ಬಿಎಸ್ ವೈ ಮೇಲಿನ ಆರೋಪ ನಿಮಗೇ ತಿರುಗುಬಾಣ: ಸೋನಿಯಾ, ರಾಹುಲ್ ಗೆ ಪ್ರಧಾನಿ ಮೋದಿ ಎಚ್ಚರಿಕೆ
ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್.ಯಡಿಯೂರಪ್ಪನವರಿಗೆ ಕ್ಲೀನ್ ಚಿಟ್ ನೀಡಿದ ಪ್ರಧಾನ ಮಂತ್ರಿ ....

ಹುಬ್ಬಳ್ಳಿ: ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್.ಯಡಿಯೂರಪ್ಪನವರಿಗೆ ಕ್ಲೀನ್ ಚಿಟ್ ನೀಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಮತ್ತು ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಅವರು 5,000 ಕೋಟಿ ರೂಪಾಯಿ ಹಗರಣದಲ್ಲಿ ಜಾಮೀನು ಪಡೆದು ಹೊರಬಂದಿಲ್ಲವೆ ಎಂದು ಪ್ರಶ್ನಿಸಿದರು.
ಯಡಿಯೂರಪ್ಪ ವಿರುದ್ಧ ಆಧಾರರಹಿತ ಸುಳ್ಳು ಆಪಾದನೆಗಳನ್ನು ಮಾಡಿದರೆ ಅದು ವಾಪಸ್ಸು ಅವರಿಗೆ ತಿರುಗಿ ಬೀಳುವ ಸಾಧ್ಯತೆಯಿದೆ ಎಂದು ಪ್ರಧಾನಿ ಎಚ್ಚರಿಕೆ ನೀಡಿದರು. ಹುಬ್ಬಳ್ಳಿಯಲ್ಲಿ ನಿನ್ನೆ ತಮ್ಮ ನಾಲ್ಕನೇ ಹಾಗೂ ಕೊನೆಯ ದಿನದ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪನವರು ಮುಗ್ಧರು. ಕಾಂಗ್ರೆಸ್ ಅವರ ವಿರುದ್ಧ ಆಧಾರರಹಿತ ಆರೋಪಗಳನ್ನು ಹೊರಿಸುತ್ತಿದೆ. ಅವರ ವಿರುದ್ಧದ ಕೇಸಿನಲ್ಲಿ ಯಾವುದೂ ಸಾಬೀತಾಗಿಲ್ಲ ಎಂದು ಯಡಿಯೂರಪ್ಪನವರನ್ನು ಸಮರ್ಥಿಸಿಕೊಂಡರು.
ಬಿಜೆಪಿ ಉದ್ಯೋಗ ಸೃಷ್ಟಿಸುವಲ್ಲಿ ವಿಫಲವಾಗಿದೆ ಎಂಬ ಕಾಂಗ್ರೆಸ್ ಆಪಾದನೆಯನ್ನು ತಳ್ಳಿ ಹಾಕಿದ ಅವರು, ಕಳೆದ ನಾಲ್ಕು ವರ್ಷಗಳಲ್ಲಿ ದೇಶದಲ್ಲಿ ಸುಮಾರು 100 ಮೊಬೈಲ್ ಕಂಪೆನಿಗಳು ಸ್ಥಾಪನೆಗೊಂಡಿವೆ. ಅದೇ ಯುಪಿಎ ಸರ್ಕಾರದ ಅವಧಿಯಲ್ಲಿ ಕೇವಲ 2 ಮೊಬೈಲ್ ಕಂಪೆನಿಗಳು ಸ್ಥಾಪನೆಗೊಂಡಿದ್ದವು. ವಿಮಾನ ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸಿರುವುದರಿಂದ ದೇಶದ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಿದೆ. ಇಂದು ವಿಮಾನಗಳಲ್ಲಿ ಪ್ರಯಾಣಿಸುವವರ ಸಂಖ್ಯೆ ಅಧಿಕವಾಗಿದೆ. ಬಿಜೆಪಿ ನೀತಿಯಿಂದಾಗಿ ಸಾಮಾನ್ಯ ವ್ಯಕ್ತಿ ಕೂಡ ಇಂದು ವಿಮಾನದಲ್ಲಿ ಪ್ರಯಾಣಿಸಲು ಸಾಧ್ಯವಾಗುತ್ತಿದೆ ಎಂದು ಹೇಳಿದರು.
ಅಭಿವೃದ್ಧಿಕಾರ್ಯಗಳನ್ನು ತ್ವರಿತಪಡಿಸಲು ಬಿಜೆಪಿಗೆ ಮತ ಹಾಕುವಂತೆ ಅವರು ಮತದಾರರಲ್ಲಿ ಮನವಿ ಮಾಡಿಕೊಂಡರು. ಇದೇ ಸಂದರ್ಭದಲ್ಲಿ ಬಿಜೆಪಿಯ ಅಭಿವೃದ್ಧಿ ಕೆಲಸಗಳನ್ನು ಪಟ್ಟಿ ಮಾಡಿದ ಅವರು, ಸುಮಾರು 1 ಲಕ್ಷ ಹಳ್ಳಿಗಳಿಗೆ ಆಪ್ಟಿಕಲ್ ಫೈಬರ್ ಕೇಬಲ್ ಸಂಪರ್ಕವನ್ನು ಅಳವಡಿಸಲಾಗಿದೆ. ಯುಪಿಎ ಆಡಳಿತಾವಧಿಯಲ್ಲಿ ಆಪ್ಟಿಕಲ್ ಫೈಬರ್ ಕೇಬಲ್ ನೆಟ್ ವರ್ಕ್ ಕೇವಲ 59 ಹಳ್ಳಿಗಳಿಗೆ ಮಾತ್ರ ಲಭ್ಯವಾಗಿತ್ತು ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


