ರಾಜಕೀಯ

ಬಿಜೆಪಿಗೆ ಪ್ರಬಲ ಸ್ಪರ್ಧಿಯಾಗಿ ಬೆಂಗಳೂರಿನಿಂದ ರಮ್ಯಾ ಕಣಕ್ಕಿಳಿಸಲು ಸಿಎಂ ಸಿದ್ದರಾಮಯ್ಯ ಒಲವು?

ಸಾಮಾಜಿಕ ಮಾಧ್ಯಮ ತಂಡದ ಉಸ್ತುವಾರಿ ವಹಿಸಿಕೊಂಡ ನಂತರ ಹೊಸ ಅಲೆಯನ್ನು ಸೃಷ್ಟಿಸುವಲ್ಲಿ ....

ಬಿಜೆಪಿಗೆ ಪ್ರಬಲ ಸ್ಪರ್ಧಿಯಾಗಿ ಬೆಂಗಳೂರಿನಿಂದ ರಮ್ಯಾ ಕಣಕ್ಕಿಳಿಸಲು ಸಿಎಂ ಸಿದ್ದರಾಮಯ್ಯ ಒಲವು?
ನಟಿ ಹಾಗೂ ರಾಜಕಾರಣಿ ರಮ್ಯ
Published On :
ಬೆಂಗಳೂರು: ಸಾಮಾಜಿಕ ಮಾಧ್ಯಮ ತಂಡದ ಉಸ್ತುವಾರಿ ವಹಿಸಿಕೊಂಡ ನಂತರ ಹೊಸ ಅಲೆಯನ್ನು ಸೃಷ್ಟಿಸುವಲ್ಲಿ ಸ್ವಲ್ಪ ಮಟ್ಟಿಗೆ ಯಶಸ್ವಿಯಾಗಿರುವ ನಟಿ ಹಾಗೂ ರಾಜಕಾರಣಿ ರಮ್ಯಾ ಅವರನ್ನು ಮುಂಬರುವ ವಿಧಾನಸಭೆ ಚುನಾವಣೆಗೆ ಅತ್ಯಂತ ಸಕ್ರಿಯವಾಗಿ ಬಳಸಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಒಲವು ತೋರಿದ್ದಾರೆ.
ಬೆಂಗಳೂರು ನಗರದಲ್ಲಿ ಬಿಜೆಪಿಯ ಪ್ರಾಬಲ್ಯವನ್ನು ಕುಗ್ಗಿಸಲು, ನಗರದ ಮತದಾರರ ಒಲವನ್ನು ಕಾಂಗ್ರೆಸ್ ನತ್ತ ಸೆಳೆಯಲು ರಮ್ಯ ಅವರನ್ನು ಸಾಮಾಜಿಕ ತಾಣದ ಮೂಲಕ ಹೆಚ್ಚು ಬಳಸಿಕೊಂಡು ಜನರನ್ನು ಸೆಳೆಯಲು ಸಿದ್ದರಾಮಯ್ಯ ಮತ್ತು ರಾಜ್ಯ ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ. 
ಬೆಂಗಳೂರು ನಗರದಲ್ಲಿರುವ 28 ವಿಧಾನಸಭಾ ಕ್ಷೇತ್ರಗಳ ಪೈಕಿ 13ರಿಂದ 20 ಸ್ಥಾನಗಳನ್ನು ಭದ್ರ ಮಾಡಿಕೊಳ್ಳಲು ಕಾಂಗ್ರೆಸ್ ಹವಣಿಸುತ್ತಿದೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ನೇತೃತ್ವ ವಹಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಬೆಂಗಳೂರಿನಲ್ಲಿ ತಳಮಟ್ಟದಿಂದ ಕೆಲಸ ಮಾಡಲು ಮುಂದಾಗಿದ್ದಾರೆ. ಯಾವೆಲ್ಲ ಕ್ಷೇತ್ರದಲ್ಲಿ ಬಿಜೆಪಿಯ ಪ್ರಾಬಲ್ಯ ಹೆಚ್ಚಾಗಿದೆ ಎಂದು ಅರಿತುಕೊಂಡು ಅಲ್ಲೆಲ್ಲಾ ಮತದಾರರನ್ನು ಸೆಳೆಯಲು ಹೊಸ ತಂತ್ರಗಳನ್ನು ಅನುಸರಿಸುತ್ತಿದ್ದಾರೆ.
ಮಂಡ್ಯ ಕ್ಷೇತ್ರದಿಂದ ರಮ್ಯ ಅವರು ಸ್ಪರ್ಧಿಸುತ್ತಿದ್ದಾರೆ, ಅದಕ್ಕಾಗಿ ಅಲ್ಲಿ ಬಾಡಿಗೆ ಮನೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದ್ದರೂ ಕೂಡ ಬೆಂಗಳೂರಿನಲ್ಲಿ ಬಿಜೆಪಿ ಪ್ರಾಬಲ್ಯವಿರುವ ಬಸವನಗುಡಿ ಕ್ಷೇತ್ರದಿಂದ ರಮ್ಯ ಅವರನ್ನು ವಿಧಾನಸಭೆ ಚುನಾವಣೆಗೆ ಸ್ಪರ್ಧಾಕಣಕ್ಕಿಳಿಸುವ ಆಲೋಚನೆಯಲ್ಲಿ ಕಾಂಗ್ರೆಸ್ ಇದೆ.
ಬೆಂಗಳೂರಿನ ಯಾವುದಾದರೊಂದು ಕ್ಷೇತ್ರದಿಂದ ರಮ್ಯ ಅವರನ್ನು ಕಣಕ್ಕಿಳಿಸುವ ಕುರಿತು ತಾವು ಮುಕ್ತ ಮನಸ್ಸು ಹೊಂದಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಿಂದ ರಮ್ಯ ಅವರನ್ನು ಚುನಾವಣಾ ಕಣಕ್ಕಿಳಿಸಿದರೆ ಪಕ್ಷದ ವರ್ಚಸ್ಸು ಹೆಚ್ಚಬಹುದು ಎಂಬುದು ಕಾಂಗ್ರೆಸ್ ನಾಯಕರ ಅಭಿಪ್ರಾಯ. ಬೆಂಗಳೂರಿನಲ್ಲಿ ಬಿಜೆಪಿ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಮುಂಬರುವ ದಿನಗಳಲ್ಲಿ ಚುನಾವಣಾ ಪ್ರಚಾರಕ್ಕೆ ಕೂಡ ರಮ್ಯಾ ಆಗಮಿಸಬಹುದು. ಮಾಜಿ ಮೇಯರ್ ಪದ್ಮಾವತಿ ಅವರನ್ನು ರಾಜಾಜಿನಗರ ಕ್ಷೇತ್ರದಿಂದ ಸ್ಪರ್ಧೆಗಿಳಿಸುವ ಯೋಜನೆಯಲ್ಲಿ ಕಾಂಗ್ರೆಸ್ ಇದೆ. ಮೇಯರ್ ಆಗಿ ಪದ್ಮಾವತಿಯವರು ಮಾಡಿದ ಕೆಲಸ ಅವರಿಗೆ ವರವಾಗಬಹುದು ಎಂಬುದು ಕಾಂಗ್ರೆಸ್ ಲೆಕ್ಕಾಚಾರ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.