CEC ವಿರುದ್ಧ ಪ್ರತಿಭಟನೆಗೆ ಬ್ರೇಕ್: ನವದೆಹಲಿಯಲ್ಲಿ ಬಿಎನ್‌ಎಸ್‌ಎಸ್ ಸೆಕ್ಷನ್ 163 ಜಾರಿ; ಎಲ್ಲೆಡೆ ಭದ್ರತೆ ಹೆಚ್ಚಳ..!
ಸಾರ್ವಜನಿಕರ ಸುರಕ್ಷತೆ ಖಚಿತಪಡಿಸುವುದು, ಸಾರ್ವಜನಿಕ ಸುವ್ಯವಸ್ಥೆ ಕಾಪಾಡುವುದು ಹಾಗೂ ಸಂಚಾರ ಸುಗಮವಾಗಿ ನಡೆಯುವಂತೆ ನೋಡಿಕೊಳ್ಳುವ ಉದ್ದೇಶದಿಂದ ಈ ಆದೇಶ ಜಾರಿಗೊಳಿಸಲಾಗಿದೆ.

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧ ಜಂತರ್ ಮಂತರ್‌ನಲ್ಲಿ ಶುಕ್ರವಾರ ನಡೆಯಬೇಕಿದ್ದ ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನಿರಾಕರಿಸಿದ್ದು, ದೆಹಲಿಯಾದ್ಯಂತ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್) ಸೆಕ್ಷನ್ 163ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.
ಪೂರ್ವಾನುಮತಿ ಇಲ್ಲದೆ ಐದು ಅಥವಾ ಅದಕ್ಕಿಂತ ಹೆಚ್ಚು ಮಂದಿ ಸಾರ್ವಜನಿಕ ಸ್ಥಳಗಳಲ್ಲಿ ಗುಂಪುಗೂಡುವುದು ಅಥವಾ ಸಭೆ ನಡೆಸುವುದು, ಮೆರವಣಿಗೆ, ಪ್ರತಿಭಟನೆ, ಪಿಕೆಟಿಂಗ್ ಹಾಗೂ ಧರಣಿ ನಡೆಸುವುದನ್ನು ಆದೇಶದ ಮೂಲಕ ನಿಷೇಧಿಸಲಾಗಿದೆ.
ಇದರ ಜತೆಗೆ ಘೋಷಣೆ ಕೂಗುವುದು, ಭಾಷಣ ಮಾಡುವುದು ಹಾಗೂ ಬಂದೂಕು, ಬ್ಯಾನರ್, ಫಲಕಗಳು, ಲಾಠಿ, ಕತ್ತಿ, ಕೋಲು, ಇಟ್ಟಿಗೆ, ಕಲ್ಲು ಹಾಗೂ ಇತರ ರೀತಿಯ ವಸ್ತುಗಳನ್ನು ಹೊತ್ತೊಯ್ಯುವುದಕ್ಕೂ ನಿರ್ಬಂಧ ವಿಧಿಸಲಾಗಿದೆ.
ಸಾರ್ವಜನಿಕರ ಸುರಕ್ಷತೆ ಖಚಿತಪಡಿಸುವುದು, ಸಾರ್ವಜನಿಕ ಸುವ್ಯವಸ್ಥೆ ಕಾಪಾಡುವುದು ಹಾಗೂ ಸಂಚಾರ ಸುಗಮವಾಗಿ ನಡೆಯುವಂತೆ ನೋಡಿಕೊಳ್ಳುವ ಉದ್ದೇಶದಿಂದ ಈ ಆದೇಶ ಜಾರಿಗೊಳಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಖಿಲ ಭಾರತ ವಿದ್ಯಾರ್ಥಿ ಸಂಘಟನೆ (ಎಐಎಸ್‌ಎ), ರಾಜ್ಯಸಭಾ ಸದಸ್ಯ ಮನೋಜ್ ಝಾ ಹಾಗೂ ವಕೀಲ ಪ್ರಶಾಂತ್ ಭೂಷಣ್ ಅವರು ಕರೆ ನೀಡಿದ್ದ ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ.
ಗಾಂಧಿ ಜಯಂತಿಯಂದು ಬೆಳಗ್ಗೆ 11 ಗಂಟೆಗೆ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಉದ್ದೇಶಿಸಲಾಗಿತ್ತು. ಸುಮಾರು 3,000ರಿಂದ 4,000 ಮಂದಿ ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆ ಇತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಜಂತರ್ ಮಂತರ್ ಸೇರಿದಂತೆ ನವದೆಹಲಿ ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ದೆಹಲಿ ಪೊಲೀಸ್ ಸಿಬ್ಬಂದಿ ಹಾಗೂ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಅನಧಿಕೃತವಾಗಿ ಜನರು ಗುಂಪುಗೂಡುವುದನ್ನು ತಡೆಯಲು ಹಾಗೂ ಸಂಚಾರ ನಿಯಂತ್ರಿಸಲು ಹಲವು ಸ್ಥಳಗಳಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದೆ.
ಮತದಾರರ ಪಟ್ಟಿಗೆ ಸಂಬಂಧಿಸಿದ ವಿಚಾರಗಳು ಹಾಗೂ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಕುರಿತು ಪ್ರತಿಭಟನೆಯ ಆಯೋಜಕರು ಕಳವಳ ವ್ಯಕ್ತಪಡಿಸಿದ್ದು, ಜ್ಞಾನೇಶ್ ಕುಮಾರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



