ರಾಜಕೀಯ

ಬಿಜೆಪಿ ಕಚೇರಿ ಎದುರು ಮಹದಾಯಿ ಹೋರಾಟ: ರೈತರು ಸಿಎಂ ಮನೆ ಮುಂದೆ ಧರಣಿ ನಡೆಸಲಿ- ಬಿಎಸ್ ವೈ

ಮಹದಾಯಿ ವಿವಾದ ಇತ್ಯಾರ್ಥಪಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ. ಹೀಗಾಗಿ ರೈತರು ಸಿಎಂ ಮನೆ ಮುಂದೆಯೇ.....

ಬಿಜೆಪಿ ಕಚೇರಿ ಎದುರು ಮಹದಾಯಿ ಹೋರಾಟ: ರೈತರು ಸಿಎಂ ಮನೆ ಮುಂದೆ ಧರಣಿ ನಡೆಸಲಿ- ಬಿಎಸ್ ವೈ
ಬಿಎಸ್ ಯಡಿಯೂರಪ್ಪ
Published On :
ಬೆಂಗಳೂರು: ಮಹದಾಯಿ ವಿವಾದ ಇತ್ಯಾರ್ಥಪಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ. ಹೀಗಾಗಿ ರೈತರು ಸಿಎಂ ಮನೆ ಮುಂದೆಯೇ ಧರಣಿ ನಡೆಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಮಂಗಳವಾರ ಹೇಳಿದ್ದಾರೆ.
ಕಳೆದ ನಾಲ್ಕು ದಿನಗಳಿಂದ ಮಲ್ಲೇಶ್ವರಂನ ಬಿಜೆಪಿ ಕಚೇರಿ ಎದರು ಅಹೋರಾತ್ರಿ ಧರಣಿ ನಡೆಸುತ್ತಿದ್ದ ಮಹದಾಯಿ ಹೋರಾಟಗಾರರನ್ನು ಭೇಟಿಯಾಗಿ ಸಂಧಾನ ನಡೆಸಿ ವಿಫಲವಾದ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಬಿಎಸ್ ವೈ, ಮಹದಾಯಿ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದರು.
ಸಿದ್ದರಾಮಯ್ಯ ಅವರು ಹೇಳಿದಂತೆ ಬಿಜೆಪಿ ನಾಯಕರನ್ನು ನಾವು ಒಪ್ಪಿಸಿದ್ದೇವೆ. ಗೋವಾ ಕಾಂಗ್ರೆಸ್‌ ನಾಯಕರನ್ನು ಒಪ್ಪಿಸಿ ಯೋಜನೆ ಜಾರಿಗೆ ಸಿಎಂ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಆದರೆ ಅದನ್ನು ಸಿದ್ದರಾಮಯ್ಯ ವಿರೋಧಿಸುವ ಮೂಲಕ ಬೆಂಕಿ ಹಚ್ಚಿದ್ದಾರೆ. ಗೋವಾ ಕಾಂಗ್ರೆಸ್ ನಾಯಕರಿಗೆ ಹೇಳಿ ಮಹದಾಯಿ ಸಮಸ್ಯೆಯನ್ನು ತೀವ್ರಗೊಳಿಸಲು ಯತ್ನಿಸುತ್ತಿದ್ದಾರೆ ಎಂದು ಬಿಎಸ್ ವೈ ಆರೋಪಿಸಿದ್ದಾರೆ.
ಮಹದಾಯಿ ಹೋರಾಟವನ್ನು ಸಿಎಂ ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ. ನಿಮಗೆ (ಕಾಂಗ್ರೆಸ್) ಕಾಳಜಿ ಇದ್ದರೆ ಮಹದಾಯಿ ಸಮಸ್ಯೆಯನ್ನು ಇತ್ಯರ್ಥಪಡಿಸಲು ಮುಂದಾಗಿ. ರಾಜ್ಯ ಸರ್ಕಾರಕ್ಕೆ ರೈತರ ಹಿತ ಬೇಕಾಗಿಲ್ಲ, ರಾಜಕೀಯಕ್ಕಾಗಿ ಈ ರೀತಿ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಗೋವಾದ ಪ್ರತಿಪಕ್ಷ ಕಾಂಗ್ರೆಸ್ ನೀರು ಕೊಡಲು ವಿರೋಧ ವ್ಯಕ್ತಪಡಿಸುತ್ತಿದೆ. ಜನವರಿ 6ರಿಂದ ಹೋರಾಟ ಮಾಡುತ್ತೇವೆ ಎಂದು ಗೋವಾ ಕಾಂಗ್ರೆಸ್ ಅಧ್ಯಕ್ಷರು ಹೇಳುತ್ತಿದ್ದಾರೆ. ಇವರ ಮನವೊಲಿಸುವ ಕೆಲಸವನ್ನು ಸಿದ್ದರಾಮಯ್ಯ ಅವರು ಮಾಡಬೇಕು ಎಂದರು.
ಮಹದಾಯಿ ವಿಚಾರದಲ್ಲಿ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರಿಗೆ ನಾನು ಬರೆದ ಪತ್ರಕ್ಕೆ ಅವರು ಉತ್ತರ ನೀಡಿದ್ದಾರೆ. ಕುಡಿಯುವ ನೀರು ಪೂರೈಕೆ ಮಾಡುವಲ್ಲಿ ನಮ್ಮ ಅಭ್ಯಂತರವಿಲ್ಲ. ಈ ವಿಚಾರ ನ್ಯಾಯಾಧೀಕರಣದ ಮುಂದಿದೆ. ಕುಡಿಯುವ ನೀರು ಕೊಡಲು ನಾವು ಸಿದ್ಧ ಎಂದು ಗೋವಾ ಸಿಎಂ ಪತ್ರದಲ್ಲಿ ತಿಳಿಸಿದ್ದಾರೆ. ಈ ಪತ್ರವನ್ನು ಸಿದ್ದರಾಮಯ್ಯ ಮಹದಾಯಿ ಟ್ರಿಬ್ಯೂನಲ್ ಗೆ ಸಲ್ಲಿಸಲಿ ಎಂದು ಯಡಿಯೂರಪ್ಪ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.