ರಾಜಕೀಯ

ರೇಣು, ನಿರಾಣಿ, ಕತ್ತಿ ಜತೆ ಚರ್ಚೆ ಅನಗತ್ಯ: ಬಿಎಸ್‌ವೈ

Published On :

ಕ.ಪ್ರ. ವಾರ್ತೆ ಬೆಂಗಳೂರು ಮಾ.29
ವಿಧಾನಸಭೆ ಚುನಾವಣೆಗೆ ಕೆಜೆಪಿ ಅಭ್ಯರ್ಥಿಗಳ ಎರಡನೇ ಕಂತಿನ ಪಟ್ಟಿ ಶನಿವಾರ ಅಂತಿಮಗೊಳ್ಳಲಿದೆ.
ತಮ್ಮ ನೇತೃತ್ವದಲ್ಲಿ ನಡೆಯುವ ಚುನಾವಣಾ ಸಮಿತಿ ಸಭೆ ನಂತರ ಎರಡನೇ ಹಂತದ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುವುದು ಎಂದು ಕೆಜೆಪಿ ಅಧ್ಯಕ್ಷರೂ ಆಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಮೊದಲ ಹಂತದಲ್ಲಿ ಕೆಜೆಪಿಯ 69 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಎರಡನೇ ಹಂತದಲ್ಲಿ 40ರಿಂದ 50 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಅವರು ತಿಳಿಸಿದರು. ರೇಣುಕಾಚಾರ್ಯ, ಮುರುಗೇಶ್ ನಿರಾಣಿ, ಉಮೇಶ್ ಕತ್ತಿ ಮತ್ತಿತರರು ಕೆಜೆಪಿಗೆ ಸೇರುವ ಬಗ್ಗೆ ತಮ್ಮೊಂದಿಗೆ ಚರ್ಚೆ ನಡೆಸಿಲ್ಲ, ಚರ್ಚಿಸುವ ಅಗತ್ಯವೂ ಇಲ್ಲ. ಯಾರೇ ಪಕ್ಷಕ್ಕೆ ಬಂದರೂ ಅವರಿಗೆ ಸ್ವಾಗತವಿದೆ ಎಂದು ಹೇಳಿದರು.
ವಿಧಾನಸಭೆ ಚುನಾವಣೆಗೆ ಬೇಕಾದ ಎಲ್ಲಾ ಸಿದ್ಧತೆಗಳನ್ನೂ ಪಕ್ಷ ಮಾಡುತ್ತಿದೆ. ಈ ಸಂದರ್ಭದಲ್ಲಿ ಯಾರನ್ನೇ ಆಗಲಿ ಕಾಯುತ್ತಾ ಕೂರುವುದಿಲ್ಲ. ನಮ್ಮಷ್ಟಕ್ಕೆ ನಾವೇ ಪಕ್ಷ ಸಂಘಟನೆ ಮೂಲಕ ಚುನಾವಣೆಗೆ ಸಜ್ಜಾಗುತ್ತಿದ್ದೇವೆ. ಯಾರೇ ಬಂದು ಸೇರಿಕೊಂಡರೂ ಅವರನ್ನು ಸ್ವಾಗತಿಸಲಾಗುವುದು ಎಂದು ತಿಳಿಸಿದರು.
ರೇಣುಕಾಚಾರ್ಯ ಆಗಮನ: ಬಿಜೆಪಿಯಿಂದ ಆರು ವರ್ಷಗಳ ಕಾಲ ಉಚ್ಛಾಟನೆಗೊಂಡಿರುವ ಮಾಜಿ ಸಚಿವ ರೇಣುಕಾಚಾರ್ಯ ಅವರು ಶನಿವಾರ ಪ್ರಚಾರ ಸಮಿತಿ ಸಭೆ ಸಂದರ್ಭದಲ್ಲಿ ಆಗಮಿಸಿ ಯಡಿಯೂರಪ್ಪ ಅವರನ್ನು ಭೇಟಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈಗಾಗಲೇ ಕೆಜೆಪಿ ಸೇರಲು ತೀರ್ಮಾನಿಸಿರುವ ರೇಣುಕಾಚಾರ್ಯ, ಇದಕ್ಕಾಗಿ ಹೊನ್ನಾಳಿಯಲ್ಲಿ ಸಮಾವೇಶ ನಡೆಸಲು ತೀರ್ಮಾನಿಸಿದ್ದಾರೆ. ಆದರೆ, ರೇಣುಕಾಚಾರ್ಯ ಕೆಜೆಪಿ ಸೇರುವ ಬಗ್ಗೆ ತಮ್ಮೊಂದಿಗೆ ಮಾತನಾಡಿಲ್ಲ. ಹೊನ್ನಾಳಿಯಲ್ಲಿ ನಾವು ಸಮಾವೇಶವನ್ನೂ ಏರ್ಪಡಿಸಿಲ್ಲ ಎಂದು ಯಡಿಯೂರಪ್ಪ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಯಡಿಯೂರಪ್ಪ ಅವರನ್ನು ಭೇಟಿಯಾಗಿ ಪಕ್ಷಕ್ಕೆ ಸೇರಿಕೊಳ್ಳುವ ಬಗ್ಗೆ ಪ್ರಸ್ತಾಪಿಸಲಿದ್ದಾರೆ.

ಚಂಪಾ ಕೆಜೆಪಿಗೆ ಸೇರ್ಪಡೆ
ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ, ಬಂಡಾಯ ಸಾಹಿತಿ ಪ್ರೊ. ಚಂದ್ರಶೇಖರ ಪಾಟೀಲ ಅವರು ಶನಿವಾರ ಕೆಜೆಪಿ ಸೇರಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಡಾಲರ್ಸ್ ಕಾಲೋನಿ ನಿವಾಸದಲ್ಲಿ ನಡೆದ ಸರಳ ಸಮಾರಂಭದಲ್ಲಿ ಚಂಪಾ ಅವರು ವಿಧ್ಯುಕ್ತವಾಗಿ ಕೆಜೆಪಿಗೆ ಸೇರಿಕೊಂಡರು. ನಂತರ ಮಾತನಾಡಿದ ಅವರು, ಜಾತ್ಯತೀತ ಶಕ್ತಿಗಳಿಗೆ ಬೆಂಬಲ ನೀಡುವ ಸಲುವಾಗಿ ಕೆಜೆಪಿ ಸೇರಿದ್ದೇನೆ. ಕೆಜೆಪಿಯಲ್ಲಿ ಜಾತ್ಯತೀತ ವ್ಯಕ್ತಿಗಳು ಇರುವುದರಿಂದಾಗಿ ಈ ಪಕ್ಷ ಆರಿಸಿಕೊಂಡಿದ್ದೇನೆ ಎಂದು ಹೇಳಿದರು. ರಾಜ್ಯದಲ್ಲಿ ಪ್ರಾದೇಶಿಕ ಪಕ್ಷಗಳು ಅಧಿಕಾರಕ್ಕೆ ಬರಬೇಕು. ಅಂತಹ ಪಕ್ಷಗಳಿಂದ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ. ನೆಲ, ಜಲ, ಭಾಷೆ ವಿಚಾರದಲ್ಲಿ ನ್ಯಾಯ ಸಿಗುತ್ತದೆ ಎಂದು ನಾನು ಮೊದಲಿನಿಂದಲೂ ಪ್ರತಿಪಾದಿಸಿಕೊಂಡು ಬಂದಿದ್ದೇನೆ. ಅಂತಹ ಪ್ರಾದೇಶಿಕ ಪಕ್ಷ ಕೆಜೆಪಿ ಎಂದು ಮನಗಂಡು ಸೇರಿಕೊಂಡಿದ್ದೇನೆ. ಮುಂದಿನ ದಿನಗಳಲ್ಲಿ ಆ ಪಕ್ಷದ ಪರ ಪ್ರಚಾರ ಕಾರ್ಯದಲ್ಲಿ ತೊಡಗಿಕೊಳ್ಳುತ್ತೇನೆ ಎಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.