ಬಿಹಾರ: ಮುಜಫರ್‌ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ: ಐವರು ಸಾವು, 15ಕ್ಕೂ ಹೆಚ್ಚು ರೋಗಿಗಳಿಗೆ ಗಾಯ
ಗುರುವಾರ ಮುಂಜಾನೆ ಆಸ್ಪತ್ರೆಯೊಂದರಲ್ಲಿ ಕಾಣಿಸಿಕೊಂಡ ಬೆಂಕಿಯಿಂದ ಕನಿಷ್ಠ ಐವರು ರೋಗಿಗಳು ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಪಾಟ್ನಾ: ದೆಹಲಿಯ ಮಾಳವೀಯ ನಗರದ ಹೋಟೆಲ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 21 ಮಂದಿ ಸಾವನ್ನಪ್ಪಿದ ಬೆನ್ನಲ್ಲೇ, ಬಿಹಾರದ ಮುಜಫ್ಫರ್‌ಪುರದಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ.
ಗುರುವಾರ ಮುಂಜಾನೆ ಆಸ್ಪತ್ರೆಯೊಂದರಲ್ಲಿ ಕಾಣಿಸಿಕೊಂಡ ಬೆಂಕಿಯಿಂದ ಕನಿಷ್ಠ ಐವರು ರೋಗಿಗಳು ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಮಾಹಿತಿಯ ಪ್ರಕಾರ, ಬೆಳಗಿನ ಜಾವ ಸುಮಾರು 3 ಗಂಟೆ ಸುಮಾರಿಗೆ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣವೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತರುವ ಕಾರ್ಯಾಚರಣೆ ನಡೆಸಿದರು. ಜಿಲ್ಲಾ ಆಡಳಿತದ ಅಧಿಕಾರಿಗಳೂ ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಹಾಗೂ ಸ್ಥಳಾಂತರ ಕಾರ್ಯಗಳ ಮೇಲ್ವಿಚಾರಣೆ ನಡೆಸಿದರು.
ಪ್ರಾಥಮಿಕ ತನಿಖೆಯಲ್ಲಿ ಆಸ್ಪತ್ರೆಯ ಐದನೇ ಮಹಡಿಯ ಐಸಿಯು (ICU) ವಿಭಾಗದಲ್ಲಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬೆಂಕಿ ವೇಗವಾಗಿ ಹರಡುತ್ತಿದ್ದಂತೆ ಆಸ್ಪತ್ರೆಯಲ್ಲಿದ್ದ ರೋಗಿಗಳನ್ನು ತುರ್ತಾಗಿ ಹೊರಗೆ ಸ್ಥಳಾಂತರಿಸಲಾಯಿತು.
ಅವಘಡದಲ್ಲಿ ಗಾಯಗೊಂಡ 15ಕ್ಕೂ ಹೆಚ್ಚು ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ತೀವ್ರ ನಿಗಾ ಅಗತ್ಯವಿದ್ದ ಕೆಲವು ರೋಗಿಗಳನ್ನು ಸಮೀಪದ ಆಸ್ಪತ್ರೆಗಳಿಗೆ ವರ್ಗಾಯಿಸಲಾಗಿದೆ. ಅವರ ಆರೋಗ್ಯ ಸ್ಥಿತಿಯ ಬಗ್ಗೆ ಮಾಹಿತಿ ಸಂಗ್ರಹಿಸುವ ಕಾರ್ಯ ಮುಂದುವರಿದಿದೆ.
ಈ ಕುರಿತು ಪ್ರತಿಕ್ರಿಯಿಸಿದ ಮುಜಫ್ಫರ್‌ಪುರ ಜಿಲ್ಲಾಧಿಕಾರಿ ಸುಬ್ರತ್ ಕುಮಾರ್ ಸೇನ್ ಅವರು, ಮೃತಪಟ್ಟ ಐವರ ಮೃತದೇಹಗಳು ಇನ್ನೂ ಆಸ್ಪತ್ರೆಯಲ್ಲಿದ್ದು, ಅವಘಡ ಸಂಭವಿಸಿದ ವೇಳೆ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಎಲ್ಲ ರೋಗಿಗಳ ಸುರಕ್ಷತೆ ಮತ್ತು ಸ್ಥಳದ ಕುರಿತು ಪರಿಶೀಲನೆ ನಡೆಯುತ್ತಿದೆ ಎಂದು ಹೇಳಿದ್ದಾರೆ,
ಕೆಲ ರೋಗಿಗಳ ಕುಟುಂಬಸ್ಥರು ತಮ್ಮ ಬಂಧುಗಳು ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳನ್ನು ಸಂಪರ್ಕಿಸಿರುವುದಾಗಿ ತಿಳಿಸಿದ್ದಾರೆ.
ಈ ನಡುವೆ, ಸತತವಾಗಿ ಸಂಭವಿಸುತ್ತಿರುವ ಅಗ್ನಿ ದುರಂತಗಳು ದೇಶಾದ್ಯಂತ ಆಸ್ಪತ್ರೆಗಳು, ಹೋಟೆಲ್‌ಗಳು ಮತ್ತು ವಾಣಿಜ್ಯ ಕಟ್ಟಡಗಳಲ್ಲಿ ಅಗ್ನಿ ಸುರಕ್ಷತಾ ನಿಯಮಗಳ ಪಾಲನೆ ಕುರಿತು ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



