Jamui harassment: ಮೂವರ ಬಂಧನ, 7 ಮಂದಿ ಗುರುತು ಪತ್ತೆ; ಲೈಂಗಿಕ ಕಿರುಕುಳ ನೀಡಿದ ಆರೋಪಿಗಳಿಗೆ ಪೊಲೀಸ್ ಶೋಧ!
ಪ್ರಕರಣಕ್ಕೆ ಸಂಬಂಧಿಸಿದಂತೆ ಜಮುಯಿ ಪೊಲೀಸರು ಮೂವರನ್ನು ಬಂಧಿಸಿದ್ದು, ವಿಡಿಯೋ ಆಧರಿಸಿ ಸುಮಾರು ಏಳು ಮಂದಿಯನ್ನು ಗುರುತಿಸಿರುವುದಾಗಿ ತಿಳಿಸಿದ್ದಾರೆ.

ಪಾಟ್ನಾ: ದೇಶವನ್ನೇ ಬೆಚ್ಚಿ ಬೀಳಿಸಿರುವ ಬಿಹಾರದ ಜಮುಯಿ ಜಿಲ್ಲೆಯಲ್ಲಿ ಅಪ್ರಾಪ್ತರಿಗೆ ನೀಡಲಾದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭಿಸಿರುವ ಪೊಲೀಸರು 7 ಆರೋಪಿಗಳನ್ನು ಗುರುತಿಸಿದ್ದು, ಮೂವರನ್ನು ಬಂಧಿಸಿದ್ದಾರೆ.
ಬಿಹಾರದ ಜಮುಯಿ ಜಿಲ್ಲೆಯಲ್ಲಿ 10ನೇ ತರಗತಿಯ ಬಾಲಕಿ ಹಾಗೂ ಆಕೆಯ ಪುರುಷ ಸ್ನೇಹಿತನಿಗೆ ಗುಂಪೊಂದು ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜಮುಯಿ ಪೊಲೀಸರು ಮೂವರನ್ನು ಬಂಧಿಸಿದ್ದು, ವಿಡಿಯೋ ಆಧರಿಸಿ ಸುಮಾರು ಏಳು ಮಂದಿಯನ್ನು ಗುರುತಿಸಿರುವುದಾಗಿ ತಿಳಿಸಿದ್ದಾರೆ.
ಸೆಪ್ಟೆಂಬರ್ 19ರ ಸಂಜೆ ಕೋಚಿಂಗ್ ತರಗತಿ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ಬಾಲಕಿ ಹಾಗೂ ಆಕೆಯ ಸ್ನೇಹಿತನನ್ನು ಕೆಲವರು ಅಡ್ಡಗಟ್ಟಿ ಕಿರುಕುಳ ನೀಡಿದರು ಎನ್ನಲಾಗಿದೆ. ವೈರಲ್ ಆಗಿರುವ ದೃಶ್ಯಗಳಲ್ಲಿ ಗುಂಪೊಂದು ಇಬ್ಬರನ್ನೂ ಸುತ್ತುವರಿದಿರುವುದು, ಬಾಲಕನನ್ನು ಹೊಡೆಯುತ್ತಿರುವುದು ಹಾಗೂ ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಿರುವುದು ಕಂಡುಬರುತ್ತದೆ.
ಇದೀಗ ಜಮುಯಿ ಎಸ್‌ಪಿ ವಿಶ್ವಜೀತ್ ದಯಾಳ್ ಅವರ ಪ್ರಕಾರ, ವಿಡಿಯೋದಲ್ಲಿ ಕಾಣಿಸಿಕೊಂಡಿದ್ದ ವಾಹನದ ನೋಂದಣಿ ಸಂಖ್ಯೆಯ ಸಹಾಯದಿಂದ ಪೊಲೀಸರು ಸಂತ್ರಸ್ತರನ್ನು ಪತ್ತೆಹಚ್ಚಿದ್ದಾರೆ. ಘಟನೆ ನಡೆದ ಎರಡು ದಿನಗಳ ಬಳಿಕ ವಿಡಿಯೋ ವೈರಲ್ ಆದ ನಂತರ ಪೊಲೀಸರು ಪ್ರಕರಣದ ಬಗ್ಗೆ ಮಾಹಿತಿ ಪಡೆದು ತನಿಖೆ ಆರಂಭಿಸಿದ್ದಾರೆ.
ಸಂತ್ರಸ್ತರು ದಾಖಲಿಸಿದ ಎಫ್‌ಐಆರ್‌ನಲ್ಲಿ ಯಾವುದೇ ಆರೋಪಿಯ ಹೆಸರನ್ನು ಉಲ್ಲೇಖಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ವೈರಲ್ ವಿಡಿಯೋವನ್ನು ಪರಿಶೀಲಿಸಿದ ಪೊಲೀಸರು ಘಟನೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಸುಮಾರು 6–7 ಮಂದಿಯನ್ನು ಗುರುತಿಸಿದ್ದು, ಇತರ ಆರೋಪಿಗಳ ಬಂಧನಕ್ಕೂ ಕ್ರಮ ಕೈಗೊಳ್ಳಲಾಗುತ್ತಿದೆ.
ಇಬ್ಬರೂ ಅಪ್ರಾಪ್ತ ವಿದ್ಯಾರ್ಥಿಗಳು ಒಂದೇ ಕೋಚಿಂಗ್ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರುವ ಸ್ನೇಹಿತರಾಗಿದ್ದಾರೆ. ಪ್ರಕರಣ ಅಪ್ರಾಪ್ತರನ್ನು ಒಳಗೊಂಡಿರುವುದರಿಂದ ಕೆಲವು ಮಾಹಿತಿಯನ್ನು ಗೌಪ್ಯವಾಗಿಡಬೇಕಾಗಿದೆ ಎಂದು ಅವರು ಹೇಳಿದ್ದಾರೆ.
'ಪೋಕ್ಸೋ ಕೇಸ್ ಹಾಕಿ'
ಈ ಘಟನೆಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಘಟನೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಆರೋಪಿಗಳನ್ನು POCSO ಕಾಯ್ದೆಯಡಿ ವಿಚಾರಣೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ಬಾಲಕಿಯ ಸುರಕ್ಷತೆ ಬಗ್ಗೆ ಬಿಹಾರ ಸರ್ಕಾರ ಉತ್ತರ ನೀಡಬೇಕು ಎಂದೂ ಅವರು ಪ್ರಶ್ನಿಸಿದ್ದಾರೆ.
ಇದೇ ವೇಳೆ ರಾಷ್ಟ್ರೀಯ ಮಹಿಳಾ ಆಯೋಗವೂ ಪ್ರಕರಣವನ್ನು ಸ್ವಯಂಪ್ರೇರಿತವಾಗಿ ಪರಿಗಣಿಸಿ, ಘಟನೆಯಲ್ಲಿ ಭಾಗಿಯಾಗಿರುವ ಎಲ್ಲರನ್ನೂ ಗುರುತಿಸಿ ಬಂಧಿಸುವಂತೆ ಹಾಗೂ ಸಮಯಬದ್ಧ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಬಿಹಾರ ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಿದೆ.
ಜಮುಯಿ ಪೊಲೀಸರು ಪ್ರಕರಣದ ತನಿಖೆ ಮುಂದುವರಿಸಿದ್ದು, ವಿಡಿಯೋದಲ್ಲಿರುವ ಪ್ರತಿಯೊಬ್ಬರ ಪಾತ್ರವನ್ನು ಪರಿಶೀಲಿಸಲಾಗುತ್ತಿದೆ. ಈಗಾಗಲೇ ಬಂಧಿತರಾಗಿರುವ ಮೂವರ ವಿರುದ್ಧದ ಆರೋಪಗಳು ತನಿಖೆ ಮತ್ತು ಮುಂದಿನ ಕಾನೂನು ಪ್ರಕ್ರಿಯೆಯಲ್ಲಿ ಪರಿಶೀಲನೆಗೆ ಒಳಪಡಲಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



