ರಾಜಕೀಯ

ಸಿದ್ದು ವಿರುದ್ಧ ಹೈಕಮಾಂಡ್ ಕಿವಿ ಚುಚ್ಚಲು ವೇದಿಕೆ ಸಿದ್ದಪಡಿಸುತ್ತಿರುವ ಎಸ್ಎಂಕೆ

ಸಿದ್ದರಾಮಯ್ಯ ಸರ್ಕಾರದ ಕಾರ್ಯ ವೈಖರಿ ಬಗ್ಗೆ ತೀವ್ರ ಅಸಮಾಧಾನ ಗೊಂಡಿರುವ ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಮಾಜಿ ಸಿಎಂ ಎಸ್. ಎಂ ಕೃಷ್ಣ...

ಸಿದ್ದು ವಿರುದ್ಧ ಹೈಕಮಾಂಡ್ ಕಿವಿ ಚುಚ್ಚಲು ವೇದಿಕೆ ಸಿದ್ದಪಡಿಸುತ್ತಿರುವ ಎಸ್ಎಂಕೆ
ಎಸ್.ಎಂ ಕೃಷ್ಣ ಮತ್ತು ಸಿದ್ದರಾಮಯ್ಯ
Published On :

ಬೆಂಗಳೂರು: ಸಿದ್ದರಾಮಯ್ಯ ಸರ್ಕಾರದ ಕಾರ್ಯ ವೈಖರಿ ಬಗ್ಗೆ ತೀವ್ರ ಅಸಮಾಧಾನ ಗೊಂಡಿರುವ ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಮಾಜಿ ಸಿಎಂ ಎಸ್. ಎಂ ಕೃಷ್ಣ   ಹೈ ಕಮಾಂಡ್ ಗೆ ವರದಿ ಮಾಡಲು ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಿದ್ದು ವಿರುದ್ಧ ಅಸಮಧಾನಗೊಂಡಿರುವವರನ್ನು ಒಂದೆಡೆ ಕಲೆ ಹಾಕಿ ದೆಹಲಿಯಲ್ಲಿ ಸಭೆ ನಡೆಸಿದ್ದಾರೆ.

ಭಾನುವಾರ ದೆಹಲಿಗೆ ತೆರಳಿರುವ ಎಸ್ ಎಂ ಕೃಷ್ಣ ಇದುವರೆಗೂ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿಲ್ಲ, ಬದಲಿಗೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಸಿದ್ದರಾಮಯ್ಯ ಸರ್ಕಾರದ ಕಾರ್ಯವೈಖರಿ ಬಗ್ಗೆ ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಿದ್ದರಾಮಯ್ಯ ಸರ್ಕಾರ ಬರ ನಿರ್ವಹಣೆಯಲ್ಲಿ ವಿಫಲವಾಗಿರುವುದು, ಬಿಬಿಎಂಪಿ ಚುನಾವಣೆಯಲ್ಲಿ ಕಾಂಗ್ರೆಸ್ ಕಳಪೆ ಪ್ರದರ್ಶನ, ಪಂಚಾಯಿತಿ ಮತ್ತು ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಕಾಂಗ್ರೆಸ್ ಅನುಭವಿಸಿದ ಹೀನಾಯ ಸೋಲಿನ ಬಗ್ಗೆ ಪಕ್ಷದ ಹೈ ಕಮಾಂಡ್ ಮುಂದೆ ಸಂಕ್ಷಿಪ್ತವಾಗಿ ಮಾಹಿತಿ ನೀಡಲಿದ್ದಾರೆ. ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಅನುಭವಿಸಿದ ಸೋಲುಗಳ ಬಗ್ಗೆ ವಿವರಣೆ ನೀಡಲಿರುವ ಎಸ್ ಎಂಕೆ 2018ರ ವಿಧಾನಸಭೆ ಚುನಾವಣೆ ಗುರಿಯಾಗಿರಿಸಿಕೊಂಡು ಕಾಂಗ್ರೆಸ್ ಪಕ್ಷದ ಪುನಶ್ಚೇತನಕ್ಕಾಗಿ, ನಾಯಕತ್ವ ಬದಲಾವಣೆ ಸಂಬಂಧ  ಹೈಕಮಾಂಡ್ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಮನವರಿಕೆ ಮಾಡಿಕೊಡಲಿದ್ದಾರೆ.

ರಾಜ್ಯ ಕಾಂಗ್ರೆಸ್ ಪಕ್ಷದ ನಾಯಕತ್ವ ಬದಲಾಗಲಿದೆ ಎಂಬ ಊಹಾ ಪೋಹಗಳ ಬೆನ್ನಲ್ಲೇ ಎಸ್.ಎಂ ಕೃಷ್ಣ ದೆಹಲಿಯಲ್ಲಿ ಸಿದ್ದು ವಿರುದ್ಧ ಕ್ಯಾಂಪೇನ್ ನಡೆಸುತ್ತಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ಸಿದ್ದು ವಿರುದ್ಧ ಅತೃಪ್ತಗೊಂಡಿರುವ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್, ಸಂಸದ ಮಲ್ಲಿಕಾರ್ಜುನ ಖರ್ಗೆ, ಅವರ ಜೊತೆ ಸಮಾಲೋಚನೆ ನಡೆಸಿದ್ದಾರೆ. ಜತೆಗೆ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರ ಮನೆಯಲ್ಲಿ ನಡೆದ ಔತಣಕೂಟದಲ್ಲಿ ಪಾಲ್ಗೊಂಡಿದ್ದ ಕೃಷ್ಣ ರಾಜ್ಯ ರಾಜಕೀಯದ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುವಾಗ ಸಿದ್ದರಾಮಯ್ಯ ರಾಜ್ಯ ಕಾಂಗ್ರೆಸ್ ಸಂಸದರನ್ನು ಪರಿಗಣನೆಗೆ ತೆಗೆದುಕೊಳ್ಳದೇ ಏಕಾಏಕಿ ತೀರ್ಮಾನ ಕೈಗೊಳ್ಳುತ್ತಾರೆಂದು ಅಸಮಾಧಾನ ಗೊಂಡಿರುವ ಹಲವು ಸಂಸದರ ಜೊತೆಯು ಕೃಷ್ಣ ಸಭೆ ನಡೆಸಲಿದ್ದಾರೆ.  ಸಿದ್ದು ಆಡಳಿತದ ವಿರುದ್ಧ ಅಸಮಾಧಾನ ಗೊಂಡಿರುವ ಅತೃಪ್ತ ಕಾಂಗ್ರೆಸ್ ನಾಯಕರ ಗುಂಪು ಶೀಘ್ರದಲ್ಲೇ ಸಭೆ ಸೇರಿ ಚರ್ಚಿಸಿ, ಹೈ ಕಮಾಂಡ್ ಗೆ ಸಿದ್ದು ವಿರುದ್ಧ ದೂರು ನೀಡಲಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.