‘Rozgar Mela’: 51 ಸಾವಿರಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ಮೋದಿ
ಭಾರತದ ಯುವಶಕ್ತಿ ಹಾಗೂ ತಾಂತ್ರಿಕ ಪ್ರಗತಿಯನ್ನು ಜಗತ್ತೇ ಮೆಚ್ಚುತ್ತಿದೆ, ಇಂದು ಜಗತ್ತು ಭಾರತದ ಅಭಿವೃದ್ಧಿ ಪಯಣದಲ್ಲಿ ಭಾಗಿಯಾಗಲು ಆಸಕ್ತಿ ತೋರುತ್ತಿದೆ.

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ವರ್ಚುವಲ್ ಮೂಲಕ ನಡೆದ ‘ರೋಜ್‌ಗಾರ್ ಮೇಳ’ ಕಾರ್ಯಕ್ರಮದಲ್ಲಿ ದೇಶದ 51 ಸಾವಿರಕ್ಕೂ ಹೆಚ್ಚು ಯುವಕರಿಗೆ ಕೇಂದ್ರ ಸರ್ಕಾರದ ಉದ್ಯೋಗ ನೇಮಕಾತಿ ಪತ್ರಗಳನ್ನು ವಿತರಿಸಿದರು.
ದೇಶದ 47 ಸ್ಥಳಗಳಲ್ಲಿ ಏಕಕಾಲದಲ್ಲಿ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳಿಗಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು.
ಬಳಿಕ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ಇಂದು ದೇಶದ ಸಾವಿರಾರು ಯುವಕರಿಗೆ ಬಹಳ ಮಹತ್ವದ ದಿನ. 51 ಸಾವಿರಕ್ಕೂ ಹೆಚ್ಚು ಯುವಕರು ಸರ್ಕಾರಿ ಉದ್ಯೋಗಕ್ಕಾಗಿ ನೇಮಕಾತಿ ಪತ್ರಗಳನ್ನು ಪಡೆದಿದ್ದಾರೆ. ದೇಶದ ಅಭಿವೃದ್ಧಿ ಪಯಣದಲ್ಲಿ ನೀವು ಎಲ್ಲರೂ ಪ್ರಮುಖ ಪಾಲುದಾರರಾಗುತ್ತಿದ್ದೀರಿ ಎಂದು ಹೇಳಿದರು.
ರೈಲ್ವೆ, ಬ್ಯಾಂಕಿಂಗ್, ರಕ್ಷಣಾ, ಆರೋಗ್ಯ, ಶಿಕ್ಷಣ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಯುವಕರು ಹೊಸ ಜವಾಬ್ದಾರಿಗಳನ್ನು ಹೊತ್ತುಕೊಳ್ಳಲಿದ್ದಾರೆ. ಮುಂದಿನ ವರ್ಷಗಳಲ್ಲಿ ಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣದ ಸಂಕಲ್ಪ ಸಾಕಾರಗೊಳಿಸುವಲ್ಲಿ ನಿಮ್ಮ ಪಾತ್ರ ಅತ್ಯಂತ ಮಹತ್ವದ್ದಾಗಿರಲಿದೆ. ಈ ಸಾಧನೆಗಾಗಿ ನಿಮಗೂ ಮತ್ತು ನಿಮ್ಮ ಕುಟುಂಬದ ಸದಸ್ಯರಿಗೂ ಹೃತ್ಪೂರ್ವಕ ಅಭಿನಂದನೆಗಳು ಎಂದು ತಿಳಿಸಿದರು.
ಭಾರತವನ್ನು ‘ವಿಕಸಿತ ಭಾರತ’ವಾಗಿಸಲು ಯುವಶಕ್ತಿ ಮಹತ್ವದ ಪಾತ್ರ ವಹಿಸುತ್ತಿದೆ. ಯುವಕರಿಗೆ ಹೊಸ ಅವಕಾಶಗಳನ್ನು ಒದಗಿಸುವ ಸರ್ಕಾರದ ಬದ್ಧತೆಯ ಪ್ರತಿಬಿಂಬವೇ ರೋಜ್‌ಗಾರ್ ಮೇಳ ಎಂದರು.
ಭಾರತದ ಯುವಶಕ್ತಿ ಹಾಗೂ ತಾಂತ್ರಿಕ ಪ್ರಗತಿಯನ್ನು ಜಗತ್ತೇ ಮೆಚ್ಚುತ್ತಿದೆ, ಇಂದು ಜಗತ್ತು ಭಾರತದ ಅಭಿವೃದ್ಧಿ ಪಯಣದಲ್ಲಿ ಭಾಗಿಯಾಗಲು ಆಸಕ್ತಿ ತೋರುತ್ತಿದೆ ಎಂದು ಹೇಳಿದರು.
ರೋಜ್‌ಗಾರ್ ಮೇಳ ಆರಂಭವಾದ ಬಳಿಕ ದೇಶದಾದ್ಯಂತ ನಡೆದ 18 ಕಾರ್ಯಕ್ರಮಗಳ ಮೂಲಕ ಸುಮಾರು 12 ಲಕ್ಷ ನೇಮಕಾತಿ ಪತ್ರಗಳನ್ನು ವಿತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಬಾರಿ ಆಯ್ಕೆಯಾದ ಅಭ್ಯರ್ಥಿಗಳು ರೈಲ್ವೆ, ಗೃಹ ಸಚಿವಾಲಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಹಣಕಾಸು ಸೇವೆಗಳು ಹಾಗೂ ಉನ್ನತ ಶಿಕ್ಷಣ ಸೇರಿದಂತೆ ಹಲವು ಕೇಂದ್ರ ಸಚಿವಾಲಯಗಳು ಮತ್ತು ಇಲಾಖೆಗಳಿಗೆ ಸೇರ್ಪಡೆಯಾಗಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



