ಬೆಳಗಾವಿಯಲ್ಲಿ 15 ಸಾವಿರ ಮತದಾರರ ಹೆಸರು ಅಳಿಸಲು ಯತ್ನ: ರಾಹುಲ್ ಗಾಂಧಿ; CEC ರಾಜೀನಾಮೆಗೆ ಆಗ್ರಹ
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ನಡೆಯುತ್ತಿರುವ ಸಂದರ್ಭದಲ್ಲಿ ಬೆಳಗಾವಿಯಲ್ಲಿ ಫಾರ್ಮ್ 7 ಅರ್ಜಿಗಳನ್ನು ಬೃಹತ್ ಪ್ರಮಾಣದಲ್ಲಿ ಸಲ್ಲಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ವಿವಾದದ ನಡುವೆ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದಾರೆ.

ಬೆಳಗಾವಿ: ಬೆಳಗಾವಿ ನಗರದಲ್ಲಿ ಫಾರ್ಮ್ 7 ಅರ್ಜಿಗಳ ಮೂಲಕ ಸುಮಾರು 15,000 ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಲು ವ್ಯವಸ್ಥಿತ ಪ್ರಯತ್ನ ನಡೆದಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ನಡೆಯುತ್ತಿರುವ ಸಂದರ್ಭದಲ್ಲಿ ಬೆಳಗಾವಿಯಲ್ಲಿ ಫಾರ್ಮ್ 7 ಅರ್ಜಿಗಳನ್ನು ಬೃಹತ್ ಪ್ರಮಾಣದಲ್ಲಿ ಸಲ್ಲಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ವಿವಾದದ ನಡುವೆ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದಾರೆ.
ಬೆಳಗಾವಿಯಲ್ಲಿ ನಡೆದ ಘಟನೆಯೊಂದರ ವರದಿಗಳನ್ನು ರಾಹುಲ್ ಗಾಂಧಿ ತಮ್ಮ ಆರೋಪಕ್ಕೆ ಉಲ್ಲೇಖಿಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರ ಪ್ರಕಾರ, ಮಹಾನಗರ ಪಾಲಿಕೆ ಸಿಬ್ಬಂದಿ ಎಂದು ಪರಿಚಯಿಸಿಕೊಂಡ ಇಬ್ಬರು ವ್ಯಕ್ತಿಗಳು ಬೂತ್ ಮಟ್ಟದ ಅಧಿಕಾರಿ (BLO) ಮೇಲೆ ಸುಮಾರು 200 ಫಾರ್ಮ್ 7 ಅರ್ಜಿಗಳಿಗೆ ಸಹಿ ಹಾಕುವಂತೆ ಒತ್ತಡ ಹೇರಲು ಯತ್ನಿಸಿದ್ದರು.
ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಾಯಕರು ತಮ್ಮ ಪಕ್ಷದ ಕಾರ್ಯಕರ್ತರ ಮೂಲಕ ಪೂರ್ವ ಭರ್ತಿ ಮಾಡಿದ ಫಾರ್ಮ್ 7 ಅರ್ಜಿಗಳನ್ನು ಸಲ್ಲಿಸಿ, ಹೆಚ್ಚುವರಿಯಾಗಿ 50-60 ಲಕ್ಷ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಲು ಸಂಚು ರೂಪಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆರೋಪಿಸಿದ ಬೆನ್ನಲ್ಲೇ ರಾಹುಲ್ ಗಾಂಧಿ ಎಕ್ಸ್ ಮತ್ತು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಸೆಪ್ಟೆಂಬರ್ 22ರಿಂದ ಆರಂಭಗೊಂಡ ಮೂರು ದಿನಗಳ ಅವಧಿಯಲ್ಲಿ ಮತದಾರರ ಹೆಸರುಗಳನ್ನು ಅಳಿಸುವಂತೆ ಕೋರಿ ಫಾರ್ಮ್ 7 ಅರ್ಜಿಗಳ ಪ್ರವಾಹವೇ ಬಂದಿದೆ ಎಂದು ರಾಹುಲ್ ಗಾಂಧಿ ತಮ್ಮ ಪೋಸ್ಟ್‌ನಲ್ಲಿ ಹೇಳಿದ್ದಾರೆ. ಬಿಜೆಪಿ ಮುಸ್ಲಿಮರು, ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು ಮತ್ತು ಇತರೆ ಹಿಂದುಳಿದ ವರ್ಗಗಳ ಮತದಾರರನ್ನು ನಿರ್ದಿಷ್ಟವಾಗಿ ಗುರಿಯಾಗಿಸಿಕೊಂಡಿದೆ ಎಂದು ಅವರು ಆರೋಪಿಸಿದ್ದಾರೆ.
ಮತದಾರರ ಹೆಸರು ಅಳಿಸುವ ಪ್ರಕ್ರಿಯೆಗೆ ಕೇಂದ್ರೀಕೃತ ಸಾಫ್ಟ್‌ವೇರ್ ಮೂಲಕ ನೆರವು ನೀಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. “ಆಯ್ದ” ಮತದಾರರ ವಿರುದ್ಧ ಸ್ವಯಂಚಾಲಿತ ಪ್ರಕ್ರಿಯೆಯ ಮೂಲಕ ಫಾರ್ಮ್ 7 ಅರ್ಜಿಗಳನ್ನು ಬೃಹತ್ ಪ್ರಮಾಣದಲ್ಲಿ ಸಲ್ಲಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಈ ವಿಚಾರದಲ್ಲಿ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ (CEO) ಏಕೆ ಎಫ್‌ಐಆರ್ ದಾಖಲಿಸಿಲ್ಲ ಎಂದು ಪ್ರಶ್ನಿಸಿದ ಲೋಕಸಭೆಯ ವಿರೋಧ ಪಕ್ಷದ ನಾಯಕ, ಆರೋಪಿತ ಅಕ್ರಮಗಳ ಕುರಿತು ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.
ಈ ನಡುವೆ, ಬೆಳಗಾವಿ ಪೊಲೀಸರು ಬಿಜೆಪಿ ಮುಖಂಡ ಡಾ. ರವಿ ಪಾಟೀಲ್ ಹಾಗೂ ಅವರ ಬೆಂಬಲಿಗರು ಸೇರಿದಂತೆ 25 ಜನರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.
ಕರ್ನಾಟಕ ಕಾಂಗ್ರೆಸ್ ನಾಯಕರು ಪ್ರಸ್ತುತ ಕರ್ನಾಟಕ CEO ಕಚೇರಿಯಲ್ಲಿ ಜವಾಬ್ದಾರರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಆಗ್ರಹಿಸುತ್ತಿದ್ದಾರೆ. CEO ಎಫ್‌ಐಆರ್ ದಾಖಲಿಸಲು ಏಕೆ ನಿರಾಕರಿಸುತ್ತಿದ್ದಾರೆ? ಈ ರೀತಿಯಾಗಿ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು CEC ಜ್ಞಾನೇಶ್ ಅವರು ಒಟ್ಟಾಗಿ SIR ಮೂಲಕ ಪ್ರಜಾಪ್ರಭುತ್ವವನ್ನು ನಾಶಪಡಿಸಲು ಮುಂದಾಗಿದ್ದಾರೆ. ಇದು ದೇಶದ್ರೋಹ ಎಂದು ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



