'ವೋಟ್ ಚೋರಿ' ಸಂವಿಧಾನದ ಮೇಲಿನ ನೇರ ದಾಳಿ; BJP, RSS, ECಯಿಂದ ದೇಶದ್ರೋಹ; ಯಾರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ರಾಹುಲ್ ಗಾಂಧಿ
ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕುರಿತು ಆಯೋಗದೊಳಗೇ ಭಿನ್ನಾಭಿಪ್ರಾಯಗಳಿವೆ ಎಂಬ ವರದಿಗಳ ಬೆನ್ನಲ್ಲೇ ರಾಹುಲ್ ಗಾಂಧಿ ಈ ಆರೋಪ ಮಾಡಿದ್ದಾರೆ.
ನವದೆಹಲಿ: ‘ವೋಟ್ ಚೋರಿ’ (ಮತಗಳ ಕಳ್ಳತನ) ಭಾರತದ ಜನರ ವಿರುದ್ಧದ ಅಪರಾಧ ಹಾಗೂ ಸಂವಿಧಾನದ ಮೇಲಿನ ನೇರ ದಾಳಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಆರೋಪಿಸಿದ್ದಾರೆ.
‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, 'ಬಿಜೆಪಿ, ಆರ್‌ಎಸ್‌ಎಸ್ ಮತ್ತು ಚುನಾವಣಾ ಆಯೋಗವು ಇದರಲ್ಲಿ ಭಾಗಿಯಾಗಿದ್ದು, ‘ದೇಶದ್ರೋಹ’ ಎಸಗಿವೆ ಎಂದು ಅವರು ಆರೋಪಿಸಿದ್ದು, ವೋಟ್ ಚೋರಿ ಭಾರತೀಯ ಜನರ ವಿರುದ್ಧದ ಅಪರಾಧ ಮತ್ತು ನಮ್ಮ ಸಂವಿಧಾನದ ಮೇಲಿನ ನೇರ ದಾಳಿ. ಇದನ್ನು ಸಂಘಟಿಸಿದ ಬಿಜೆಪಿ, ಆರ್‌ಎಸ್‌ಎಸ್ ಮತ್ತು ಚುನಾವಣಾ ಆಯೋಗ ದೇಶದ್ರೋಹದ ಕೃತ್ಯ ಎಸಗಿವೆ. ಆದರೆ ಇವೆಲ್ಲದಕ್ಕೂ ನ್ಯಾಯ ಸಿಗಲಿದೆ” ಎಂದು ಹೇಳಿದ್ದಾರೆ.
ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕುರಿತು ಆಯೋಗದೊಳಗೇ ಭಿನ್ನಾಭಿಪ್ರಾಯಗಳಿವೆ ಎಂಬ ವರದಿಗಳ ಬೆನ್ನಲ್ಲೇ ರಾಹುಲ್ ಗಾಂಧಿ ಈ ಆರೋಪ ಮಾಡಿದ್ದಾರೆ.
ವರದಿಗಳ ಪ್ರಕಾರ, ಚುನಾವಣಾ ಆಯುಕ್ತರಾದ ಸುಖಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರು ಕಳೆದ 10 ತಿಂಗಳಲ್ಲಿ ಮತದಾರರ ಪಟ್ಟಿಗೆ ಸಂಬಂಧಿಸಿದ ನಿರ್ಧಾರಗಳ ಕುರಿತು ಕನಿಷ್ಠ 14 ಬಾರಿ ಆಕ್ಷೇಪ ವ್ಯಕ್ತಪಡಿಸಿದ್ದರು ಎನ್ನಲಾಗಿದೆ.
ಮತದಾರರ ಹೆಸರುಗಳ ಅಳಿಸುವಿಕೆ ಮತ್ತು ಮರು ಸೇರ್ಪಡೆ, ಹೊಸ ಮತದಾರರ ಸೇರ್ಪಡೆ, ಮತದಾರರ ಪಟ್ಟಿಗೆ ಸಂಬಂಧಿಸಿದ ಮೇಲ್ಮನವಿ ಹಾಗೂ ಮತದಾರರ ದತ್ತಾಂಶ ನಿರ್ವಹಣೆ ಸೇರಿದಂತೆ ಹಲವು ವಿಷಯಗಳಲ್ಲಿ ಆಕ್ಷೇಪಗಳು ವ್ಯಕ್ತವಾಗಿದ್ದವು ಎಂದು ವರದಿಯಾಗಿದೆ.
ಮತದಾರರ ನೋಂದಣಿಗೆ ಬಳಸುವ ಫಾರ್ಮ್-6ನಲ್ಲಿ ಮಾಡಲಾದ ಬದಲಾವಣೆಗಳು ಹಾಗೂ ಮತದಾರರ ಪಟ್ಟಿಯ ದತ್ತಾಂಶವನ್ನು ಕೇಂದ್ರೀಕರಿಸುವ ಕ್ರಮಗಳ ಬಗ್ಗೆಯೂ ಆಕ್ಷೇಪಗಳು ವ್ಯಕ್ತವಾಗಿದ್ದವು ಎಂದು ವರದಿಗಳು ತಿಳಿಸಿವೆ.
‘ಎಲ್ಲ ನಿರ್ಧಾರಗಳೂ ಸರ್ವಾನುಮತದಿಂದಲೇ’ ಎಂದ EC
ಆದರೆ ಚುನಾವಣಾ ಆಯೋಗವು ಈ ಆರೋಪಗಳು ಮತ್ತು ವರದಿಗಳ ನಡುವೆ ಸ್ಪಷ್ಟನೆ ನೀಡಿದ್ದು, SIR ಸೇರಿದಂತೆ ಆಯೋಗದ ಎಲ್ಲ ನಿರ್ಧಾರಗಳೂ ಮೂವರು ಚುನಾವಣಾ ಆಯುಕ್ತರ ಅನುಮೋದನೆಯೊಂದಿಗೆ ಸರ್ವಾನುಮತದಿಂದ ಕೈಗೊಳ್ಳಲಾಗಿದೆ ಎಂದು ಹೇಳಿದೆ.
“SIR ಸೇರಿದಂತೆ ಭಾರತದ ಚುನಾವಣಾ ಆಯೋಗದ ಎಲ್ಲ ನಿರ್ಧಾರಗಳೂ ಸರ್ವಾನುಮತದಿಂದ ಮತ್ತು ಇಬ್ಬರು ಚುನಾವಣಾ ಆಯುಕ್ತರು ಹಾಗೂ ಮುಖ್ಯ ಚುನಾವಣಾ ಆಯುಕ್ತರ ಅನುಮೋದನೆಯೊಂದಿಗೆ ಕೈಗೊಳ್ಳಲಾಗಿದೆ” ಎಂದು ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.
ಆಯೋಗದೊಳಗಿನ ಸದಸ್ಯರು ಯಾವುದೇ ವಿಷಯದ ಬಗ್ಗೆ ತಮ್ಮ ವೈಯಕ್ತಿಕ ಅಭಿಪ್ರಾಯ ಅಥವಾ ಆಕ್ಷೇಪ ವ್ಯಕ್ತಪಡಿಸಬಹುದು. ಆದರೆ ಅಂತಿಮವಾಗಿ ಆಯೋಗ ತೆಗೆದುಕೊಳ್ಳುವ ನಿರ್ಧಾರಗಳು ಸರ್ವಾನುಮತದಿಂದಲೇ ಕೈಗೊಳ್ಳಲಾಗಿದೆ ಎಂದು EC ಮೂಲಗಳು ತಿಳಿಸಿವೆ.
SIR ಉದ್ದೇಶ
2025ರಲ್ಲಿ ಬಿಹಾರದಲ್ಲಿ ಆರಂಭವಾದ SIR ಪ್ರಕ್ರಿಯೆಯನ್ನು ಬಳಿಕ ಹಲವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ವಿಸ್ತರಿಸಲಾಗಿದೆ.
ಮತದಾರರ ಪಟ್ಟಿಯಿಂದ ದೊಡ್ಡ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕುವ ಮೂಲಕ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗಬಹುದು ಎಂದು ಪ್ರತಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿವೆ. ಮತ್ತೊಂದೆಡೆ, ಮತದಾರರ ಪಟ್ಟಿಯನ್ನು ನವೀಕರಿಸುವುದು ಹಾಗೂ ಅನರ್ಹ ಮತ್ತು ನಕಲಿ ಹೆಸರುಗಳನ್ನು ತೆಗೆದುಹಾಕುವುದೇ SIR ಉದ್ದೇಶ ಎಂದು ಚುನಾವಣಾ ಆಯೋಗ ಹೇಳಿದೆ.
ಈ ಮಧ್ಯೆ ರಾಹುಲ್ ಗಾಂಧಿ ಈ ಹಿಂದೆ ನೀಡಿದ್ದ ಹೇಳಿಕೆಯ ವಿಡಿಯೋವನ್ನೂ ಹಂಚಿಕೊಂಡಿದ್ದಾರೆ. ಚುನಾವಣಾ ಆಯೋಗದ ಅಧಿಕಾರಿಗಳು ತಾವು ಮಾಡುತ್ತಿರುವ ಕಾರ್ಯಗಳಿಗೆ ಹೊಣೆಗಾರರಾಗಬೇಕಾಗುತ್ತದೆ ಮತ್ತು ಅದನ್ನು ‘ದೇಶದ್ರೋಹ’ ಎಂದು ಪರಿಗಣಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿರುವುದು ವಿಡಿಯೋದಲ್ಲಿದೆ.
SIR ಪ್ರಕ್ರಿಯೆಯ ಕುರಿತು ಕಾಂಗ್ರೆಸ್ ತನ್ನ ಚುನಾವಣಾ ಆಯೋಗದ ವಿರುದ್ಧದ ಟೀಕೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದು, ಮತದಾರರ ಪಟ್ಟಿಯ ಸಮಗ್ರತೆ ಮತ್ತು ವಿಶ್ವಾಸಾರ್ಹತೆಯ ಬಗ್ಗೆ ಪಕ್ಷ ಪ್ರಶ್ನೆಗಳನ್ನು ಎತ್ತುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



