀವ್ರ ಶೋಧ..!

ಈ ನಡುವೆ ಕಾಕ್‌ರೋಚ್ ಜನತಾ ಪಾರ್ಟಿ (CJP) ಹಾಗೂ ರೈತ ಸಂಘಟನೆಗಳ ನೇತೃತ್ವದಲ್ಲಿ ನಡೆದ ಪ್ರತಿಭಟನೆಯ ಬಳಿಕ ದೆಹಲಿಯಾದ್ಯಂತ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ.

ಸಂಸತ್ ಚಲೋ ಪ್ರತಿಭಟನೆ ಹಿಂಸಾಚಾರ: ಅಪರಿಚಿತರ ವಿರುದ್ಧ FIR ದಾಖಲು; ಆರೋಪಿಗಳಿಗಾಗಿ ತೀವ್ರ ಶೋಧ..!
ಹಿಂಸಾಚಾರದಲ್ಲಿ ಭಾಗಿಯಾಗಿರುವವರನ್ನು ಗುರುತಿಸಲು ತನಿಖಾಧಿಕಾರಿಗಳು ಸಿಸಿಟಿವಿ ದೃಶ್ಯಾವಳಿಗಳು, ವಿಡಿಯೋ ರೆಕಾರ್ಡಿಂಗ್‌ಗಳು ಮತ್ತು ಇತರ ಎಲೆಕ್ಟ್ರಾನಿಕ್ ಪುರಾವೆಗಳನ್ನು ಪರಿಶೀಲಿಸುತ್ತಿದ್ದಾರೆ.
Published On :

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ರೀಗಲ್ ಸಿನಿಮಾ ಸಮೀಪ ನಡೆದ 'ಸಂಸತ್ ಚಲೋ' ಪ್ರತಿಭಟನೆ ವೇಳೆ ಸಂಭವಿಸಿದ ಹಿಂಸಾಚಾರ, ಕಲ್ಲುತೂರಾಟ ಮತ್ತು ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಸೋಮವಾರ ನಡೆದ ಪ್ರತಿಭಟನೆ ವೇಳೆ ಕನ್ನಾಟ್ ಪ್ಲೇಸ್‌ನ ಔಟರ್ ಸರ್ಕಲ್ ಪ್ರದೇಶದಲ್ಲಿ ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಿ, ಹಲವು ಪೊಲೀಸ್ ವಾಹನಗಳನ್ನು ಧ್ವಂಸಗೊಳಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಲ್ಲಿ ಭಾಗಿಯಾಗಿರುವವರನ್ನು ಪತ್ತೆಹಚ್ಚಲು ಸಿಸಿಟಿವಿ ದೃಶ್ಯಾವಳಿ, ವಿಡಿಯೊಗಳು ಹಾಗೂ ಇತರೆ ಎಲೆಕ್ಟ್ರಾನಿಕ್ ಸಾಕ್ಷ್ಯಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

ಈ ನಡುವೆ ಕಾಕ್‌ರೋಚ್ ಜನತಾ ಪಾರ್ಟಿ (CJP) ಹಾಗೂ ರೈತ ಸಂಘಟನೆಗಳ ನೇತೃತ್ವದಲ್ಲಿ ನಡೆದ ಪ್ರತಿಭಟನೆಯ ಬಳಿಕ ದೆಹಲಿ ನಗರಾದ್ಯಂತ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ.

ಸೂಕ್ಷ್ಮ ಪ್ರದೇಶಗಳಲ್ಲಿ ದೆಹಲಿ ಪೊಲೀಸ್ ಹಾಗೂ ಅರೆಸೈನಿಕ ಪಡೆಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ.

ನವದೆಹಲಿ, ಮಧ್ಯ, ಉತ್ತರ, ದಕ್ಷಿಣ, ನೈಋತ್ಯ ಹಾಗೂ ಆಗ್ನೇಯ ಜಿಲ್ಲೆಗಳು ಸೇರಿದಂತೆ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲಾಗಿದೆ.

ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದ್ದು, ವಾಹನ ತಪಾಸಣೆ, ಗಸ್ತು ಹಾಗೂ ಸರ್ಕಾರಿ ಕಟ್ಟಡಗಳು ಮತ್ತು ಪ್ರತಿಭಟನೆ ನಡೆಯುವ ಸಾಧ್ಯತೆ ಇರುವ ಪ್ರದೇಶಗಳಲ್ಲಿ ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಸೋಮವಾರ ನಡೆದ 'ಸಂಸತ್ ಚಲೋ' ಮೆರವಣಿಗೆ ವೇಳೆ ನಡೆದ ಘರ್ಷಣೆಯಲ್ಲಿ 118ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದು, ಹಲವು ಪೊಲೀಸ್ ವಾಹನಗಳು ಹಾನಿಗೊಳಗಾಗಿದ್ದಾರೆಂದು ತಿಳಿದುಬಂದಿದೆ.

ವದಂತಿಗಳಿಗೆ ಕಿವಿಗೊಡದಂತೆ ಮನವಿ

ಏತನ್ಮಧ್ಯೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮಗಳನ್ನು ಕೈಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ವದಂತಿಗಳು ಅಥವಾ ದೃಢೀಕರಿಸದ ಮಾಹಿತಿಯನ್ನು ಹಂಚಿಕೊಳ್ಳಬಾರದು ಎಂದು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ಈ ಪ್ರಕರಣದ ತನಿಖೆ ಮುಂದುವರಿದಿದ್ದು, ಹಿಂಸಾಚಾರ, ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡಿರುವುದು ದೃಢಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.