ದೇಶ

NEET ಪ್ರಶ್ನೆಪತ್ರಿಕೆ ಸೋರಿಕೆ: ಕೊನೆಗೂ ಕೇಂದ್ರ ಸಚಿವ Dharmendra Pradhan ರಾಜಿನಾಮೆ; ಪ್ರಧಾನಿ ಮೋದಿಗೆ ಪತ್ರ! ಹೇಳಿದ್ದೇನು?

ನೀಟ್-ಯುಜಿ 2026 ಪರೀಕ್ಷೆಗೆ ಸಂಬಂಧಿಸಿದ ಬೆಳವಣಿಗೆಗಳ ನೈತಿಕ ಹೊಣೆಯನ್ನು ಮೊದಲ ದಿನದಿಂದಲೇ ತಾವು ಹೊತ್ತಿದ್ದು, ಪರಿಸ್ಥಿತಿಯಿಂದ ಎಂದಿಗೂ ಹಿಂದೆ ಸರಿಯಲಿಲ್ಲ' ಎಂದು ಹೇಳಿದ್ದಾರೆ..

NEET ಪ್ರಶ್ನೆಪತ್ರಿಕೆ ಸೋರಿಕೆ: ಕೊನೆಗೂ ಕೇಂದ್ರ ಸಚಿವ Dharmendra Pradhan ರಾಜಿನಾಮೆ; ಪ್ರಧಾನಿ ಮೋದಿಗೆ ಪತ್ರ! ಹೇಳಿದ್ದೇನು?
ಧರ್ಮೇಂದ್ರ ಪ್ರಧಾನ್
Published On :

ನವದೆಹಲಿ: ನೀಟ್ ವಿವಾದದ ನಡುವೆಯೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಸಲ್ಲಿಸಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಹೌದು... ನೀಟ್-ಯುಜಿ 2026 ಪರೀಕ್ಷೆ ವಿವಾದದ ನಡುವೆಯೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ದೇಶದ ಯುವಜನತೆ ಹಾಗೂ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ಅವರು ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ (X) ನಲ್ಲಿ ಪ್ರಕಟಿಸಿರುವ ಎರಡು ಪುಟಗಳ ಪತ್ರದಲ್ಲಿ ದೇಶದ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿರುವ ಧರ್ಮೇಂದ್ರ ಪ್ರಧಾನ್, 'ನೀಟ್-ಯುಜಿ 2026 ಪರೀಕ್ಷೆಗೆ ಸಂಬಂಧಿಸಿದ ಬೆಳವಣಿಗೆಗಳ ನೈತಿಕ ಹೊಣೆಯನ್ನು ಮೊದಲ ದಿನದಿಂದಲೇ ತಾವು ಹೊತ್ತಿದ್ದು, ಪರಿಸ್ಥಿತಿಯಿಂದ ಎಂದಿಗೂ ಹಿಂದೆ ಸರಿಯಲಿಲ್ಲ' ಎಂದು ಹೇಳಿದ್ದಾರೆ.

ಮೇ 3, 2026ರಂದು ನಡೆದ ನೀಟ್-ಯುಜಿ ಪರೀಕ್ಷೆಯಲ್ಲಿ ಅಕ್ರಮಗಳು ಬೆಳಕಿಗೆ ಬಂದ ತಕ್ಷಣವೇ ಕೇಂದ್ರ ಸರ್ಕಾರ ತನಿಖೆಯನ್ನು ಸಿಬಿಐಗೆ ವಹಿಸಿತ್ತು. ಪರೀಕ್ಷೆಯನ್ನು ರದ್ದುಪಡಿಸಿ ಮರುಪರೀಕ್ಷೆ ನಡೆಸುವ ನಿರ್ಧಾರ ಕೈಗೊಂಡಿತ್ತು. ಜೊತೆಗೆ ಮುಂದಿನ ವರ್ಷದಿಂದ ನೀಟ್ ಪರೀಕ್ಷೆಯನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT) ಮಾದರಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

20 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಯಾವುದೇ ಅಡಚಣೆಯಿಲ್ಲದೆ ಪರೀಕ್ಷೆ ಬರೆಯುವಂತೆ ಮಾಡುವುದೇ ಸರ್ಕಾರದ ಪ್ರಮುಖ ಆದ್ಯತೆಯಾಗಿತ್ತು. ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳು, ಜಿಲ್ಲಾ ಆಡಳಿತ, ವಿದ್ಯಾರ್ಥಿಗಳು ಹಾಗೂ ಪೋಷಕರ ಸಹಕಾರದಿಂದ ಜೂನ್ 21ರಂದು ಮರುಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಯಿತು ಎಂದು ಪ್ರಧಾನ್ ತಿಳಿಸಿದ್ದಾರೆ.

ಜುಲೈ 16ರಂದು ಪ್ರಕಟವಾದ ಫಲಿತಾಂಶದಲ್ಲಿ ಬಡ ಹಿನ್ನೆಲೆಯ ಅನೇಕ ಪ್ರತಿಭಾವಂತ ವಿದ್ಯಾರ್ಥಿಗಳಿಗೂ ಯಶಸ್ಸು ದೊರೆತಿದೆ. ಆದರೆ ಈ ಅವಧಿಯಲ್ಲಿ ಜವಾಬ್ದಾರಿಯುತ ಹುದ್ದೆಗಳಲ್ಲಿ ಕುಳಿತಿದ್ದ ಕೆಲವರು ವಿದ್ಯಾರ್ಥಿಗಳನ್ನು ದಾರಿ ತಪ್ಪಿಸಲು ಪ್ರಯತ್ನಿಸಿದ್ದು, ಅದು ತಮ್ಮ ಮನಸ್ಸಿಗೆ ತೀವ್ರ ನೋವುಂಟು ಮಾಡಿದೆ ಎಂದು ಅವರು ಹೇಳಿದ್ದಾರೆ.

ಕಳೆದ 10 ದಿನಗಳ ಬೆಳವಣಿಗೆಗಳು ತಮ್ಮನ್ನು ಅತ್ಯಂತ ದುಃಖಿತಗೊಳಿಸಿವೆ. ಇದು ತಮ್ಮ ವೈಯಕ್ತಿಕ ಪ್ರತಿಷ್ಠೆಯ ಪ್ರಶ್ನೆಯಲ್ಲ, ಭಾರತದ ಯುವಶಕ್ತಿಯ ಭವಿಷ್ಯದ ಪ್ರಶ್ನೆಯಾಗಿದೆ ಎಂದು ಪ್ರಧಾನ್ ತಿಳಿಸಿದ್ದಾರೆ.

ಯುವಜನತೆ ಶಿಕ್ಷಣ ಮತ್ತು ವೃತ್ತಿಜೀವನದತ್ತ ಗಮನಹರಿಸಬೇಕು

ದೆಹಲಿ ಜಂತರ್ ಮಂತರ್ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಪ್ರತಿಭಟನೆಗಳನ್ನು ಉಲ್ಲೇಖಿಸಿರುವ ಅವರು, ಭಾರತದ ಯುವಜನತೆ ಶಿಕ್ಷಣ ಮತ್ತು ವೃತ್ತಿಜೀವನದತ್ತ ಗಮನಹರಿಸಬೇಕು. ದೇಶವಿರೋಧಿ ಶಕ್ತಿಗಳು ಈ ಪರಿಸ್ಥಿತಿಯನ್ನು ದುರುಪಯೋಗಪಡಿಸಿಕೊಳ್ಳಬಾರದು.

ದೇಶದ ಏಕತೆ ಕಾಪಾಡಲ್ಪಡಬೇಕು ಹಾಗೂ ಒಬ್ಬ ವಿದ್ಯಾರ್ಥಿಯ ಭವಿಷ್ಯವೂ ಕಾನೂನು ಹೋರಾಟಗಳಲ್ಲಿ ಸಿಲುಕಬಾರದು ಎಂಬ ಉದ್ದೇಶದಿಂದ ತಮ್ಮ ರಾಜೀನಾಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳುಹಿಸಿದ್ದೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಪ್ರಧಾನಿ ಮೋದಿಗೆ ಧನ್ಯವಾದ

ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನ, ವಿಶ್ವಾಸ ಹಾಗೂ ನಿರಂತರ ಸಹಕಾರಕ್ಕೆ ಧನ್ಯವಾದಗಳನ್ನು ಸಲ್ಲಿಸಿರುವ ಅವರು, ಕೇಂದ್ರ ಸಚಿವ ಸಂಪುಟದ ಸಹೋದ್ಯೋಗಿಗಳು, ಶಿಕ್ಷಣ ಸಚಿವಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಕೃತಜ್ಞತೆ ವ್ಯಕ್ತಪಡಿಸಿದ್ದಾರೆ. ರಾಷ್ಟ್ರಸೇವೆಯೇ ತಮ್ಮ ಜೀವನದ ಅತ್ಯುನ್ನತ ಆದ್ಯತೆಯಾಗಿದ್ದು, ಮುಂದೆಯೂ ಭಾರತ ಮಾತೆ, ಒಡಿಶಾದ ಜನತೆ ಹಾಗೂ ದೇಶದ ಯುವಜನರ ಆಶಯಗಳನ್ನು ಈಡೇರಿಸಲು ಎಲ್ಲ ರೀತಿಯಲ್ಲೂ ಸೇವೆ ಸಲ್ಲಿಸುವುದಾಗಿ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ.

ರಾಜಿನಾಮೆ ಅಂಗೀಕಾರ ಕುರಿತು ಸ್ಪಷ್ಟನೆ ಇಲ್ಲ

ಆದಾಗ್ಯೂ, ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯನ್ನು ಪ್ರಧಾನಿ ಅಥವಾ ರಾಷ್ಟ್ರಪತಿಗಳು ಅಂಗೀಕರಿಸಿರುವ ಕುರಿತು ಈವರೆಗೆ ಯಾವುದೇ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ. ಆದ್ದರಿಂದ ಸಂವಿಧಾನಾತ್ಮಕವಾಗಿ ಅವರ ರಾಜೀನಾಮೆ ಅಂಗೀಕಾರವಾಗುವವರೆಗೆ ಅವರು ಸಚಿವ ಸ್ಥಾನದಲ್ಲೇ ಮುಂದುವರಿಯಲಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.