ಮಹದಾಯಿ ಹೋರಾಟ: ಬಿಎಸ್ ವೈ ಸಂಧಾನ ವಿಫಲ, ನಾಳೆ ರಾಜಭವನಕ್ಕೆ ಮುತ್ತಿಗೆ
ಮಹದಾಯಿ ಹಾಗೂ ಕಳಸಾ ಬಂಡೂರಿ ಯೊಜನೆ ಜಾರಿಗೆ ಒತ್ತಾಯಿಸಿ ಮಲ್ಲೇಶ್ವರಂನ ಬಿಜೆಪಿ ಕೇಂದ್ರ ಕಚೇರಿ ಎದುರು ರೈತರು ನಡೆಸುತ್ತಿರುವ....
Published On :
ಬೆಂಗಳೂರು: ಮಹದಾಯಿ ಹಾಗೂ ಕಳಸಾ ಬಂಡೂರಿ ಯೊಜನೆ ಜಾರಿಗೆ ಒತ್ತಾಯಿಸಿ ಮಲ್ಲೇಶ್ವರಂನ ಬಿಜೆಪಿ ಕೇಂದ್ರ ಕಚೇರಿ ಎದುರು ರೈತರು ನಡೆಸುತ್ತಿರುವ ಆಹೋರಾತ್ರಿ ಧರಣಿ ಮಂಗಳವಾರ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಧರಣಿ ನಿರತ ರೈತರ ಮನವೊಲಿಸುವಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ವಿಫಲರಾಗಿದ್ದಾರೆ.
ಬಿಎಸ್ ವೈ ಸಂಧಾನ ವಿಫಲವಾದ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮಹದಾಯಿ ಹೋರಾಟ ಸಮಿತಿ ಅಧ್ಯಕ್ಷ ವೀರೇಶ್ ಸೊಬರದಮಠ ಅವರು, ಮೊದಲು ಮಹದಾಯಿ ನೀರು ತರುವುದಾಗಿ ಹೇಳಿದ್ದ ಯಡಿಯೂರಪ್ಪನ ಅವರು ಈ ಅಸಡ್ಡೆ ಮಾತುಗಳನ್ನು ಹಾಡುವ ಮೂಲಕ ತಮ್ಮ ಮಾತನ್ನು ತಪ್ಪಿ ವಚನಭ್ರಷ್ಟರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸಲು ನಿರ್ಧರಿಸಿದ್ದು, ನಾಳೆ ರಾಜಭವನಕ್ಕೆ ಪಾದಯಾತ್ರೆ ಮೂಲಕ ತೆರಳಿ ಮುತ್ತಿಗೆ ಹಾಕುತ್ತೇವೆ. ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಗೆ ಹಾಗೂ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರ ನಿವಾಸಕ್ಕೆ ತೆರಳಿ ಮನವಿ ಸಲ್ಲಿಸುವುದಾಗಿ ಸೊಬರದಮಠ ಅವರು ತಿಳಿಸಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಧರಣಿ ಸ್ಥಳಕ್ಕೆ ಭೇಟಿ ನೀಡಿ ರೈತರ ಮನವೊಲಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರು ಇಂದು ಸಂಜೆ 5 ಗಂಟೆಗೆ ಪ್ರತಿಭಟನಾ ಸ್ಥಳಕ್ಕೆ ತೆರಳಿ ಧರಣಿ ಕೈಬಿಡುವಂತೆ ಮಹದಾಯಿ ಹೋರಾಟಗಾರರಿಗೆ ಮನವಿ ಮಾಡಿದರು. ಆದರೆ ಯಡಿಯೂರಪ್ಪ ಅವರ ಮಾತಿಗೆ ಬಗ್ಗದ ರೈತರು, ಯಡಿಯೂರಪ್ಪ ವಚನಭ್ರಷ್ಟ, ಮಾತು ತಪ್ಪಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಯಡಿಯೂರಪ್ಪ ಹಾಗೂ ರೈತರ ನಡುವೆ ಕೆಲಕಾಲ ವಾಗ್ವಾದ ಸಹ ನಡೆಯಿತು. ರೊಚ್ಚಿಗೆದ್ದ ರೈತರಿಂದ ಆತ್ಮಹತ್ಯೆ ಬೆದರಿಕೆ ಕೂಡ ಕೇಳಿಬಂತು.
ಈ ವೇಳೆ ನಾನು ಯಾವುದೇ ನಿರ್ದಿಷ್ಟ ಭರವಸೆ ನೀಡಿಲ್ಲ ಎಂದು ಯಡಿಯೂರಪ್ದಪ ಹೇಳುತ್ತಿದ್ದಂತೆ ಇದಕ್ಕೆ ವಿರೋಧ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಧಿಕ್ಕಾರ ಕೂಗಿದರು. ಹೋರಾಟ ಮುಂದುವರಿಸುವುದಾಗಿ ಘೋಷಿಸಿದರು.
ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ಪತ್ರದಲ್ಲಿ ದಿನಾಂಕ ನಿಗದಿಯಾಗದೇ ಇರುವುದರಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಈ ಬಗ್ಗೆ ಸ್ಪಷ್ಟನೆ ನೀಡಬೇಕೆಂದು ಆಗ್ರಹಿಸಿ ರೈತ ಸೇನಾ ಕರ್ನಾಟಕ ಸಂಘಟನೆ ನೇತೃತ್ವದಲ್ಲಿ ರೈತರು ಕಳೆದ ನಾಲ್ಕು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.
ಯಡಿಯೂರಪ್ಪ ಅವರು ಮಹದಾಯಿ ಹೋರಾಟಗಾರರ ಪ್ರತಿಭಟನೆಯ ಬಿಸಿಯಿಂದ ತಪ್ಪಿಸಿಕೊಳ್ಳಲು ಇಂದು ಬೆಳಗ್ಗೆ ಬಿಜೆಪಿ ಕಚೇರಿಯಲ್ಲಿ ಕೋರ್ ಕಮಿಟಿ ಸಭೆ ನಡೆಸುವ ಬದಲು ತಮ್ಮ ನಿವಾಸದಲ್ಲಿಯೇ ಕೋರ್ ಕಮಿಟಿ ಸಭೆ ನಡೆಸಿದರು.
ಈ ಮಧ್ಯೆ, ನೀರಾವರಿ ಸಚಿವ ಎಂಬಿ ಪಾಟೀಲ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಬಿಜೆಪಿ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ಮಹದಾಯಿ ಹೋರಾಟಗಾರರನ್ನು ಭೇಟಿಯಾಗಿ ಚರ್ಚಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

