ಪಶ್ಚಿಮ ಬಂಗಾಳದಲ್ಲಿ ಮುಂದುವರಿದ ರಾಜಕೀಯ ಹಿಂಸಾಚಾರ: ಅಭಿಷೇಕ್ ಬೆನ್ನಲ್ಲೇ ಕಲ್ಯಾಣ್ ಬ್ಯಾನರ್ಜಿ ಮೇಲೂ ದಾಳಿ; BJP ವಿರುದ್ಧ ಆರೋಪ..!
ಚುನಾವಣೆಯ ಬಳಿಕ ಟಿಎಂಸಿ ಕಾರ್ಯಕರ್ತರ ಬಂಧನವನ್ನು ಖಂಡಿಸಿ ಮನವಿ ಸಲ್ಲಿಸಲು ಚಂಡಿತಾಲ ಪೊಲೀಸ್ ಠಾಣೆಗೆ ತೆರಳಿದ್ದ ಕಲ್ಯಾಣ್ ಬ್ಯಾನರ್ಜಿ ನೇತೃತ್ವದ ನಿಯೋಗವನ್ನು ಕೆಲ ಪ್ರತಿಭಟನಾಕಾರರು ಕಪ್ಪು ಧ್ವಜ ತೋರಿಸಿ ವಿರೋಧ ವ್ಯಕ್ತಪಡಿಸಿದರು.

ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಮೇಲೆ ಹಲ್ಲೆ ನಡೆದ ಮರುದಿನವೇ, ಪಕ್ಷದ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರ ಮೇಲೂ ದಾಳಿ ನಡೆದಿರುವ ಆರೋಪ ಕೇಳಿಬಂದಿದೆ.
ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಚಂಡಿತಾಲ ಪೊಲೀಸ್ ಠಾಣೆ ಎದುರು ಪ್ರತಿಭಟನೆ ವೇಳೆ ಈ ಘಟನೆ ನಡೆದಿದೆ ಎಂದು ಟಿಎಂಸಿ ಆರೋಪಿಸಿದೆ.
ಚುನಾವಣೆಯ ಬಳಿಕ ಟಿಎಂಸಿ ಕಾರ್ಯಕರ್ತರ ಬಂಧನವನ್ನು ಖಂಡಿಸಿ ಮನವಿ ಸಲ್ಲಿಸಲು ಚಂಡಿತಾಲ ಪೊಲೀಸ್ ಠಾಣೆಗೆ ತೆರಳಿದ್ದ ಕಲ್ಯಾಣ್ ಬ್ಯಾನರ್ಜಿ ನೇತೃತ್ವದ ನಿಯೋಗವನ್ನು ಕೆಲ ಪ್ರತಿಭಟನಾಕಾರರು ಕಪ್ಪು ಧ್ವಜ ತೋರಿಸಿ ವಿರೋಧ ವ್ಯಕ್ತಪಡಿಸಿದರು. ಈ ವೇಳೆ "ಕಳ್ಳರು" ಎಂಬ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ಬಿಜೆಪಿ ಬೆಂಬಲಿಗರು ತನ್ನ ಮೇಲೆ ಹಲ್ಲೆ ನಡೆಸಿದ್ದು, ತಲೆಗೆ ಗಾಯವಾಗಿದೆ ಎಂದು ಕಲ್ಯಾಣ್ ಬ್ಯಾನರ್ಜಿ ಆರೋಪಿಸಿದ್ದಾರೆ.
“ಇದೆಲ್ಲವೂ ಪೊಲೀಸರ ಎದುರಲ್ಲೇ ನಡೆಯಿತು. ನನ್ನ ತಲೆಗೆ ಹೊಡೆದಿದ್ದಾರೆ, ರಕ್ತಸ್ರಾವವಾಗುತ್ತಿದೆ,” ಎಂದು ಅವರು ತಿಳಿಸಿದ್ದಾರೆ.
ಘಟನೆಯ ಬಳಿಕ ಗಾಯಗೊಂಡ ಕಲ್ಯಾಣ್ ಬ್ಯಾನರ್ಜಿ ತಲೆಯ ಹಿಂಭಾಗಕ್ಕೆ ಬಟ್ಟೆ ಹಿಡಿದುಕೊಂಡಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಇದೇ ವೇಳೆೆ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿರುವ ಕಲ್ಯಾಣ್ ಬ್ಯಾನರ್ಜಿ ಅವರು, ಠಾಣೆ ಎದುರು ಧರಣಿ ನಡೆಸಿದ್ದಾರೆ. ಬಿಜೆಪಿ ಪ್ರಾಯೋಜಿತ ದಾಳಿಗಳ ವಿರುದ್ಧ ಟಿಎಂಸಿ ಪ್ರತಿಭಟನೆ ಮುಂದುವರಿಸಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಈ ಘಟನೆಗೂ ಒಂದು ದಿನ ಮೊದಲು, ದಕ್ಷಿಣ 24 ಪರಗಣ ಜಿಲ್ಲೆಯ ಸೋನಾರ್ಪುರ ಪ್ರದೇಶದಲ್ಲಿ ಚುನಾವಣೋತ್ತರ ಹಿಂಸಾಚಾರದಿಂದ ಸಂತ್ರಸ್ತರಾದ ಕುಟುಂಬಗಳನ್ನು ಭೇಟಿ ಮಾಡಲು ತೆರಳಿದ್ದ ಅಭಿಷೇಕ್ ಬ್ಯಾನರ್ಜಿ ಅವರೊಂದಿಗೆ ಸ್ಥಳೀಯರು ದುರ್ವರ್ತನೆ ತೋರಿದ್ದರು ಎನ್ನಲಾಗಿದೆ.
ಘಟನೆ ಬಳಿಕ ಯಾವುದೇ ಅಹಿತಕರ ಬೆಳವಣಿಗೆ ತಡೆಯಲು ಚಂಡಿತಾಲ ಪೊಲೀಸ್ ಠಾಣೆ ಸುತ್ತಮುತ್ತ ಹೆಚ್ಚಿನ ಪೊಲೀಸ್ ಪಡೆ ಹಾಗೂ ಕೇಂದ್ರ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ.
ಇನ್ನೊಂದೆಡೆ, ಕಲ್ಯಾಣ್ ಬ್ಯಾರನ್ಜಿ ಅವರ ಆರೋಪಗಳನ್ನು ತಳ್ಳಿಹಾಕಿರುವ ಬಿಜೆಪಿ, ರಾಜ್ಯದ ಜನರು ಟಿಎಂಸಿ ನಾಯಕರ ವಿರುದ್ಧದ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ ಎಂದು ಪ್ರತಿಪಾದಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



