NEET ಸುಧಾರಣೆ ಮೇಲೆ ಸುಪ್ರೀಂ ಕೋರ್ಟ್ ನಿಗಾ; ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಕೇಂದ್ರ ಸರ್ಕಾರ ಕಠಿಣ ಕ್ರಮ ಭರವಸೆ
ಕೇಂದ್ರ ಸರ್ಕಾರದ ಪರ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ರಾಧಾಕೃಷ್ಣನ್ ಸಮಿತಿಯ ಶಿಫಾರಸುಗಳನ್ನು ಮೀರಿದ ಹಲವು ಸುಧಾರಣಾ ಕ್ರಮಗಳನ್ನು ಒಳಗೊಂಡ ಸಮಗ್ರ ವರದಿಯನ್ನು ಸರ್ಕಾರ ಸಲ್ಲಿಸಲಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ಮರುಕಳಿಸದಂತೆ ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ ಕ್ರಮಗಳ ಮೇಲೆ ತಾನು ನಿಕಟ ನಿಗಾ ವಹಿಸುವುದಾಗಿ ಸುಪ್ರೀಂ ಕೋರ್ಟ್ ಶುಕ್ರವಾರ ತಿಳಿಸಿದೆ. ಪರೀಕ್ಷಾ ವ್ಯವಸ್ಥೆಯಲ್ಲಿ ತಾತ್ಕಾಲಿಕ ಕ್ರಮಗಳು ಸಾಕಾಗುವುದಿಲ್ಲ; ದೀರ್ಘಕಾಲೀನ ಸಾಂಸ್ಥಿಕ ಸುಧಾರಣೆಗಳೇ ಅಗತ್ಯ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
ಭಾರತ ವೈದ್ಯಕೀಯ ಸಂಘಗಳ ಒಕ್ಕೂಟ (FAIMA) ಸೇರಿದಂತೆ ಹಲವು ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಅಲೋಕ್ ಆರಾಧೆ ಅವರಿದ್ದ ಪೀಠವು, ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಹೆಚ್ಚಿಸಲು ಕೈಗೊಂಡಿರುವ ಕ್ರಮಗಳು, ರಾಧಾಕೃಷ್ಣನ್ ಸಮಿತಿಯ ಶಿಫಾರಸುಗಳ ಅನುಷ್ಠಾನ, ಹಾಗೂ ಐಐಟಿ ಮಾದರಿಯ ಪರೀಕ್ಷಾ ವ್ಯವಸ್ಥೆ ಅಳವಡಿಸಿಕೊಳ್ಳುವ ಕುರಿತು ಕೇಂದ್ರ ಸರ್ಕಾರ ಕೈಗೊಂಡಿರುವ ಕ್ರಮಗಳ ವಿವರವನ್ನು ದಾಖಲೆಯಾಗಿ ಸಲ್ಲಿಸುವಂತೆ ಸೂಚಿಸಿತು.
ಕೇಂದ್ರ ಸರ್ಕಾರದ ಪರ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ರಾಧಾಕೃಷ್ಣನ್ ಸಮಿತಿಯ ಶಿಫಾರಸುಗಳನ್ನು ಮೀರಿದ ಹಲವು ಸುಧಾರಣಾ ಕ್ರಮಗಳನ್ನು ಒಳಗೊಂಡ ಸಮಗ್ರ ವರದಿಯನ್ನು ಸರ್ಕಾರ ಸಲ್ಲಿಸಲಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.
ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗಬಾರದು. ನಾವು ರಾಧಾಕೃಷ್ಣನ್ ಸಮಿತಿಯ ಶಿಫಾರಸುಗಳನ್ನು ಮೀರಿ ಕ್ರಮ ಕೈಗೊಳ್ಳುತ್ತಿದ್ದೇವೆ. ಸರ್ಕಾರ ಹತ್ತು ಹೆಜ್ಜೆ ಮುಂದೆ ನಡೆಯುತ್ತಿದೆ ಎಂದು ನಾನು ಭರವಸೆ ನೀಡುತ್ತೇನೆ. ಎಲ್ಲವೂ ಅತ್ಯುನ್ನತ ಮಟ್ಟದಲ್ಲಿ ಮೇಲ್ವಿಚಾರಣೆಯಲ್ಲಿದೆ ಎಂದು ಮೆಹ್ತಾ ವಾದಿಸಿದರು.
ಎರಡು ವರ್ಷಗಳ ಹಿಂದೆ ಇದೇ ರೀತಿಯ ಪ್ರಕರಣದ ವಿಚಾರಣೆ ವೇಳೆ, ಪ್ರಶ್ನೆಪತ್ರಿಕೆ ಮುದ್ರಣದಿಂದ ಹಿಡಿದು ಸಾಗಣೆವರೆಗೆ ಇರುವ ಭದ್ರತಾ ಕ್ರಮಗಳ ಕುರಿತು ಸರ್ಕಾರ ನ್ಯಾಯಾಲಯಕ್ಕೆ ವಿವರಿಸಿತ್ತು ಎಂದು ಅವರು ನೆನಪಿಸಿದರು.
ಆದರೆ, ನೀಟ್-ಯುಜಿ ಮರುಪರೀಕ್ಷೆಗೆ ಪ್ರಶ್ನೆಪತ್ರಿಕೆ ಸಾಗಿಸಲು ಭಾರತೀಯ ವಾಯುಪಡೆಯನ್ನೇ ಬಳಸಿದ್ದರೂ, ಇಂತಹ ಕ್ರಮಗಳು ಕೇವಲ ತಾತ್ಕಾಲಿಕ ಪರಿಹಾರಗಳಾಗಿವೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು.
ತಾತ್ಕಾಲಿಕ ವ್ಯವಸ್ಥೆಗಳ ಸಮಸ್ಯೆ ಹಲವು ವರ್ಷಗಳಿಂದ ನಮ್ಮನ್ನು ಕಾಡುತ್ತಿದೆ ಎಂದು ನ್ಯಾಯಮೂರ್ತಿ ಪಿ.ಎಸ್. ನರಸಿಂಹ ಹೇಳಿ, ಪರೀಕ್ಷಾ ವ್ಯವಸ್ಥೆಯಲ್ಲಿ ಶಾಶ್ವತ ಸಾಂಸ್ಥಿಕ ಸುಧಾರಣೆಗಳು ಜಾರಿಗೆ ಬರುವಂತೆ ನ್ಯಾಯಾಲಯ ಖಚಿತಪಡಿಸಿಕೊಳ್ಳಲಿದೆ ಎಂದು ತಿಳಿಸಿದರು.
ವಿಚಾರಣೆ ವೇಳೆ ಭಾರತ ವೈದ್ಯಕೀಯ ಸಂಘಗಳ ಒಕ್ಕೂಟ ಪರ ವಕೀಲರಾದ ತನ್ವಿ ದುಬೆ, ಮುಂದಿನ ವರ್ಷದಿಂದ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನೀಟ್-ಯುಜಿ ಪರೀಕ್ಷೆಗೆ ಜಾರಿಗೆ ತರಲು ಉದ್ದೇಶಿಸಿರುವ ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT) ಮಾದರಿಗಾಗಿ ಸಮಗ್ರ ಪ್ರಮಾಣಿತ ಕಾರ್ಯವಿಧಾನ (SOP) ಪ್ರಕಟಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



