'ಆಂತರಿಕ ವಿಚಾರದಲ್ಲಿ ಮೂಗು ತೂರಿಸಬೇಡ'; ಟರ್ಕಿಗೆ ಭಾರತ ಖಡಕ್ ಎಚ್ಚರಿಕೆ; ಆಗಿದ್ದೇನು?
ಜಮ್ಮು-ಕಾಶ್ಮೀರವು ಭಾರತದ ಪ್ರಾದೇಶಿಕ ಸಮಗ್ರತೆ ಮತ್ತು ಸಾರ್ವಭೌಮತ್ವಕ್ಕೆ ಸಂಬಂಧಿಸಿದ ವಿಚಾರವಾಗಿದ್ದು, ಇದರಲ್ಲಿ ಯಾವುದೇ ಹೊರಗಿನ ಪಕ್ಷಕ್ಕೆ ಹಸ್ತಕ್ಷೇಪದ ಹಕ್ಕಿಲ್ಲ ಎಂದು ಭಾರತ ಸ್ಪಷ್ಟಪಡಿಸಿದೆ.

ನವದೆಹಲಿ: ಕಾಶ್ಮೀರದ ವಿಚಾರವಾಗಿ ಹೊರಗಿನವರು ಮೂಗು ತೂರಿಸುವುದು ಬೇಡ ಎಂದು ಭಾರತ ಟರ್ಕಿ ಸರ್ಕಾರಕ್ಕೆ ಖಡಕ್ ಎಚ್ಚರಿಕೆ ನೀಡಿದೆ.
ವಿಶ್ವಸಂಸ್ಥೆಯ 81ನೇ ಸಾಮಾನ್ಯ ಸಭೆ (UNGA)ಯಲ್ಲಿ ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಅವರು ಜಮ್ಮು-ಕಾಶ್ಮೀರ ವಿಚಾರ ಪ್ರಸ್ತಾಪಿಸಿದ್ದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ಜಮ್ಮು-ಕಾಶ್ಮೀರವು ಭಾರತದ ಪ್ರಾದೇಶಿಕ ಸಮಗ್ರತೆ ಮತ್ತು ಸಾರ್ವಭೌಮತ್ವಕ್ಕೆ ಸಂಬಂಧಿಸಿದ ವಿಚಾರವಾಗಿದ್ದು, ಇದರಲ್ಲಿ ಯಾವುದೇ ಹೊರಗಿನ ಪಕ್ಷಕ್ಕೆ ಹಸ್ತಕ್ಷೇಪದ ಹಕ್ಕಿಲ್ಲ ಎಂದು ಭಾರತ ಸ್ಪಷ್ಟಪಡಿಸಿದೆ.
ನ್ಯೂಯಾರ್ಕ್‌ನಲ್ಲಿ ಎರ್ಡೊಗನ್ ಅವರ ಭಾಷಣದ ಕುರಿತು ಕೇಳಲಾದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, ಟರ್ಕಿ ಅಧ್ಯಕ್ಷರು ಮಾಡಿದ ಜಮ್ಮು-ಕಾಶ್ಮೀರದ ಉಲ್ಲೇಖವನ್ನು ಭಾರತ ಸಂಪೂರ್ಣವಾಗಿ ತಿರಸ್ಕರಿಸುತ್ತದೆ ಎಂದು ಹೇಳಿದರು.
“ಟರ್ಕಿ ಅಧ್ಯಕ್ಷರು ತಮ್ಮ UNGA ಭಾಷಣದಲ್ಲಿ ಭಾರತದ ಕೇಂದ್ರಾಡಳಿತ ಪ್ರದೇಶವಾದ ಜಮ್ಮು-ಕಾಶ್ಮೀರದ ಕುರಿತು ಮಾಡಿರುವ ಅನಗತ್ಯ ಉಲ್ಲೇಖಗಳನ್ನು ಭಾರತ ತಿರಸ್ಕರಿಸುತ್ತದೆ. ಇದು ಭಾರತದ ಪ್ರಾದೇಶಿಕ ಸಮಗ್ರತೆ ಮತ್ತು ಸಾರ್ವಭೌಮತ್ವಕ್ಕೆ ಸಂಬಂಧಿಸಿದ ವಿಚಾರ. ಈ ವಿಷಯದಲ್ಲಿ ಯಾವುದೇ ಹೊರಗಿನ ಪಕ್ಷಕ್ಕೆ ಯಾವುದೇ ಹಕ್ಕು ಅಥವಾ ಅಧಿಕಾರವಿಲ್ಲ” ಎಂದು ಜೈಸ್ವಾಲ್ ಸ್ಪಷ್ಟಪಡಿಸಿದರು.
ಎರ್ಡೊಗನ್ ಅವರು ತಮ್ಮ UNGA ಭಾಷಣದಲ್ಲಿ ದಕ್ಷಿಣ ಏಷ್ಯಾದ ಪ್ರಾದೇಶಿಕ ವಿವಾದಗಳ ಕುರಿತು ಮಾತನಾಡುವ ಸಂದರ್ಭದಲ್ಲಿ, ಕಾಶ್ಮೀರ ಸೇರಿದಂತೆ ಎಲ್ಲ ವಿವಾದಗಳನ್ನು ವಿಶ್ವಸಂಸ್ಥೆಯ ಚಾರ್ಟರ್ ಹಾಗೂ ಸಂಬಂಧಿತ ನಿರ್ಣಯಗಳ ಚೌಕಟ್ಟಿನೊಳಗೆ ಮಾತುಕತೆಯ ಮೂಲಕ ಬಗೆಹರಿಸಬೇಕು ಎಂದು ಪ್ರತಿಪಾದಿಸಿದ್ದರು.
“ದಕ್ಷಿಣ ಏಷ್ಯಾದಲ್ಲಿ ಕಾಶ್ಮೀರ ವಿಚಾರ ಸೇರಿದಂತೆ ಎಲ್ಲ ವಿವಾದಗಳನ್ನು ವಿಶ್ವಸಂಸ್ಥೆಯ ಚಾರ್ಟರ್ ಮತ್ತು ಸಂಬಂಧಿತ ನಿರ್ಣಯಗಳ ಚೌಕಟ್ಟಿನೊಳಗೆ ಮಾತುಕತೆಯ ಮೂಲಕ ಪರಿಹರಿಸುವುದು ಮುಖ್ಯ. ರಚನಾತ್ಮಕ ಕ್ರಮಗಳನ್ನು ಕೈಗೊಂಡರೆ ಎಲ್ಲ ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳಲು ಸಾಧ್ಯ” ಎಂದು ಎರ್ಡೊಗನ್ ಹೇಳಿದ್ದರು.
ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಭಾರತ, ಜಮ್ಮು-ಕಾಶ್ಮೀರ ವಿಚಾರದಲ್ಲಿ ಯಾವುದೇ ಬಾಹ್ಯ ಹಸ್ತಕ್ಷೇಪವನ್ನು ಒಪ್ಪುವುದಿಲ್ಲ ಎಂಬ ತನ್ನ ನಿಲುವನ್ನು ಮತ್ತೊಮ್ಮೆ ಸ್ಪಷ್ಟಪಡಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



