ಉಪ ಚುನಾವಣೆ ಸೋಲಿನ ಬೆನ್ನಲ್ಲೇ ನಾಯಕತ್ವದ ವಿರುದ್ಧ ಬಿಜೆಪಿಯಲ್ಲಿ ಮತ್ತೆ ಅಸಮಾಧಾನ!
ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ಮುಸುಕಿನ ಗುದ್ದಾಟ ಮತ್ತೆ ಭುಗಿಲೆದ್ದಿದ್ದು, ನಂಜನಗೂಡು ಮತ್ತು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿನ ಪಕ್ಷದ ಹೀನಾಯ ಸೋಲು ಮತ್ತೆ ಬಿಜೆಪಿ ಪಕ್ಷದ ರಾಜ್ಯ ನಾಯಕತ್ವದ ವಿರುದ್ಧ ಅಸಮಾಧಾನ ಭುಗಿಲೇಳುವಂತೆ ಮಾಡಿದೆ.

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ಮುಸುಕಿನ ಗುದ್ದಾಟ ಮತ್ತೆ ಭುಗಿಲೆದ್ದಿದ್ದು, ನಂಜನಗೂಡು ಮತ್ತು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿನ ಪಕ್ಷದ ಹೀನಾಯ ಸೋಲು ಮತ್ತೆ ಬಿಜೆಪಿ ಪಕ್ಷದ ರಾಜ್ಯ ನಾಯಕತ್ವದ ವಿರುದ್ಧ ಅಸಮಾಧಾನ ಭುಗಿಲೇಳುವಂತೆ ಮಾಡಿದೆ.
ಇನ್ನು ರಾಯಣ್ಣ ಬ್ರಿಗೇಡ್ ಗೆ ಸಂಬಂಧಿಸಿದಂತೆ ತಮ್ಮದೇ ಪಕ್ಷದ ವರಿಷ್ಠರಿಂದ ವಿರೋಧ ಎದುರಿಸಿದ್ದ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆಎಸ್ ಈಶ್ವರಪ್ಪ ಅವರು ಮತ್ತೆ ಬ್ರಿಗೇಡ್ ವಿಚಾರವನ್ನು ಕೈಗೆತ್ತಿಕೊಂಡಿದ್ದು, ಯಾವುದೇ ಕಾರಣಕ್ಕೂ ಬ್ರಿಗೇಡ್ ನಿಲ್ಲುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಅಂತೆಯೇ ಇದೇ ಏಪ್ರಿಲ್ 27ರಂದು ಬೆಂಗಳೂರಿನಲ್ಲಿ ಅತೃಪ್ತ ಮುಖಂಡರ ಸಭೆ ನಡೆಸುವುದಾಗಿ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ. ಬಿಜೆಪಿ ಪದಾಧಿಕಾರಿಗಳ ಪಟ್ಟಿ ಬದಲಾವಣೆ ಸಂಬಂಧ ಹೈಕಮಾಂಡ್ ಗೆ ಮತ್ತೊಮ್ಮೆ ಮೊರೆ ಹೋಗಲು ಅತೃಪ್ತ ನಾಯಕರು ನಿರ್ಣಯಿಸಿದ್ದಾರೆ. ಏಪ್ರಿಲ್ 27ರಂದು ಇನ್ನೊಂದು ಸಭೆ ನಡೆಸಿ ಬಳಿಕ ವರಿಷ್ಠರಿಗೆ ದೂರು ನೀಡಲು ಬುಧವಾರ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎನ್ನಲಾಗಿದೆ.
ಈ ಬಗ್ಗೆ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ ಅವರು, "ಬಿಜೆಪಿ ರಾಜ್ಯ ಘಟಕದಲ್ಲಿ ಉಂಟಾಗಿರುವ ಭಿನ್ನಮತ ಶಮನ ಹಾಗೂ ಪದಾಧಿಕಾರಿಗಳ ಪಟ್ಟಿಯನ್ನು ಫೆಬ್ರವರಿ 10ರೊಳಗೆ ಬದಲಾವಣೆ ಮಾಡಲು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರು ನಾಲ್ವರ ಸಮಿತಿ ರಚನೆ ಮಾಡಿದ್ದರು. ಆದರೆ, ಆ ಸಮಿತಿ ಇನ್ನೂ ಸಭೆ ನಡೆಸಿಲ್ಲ ಎಂದು ನೇರವಾಗಿ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಂತೆಯೇ ರಾಯಣ್ಣ ಬ್ರಿಗೇಡ್ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ. ಅಂತೆಯೇ ರಾಯಣ್ಣ ಬ್ರಿಗೇಡ್ ಕೂಡ ನಿಲ್ಲುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ರಾಜ್ಯದಲ್ಲಿ ಸಂಗೊಳ್ಳಿ ರಾಯಣ್ಣ ಬ್ರಿಗೇಡನ್ನು ಇನ್ನಷ್ಟು ಬಲಗೊಳಿಸಲು ನಿರ್ಧರಿಸಿದ್ದು, ಅದಕ್ಕೆ ಪೂರಕವಾಗಿ ಕಾರ್ಯಕ್ರಮ ರೂಪಿಸಲಾಗಿದೆ. ಮೇ 8ರಂದು ರಾಯಚೂರಿನಲ್ಲಿ ಅಭ್ಯಾಸವರ್ಗ, ಜೂ.18ಕ್ಕೆ ಮೈಸೂರಿನಲ್ಲಿ ಪದಾಧಿಕಾರಿಗಳ ಸಮಾವೇಶ ನಡೆಸಲಾಗುತ್ತಿದೆ ಎಂದು ಈಶ್ವರಪ್ಪ ತಿಳಿಸಿದರು.
ತಮ್ಮ ಹೇಳಿಕೆಯುದ್ದಕ್ಕೂ ಯಡಿಯೂರಪ್ಪ ಅವರ ಹೆಸರನ್ನು ಬಳಸದ ಈಶ್ವರಪ್ಪ ಅವರು, ಅವರ ವಿರುದ್ಧವೇ ವಾಗ್ದಾಳಿ ಮಾಡಿದರು. "ಕಾಂಗ್ರೆಸ್ ಪಕ್ಷ ಅಶಿಸ್ತಿನಿಂದ ಕೂಡಿದ ಪಕ್ಷವಾಗಿದ್ದು, ಮುಂದಿನ ಸಿಎಂ ಅಭ್ಯರ್ಥಿಯನ್ನು ಶಾಸಕಾಂಗ ಪಕ್ಷ ನಿರ್ಧರಿಸುತ್ತದೆ ಎಂಬ ಮಾತನ್ನು ದಿಗ್ವಿಜಯ್ ಸಿಂಗ್ ಹೇಳಿದ್ದಾರೆ. ಆದರೆ, ಸಿದ್ದರಾಮಯ್ಯ ನಾನೇ ಮುಂದಿನ ಮುಖ್ಯಮಂತ್ರಿ ಎನ್ನುತ್ತಾರೆ. ಆದರೆ, ನಮ್ಮ ಪಕ್ಷದಲ್ಲಿ ವರಿಷ್ಠರು ಯಡಿಯೂರಪ್ಪ ಅವರನ್ನು ಸಿಎಂ ಅಭ್ಯರ್ಥಿ ಎಂದು ಘೋಷಣೆ ಮಾಡಿದ ಕೂಡಲೇ ನಾವ್ಯಾರು ಅದಕ್ಕೆ ವಿರೋಧ ಮಾಡಲಿಲ್ಲ ಎಂದರು.
ನಂಜನಗೂಡು, ಗುಂಡ್ಲುಪೇಟೆ ಕ್ಷೇತ್ರಗಳ ಉಪ ಚುನಾವಣೆ ಸೋಲಿನ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದ ಈಶ್ವರಪ್ಪ ಅವರು, ಏಪ್ರಿಲ್ 23ರಂದು ಪಕ್ಷದ ರಾಜ್ಯಾಧ್ಯಕ್ಷರು ಸಭೆ ಕರೆದಿದ್ದಾರೆ, ಅಲ್ಲಿ ಎಲ್ಲ ವಿಚಾರ ಚರ್ಚೆ ನಡೆಸುತ್ತೇವೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


