ಗೃಹ ಸಚಿವ ಎಂ.ಬಿ.ಪಾಟೀಲ್ ವಿರುದ್ಧ ಕೇಂದ್ರಕ್ಕೆ ಶೋಭಾ ಕರಂದ್ಲಾಜೆ ದೂರು
ಸಚಿವ ಎಂ.ಬಿ.ಪಾಟೀಲ್ ಗೃಹ ಇಲಾಖೆಯನ್ನು ತಮ್ಮ ವೈಯಕ್ತಿಕ ಉದ್ದೇಶಗಳಿಗೆ ದುರ್ಬಳಕೆ ಮಾಡಿಕೊಂಡು ದ್ವೇಷದ ರಾಜಕೀಯ ಮಾಡುತ್ತಿದ್ದಾರೆ....

Published On :
ಬೆಂಗಳೂರು: ಸಚಿವ ಎಂ.ಬಿ.ಪಾಟೀಲ್ ಗೃಹ ಇಲಾಖೆಯನ್ನು ತಮ್ಮ ವೈಯಕ್ತಿಕ ಉದ್ದೇಶಗಳಿಗೆ ದುರ್ಬಳಕೆ ಮಾಡಿಕೊಂಡು ದ್ವೇಷದ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಅವರು ಕೇಂದ್ರ ಗೃಹ ಸಚಿವಾಲಯಕ್ಕೆ ದೂರು ನೀಡಿದ್ದಾರೆ.
ಲೋಕಸಭಾ ಚುನಾವಣೆ ಪ್ರಕ್ರಿಯೆ ಮುಗಿಯುತ್ತಿದ್ದಂತೆ ಕರ್ನಾಟಕ ಸರ್ಕಾರ ಹಾಗೂ ಸಚಿವರು ಬಿಜೆಪಿ ಪರ ಒಲವು ಹೊಂದಿರುವವರನ್ನು ಗುರಿಯಾಗಿಸಿಕೊಂಡಿದ್ದು, ಬಿಜೆಪಿ ಬೆಂಬಲಿಗರನ್ನು ಉದ್ದೇಶಪೂರ್ವಕವಾಗಿಯೇ ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸಿ ಬಂಧಿಸಲಾಗುತ್ತಿದೆ ಎಂದು ಶೋಭಾ ಕರಂದ್ಲಾಜೆ ದೂರಿನಲ್ಲಿ ಆರೋಪಿಸಿದ್ದಾರೆ.
ಲಿಂಗಾಯತ ಧರ್ಮವನ್ನು ಒಡೆಯುವ ಬಗ್ಗೆ ಎಂ.ಬಿ.ಪಾಟೀಲರು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದು ಬಹಿರಂಗವಾಗಿಯೇ ಸಾಬೀತಾಗಿದೆ. ಪ್ರಕರಣದಲ್ಲಿ ಯಾವುದೇ ಪಾತ್ರವಹಿಸದಿರುವ ಪತ್ರಕರ್ತ ಹೇಮಂತ್ ಕುಮಾರ್ ಅವರನ್ನು ಉದ್ದೇಶಪೂರ್ವಕವಾಗಿ ಪೊಲೀಸರು ಬಂಧಿಸಿದ್ದು ಖಂಡನೀಯ. ಡಿಜಿಪಿ ನೀಲಮಣಿ ರಾಜು ಅವರನ್ನು ಬಿಜೆಪಿ ನಿಯೋಗ ಈ ಬಗ್ಗೆ ಪ್ರಶ್ನಿಸಿದಾಗ, ಅವರು ಸಮರ್ಪಕ ಉತ್ತರವನ್ನು ನೀಡುವಲ್ಲಿ ತಡಬಡಾಯಿಸಿದ್ದನ್ನು ನೋಡಿದರೆ, ಗೃಹ ಸಚಿವರ ಸೂಚನೆಯಂತೆ ಹೇಮಂತ್ ಕುಮಾರ್ ಅವರನ್ನು ಬಂಧಿಸಿದ್ದಾರೆ ಎನ್ನುವುದು ಸ್ಪಷ್ಟವಾಗುತ್ತದೆ.
ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದ್ದು, ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳಕರ್ ಪತಿ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳಕರ್ ಸಹ ತನಿಖೆಯಲ್ಲಿರುವುದನ್ನು ಗಮನಿಸಿದರೆ ಸರ್ಕಾರದ ಉದ್ದೇಶವೇನು ಎನ್ನುವುದು ಸ್ಪಷ್ಟವಾಗುತ್ತದೆ ಎಂದಿದ್ದಾರೆ.
ಬೀದರ್ ಕಾಂಗ್ರೆಸ್ ಶಾಸಕ ನಾರಾಯಣಸ್ವಾಮಿ ಸಾರ್ವಜನಿಕ ಸಭೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ಬಳಸಿದ ಅವಹೇಳನಕಾರಿ ಹೇಳಿಕೆ ವಿರೋಧಿಸಿ ಪೊಲೀಸರಿಗೆ ಮತ್ತು ಚುನಾವಣಾ ಆಯೋಗಕ್ಕೆ ಬಿಜೆಪಿ ವತಿಯಿಂದ ದೂರು ಸಲ್ಲಿಸಲಾಗಿತ್ತಾದರೂ ಪೊಲೀಸರು ಅವರ ವಿರುದ್ಧ ಯಾವುದೇ ಕ್ರಮ ಜರುಗಿಸದಿರುವುದು ನೋಡಿದರೆ ಗೃಹ ಇಲಾಖೆ ಮೇಲೆ ಸರ್ಕಾರದ ಪ್ರಭಾವ ಎಷ್ಟಿದೆ ಎನ್ನುವುದು ತಿಳಿಯುತ್ತದೆ.
ಗೃಹ ಇಲಾಖೆಯನ್ನು ತಮ್ಮ ರಾಜಕೀಯ ಸ್ವಾರ್ಥಕ್ಕೆ ಬಳಸಿಕೊಳ್ಳುತ್ತಿರುವ ಗೃಹ ಸಚಿವ ಎಂ.ಬಿ.ಪಾಟೀಲ್ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು. ಗೃಹ ಸಚಿವರ ಆಜ್ಞೆಯ ಮೇರೆಗೆ ಪೊಲೀಸ್ ಮಹಾನಿರ್ದೇಶಕರು ಬಿಜೆಪಿ ಕಾರ್ಯಕರ್ತರನ್ನು ಬಂಧಿಸಿರುವುದನ್ನು ನಿಲ್ಲಿಸಬೇಕೆಂದು ಆದೇಶಿಸಬೇಕು ಎಂದು ಅವರು ಶೋಭಾರ ಕರಂದ್ಲಾಜೆ ಕೇಂದ್ರಕ್ಕೆ ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


