ರಾಜಕೀಯ

ಜೆಡಿಎಸ್ ಮೈತ್ರಿಯಿಂದಲೇ ಕಾಂಗ್ರೆಸ್‌ಗೆ ಹಿನ್ನಡೆ: ಚಲುವರಾಯಸ್ವಾಮಿ

ಲೋಕಸಭಾ ಚುನಾವಣೆಯಲ್ಲಿ ‌ಮೈತ್ರಿ ಮಾಡಿಕೊಂಡ ಕಾರಣದಿಂದಲೇ ಕಾಂಗ್ರೆಸ್ ಗೆ ಹಿನ್ನಡೆ ಆಗಿದೆ, ಸ್ಥಳೀಯ ಸಂಸ್ಥೆಗಳಿಂದ ಹಿಡಿದು ಲೋಕಸಭೆವರೆಗೆ ಎರಡೂ ....

ಜೆಡಿಎಸ್ ಮೈತ್ರಿಯಿಂದಲೇ ಕಾಂಗ್ರೆಸ್‌ಗೆ ಹಿನ್ನಡೆ: ಚಲುವರಾಯಸ್ವಾಮಿ
ಚಲುವರಾಯ ಸ್ವಾಮಿ
Published On :
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ‌ಮೈತ್ರಿ ಮಾಡಿಕೊಂಡ ಕಾರಣದಿಂದಲೇ ಕಾಂಗ್ರೆಸ್ ಗೆ ಹಿನ್ನಡೆ ಆಗಿದೆ, ಸ್ಥಳೀಯ ಸಂಸ್ಥೆಗಳಿಂದ ಹಿಡಿದು ಲೋಕಸಭೆವರೆಗೆ ಎರಡೂ ಪಕ್ಷಗಳ ಕಾರ್ಯಕರ್ತರು ಮೈತ್ರಿಯನ್ನು ಈಗಲೂ ಕೂಡ ಒಪ್ಪಿಕೊಳ್ಳುವ ಮನಸ್ಥಿತಿಯಲ್ಲಿ ಇಲ್ಲ ಎಂದು ಮಂಡ್ಯದ ಮಾಜಿ ಸಂಸದ, ಕಾಂಗ್ರೆಸ್ ನಾಯಕ ಚಲುವರಾಯಸ್ವಾಮಿ ಹೇಳಿದ್ದಾರೆ. 
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಚುನಾವಣೆ ಪೂರ್ವದಲ್ಲೇ ನಾವು ಈ ಮಾತನ್ನು ಹೇಳಿದಾಗ ಯಾರೂ ನಮ್ಮ ಮಾತನ್ನು ನಂಬುತ್ತಿರಲಿಲ್ಲ, ಮೇಲಾಗಿ ಎಲ್ಲರೂ ನಮ್ಮನ್ನು ಹಾಗೂ ಸಿದ್ದರಾಮಯ್ಯ ಅವರನ್ನು ವಿಲನ್ ರೀತಿಯಲ್ಲಿ ನೋಡಿದರು ಎಂದು ಅವರು ಅಸಮಾಧಾನ ಹೊರಹಾಕಿದರು.
ರಾಜ್ಯದಲ್ಲಿ ಕಾಂಗ್ರೆಸ್ ಹಿನ್ನಡೆಗೆ ಜೆಡಿಎಸ್ ಮೈತ್ರಿಯೇ ಕಾರಣ ಎಂದು ಕಾಂಗ್ರೆಸ್ ವರಿಷ್ಠರೂ ಒಪ್ಪಿಕೊಂಡಿದ್ದಾರೆ, ಅವರಿಗೆ ತಡವಾಗಿ ನಿಜ ಸಂಗತಿ ಗೊತ್ತಾಗಿದೆ ಎಂಬುದೇ ಸಮಾಧಾನ ಎಂದರು. ರಾಜ್ಯದ ಮೈತ್ರಿ ಸರ್ಕಾರ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಒಂದು ವರ್ಷದಲ್ಲಿ ಮೈತ್ರಿ ಸರ್ಕಾರದ ಆಡಳಿತ ವೈಖರಿ ಸಮರ್ಪಕವಾಗಿಲ್ಲ. ಇದು ಕೂಡ ಚುನಾವಣೆ ಮೇಲೆ ಪ್ರಭಾವ ಬೀರಲು ಕಾರಣವಾಗಿದೆ ಎಂದರು. 
ಈಗ ವಿಧಾನಸಭೆ ವಿಸರ್ಜನೆ ಮಾಡಿ ಹೊಸದಾಗಿ ಚುನಾವಣೆಗೆ ಹೋಗಬೇಕೆಂದು ಸಲಹೆ ನೀಡುವ ಪರಿಸ್ಥಿತಿಯಲ್ಲೂ ನಾವಿಲ್ಲ. ನಾನೇನು ಶಾಸಕನೂ ಅಲ್ಲ, ಮಂತ್ರಿಯೂ ಅಲ್ಲ. ಆದರೆ ಮೈತ್ರಿ ಸರ್ಕಾರದ ಕಾರ್ಯವೈಖರಿ ಬದಲಾಗಬೇಕು. ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆಯೂ ಇದಕ್ಕೆ ಪರಿಹಾರವಲ್ಲ. ಏನು ಮಾಡಬೇಕು ಎಂದು ಪಕ್ಷದ ವರಿಷ್ಠರು ಈಗ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಬೇಕು, ಈ ಪರಿಸ್ಥಿತಿ ನಿರ್ಮಾಣವಾಗಿದ್ದಕ್ಕೆ ಕುಮಾರಸ್ವಾಮಿಯವರನ್ನಾಗಲಿ, ದೇವೇಗೌಡರನ್ನಾಗಲೀ ದೂಷಿಸುವುದಿಲ್ಲ ಎಂದು ಹೇಳಿದರು. 
ಸುಮಲತಾ ಸ್ವತಂತ್ರ ಅಭ್ಯರ್ಥಿಯಾಗಿ ಗೆದ್ದಿದ್ದಾರೆ. ಕ್ಷೇತ್ರದ ಜನರ ಅಭಿಪ್ರಾಯ ಕೇಳಿ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದಾರೆ. ಅವರು ಇನ್ನೂ ಸಂಸದರಾಗಿ ಪ್ರಮಾಣವಚನ ಸ್ವೀಕರಿಸಬೇಕು. ಸಂಸತ್ ಕಲಾಪದಲ್ಲಿ ಭಾಗವಹಿಸಬೇಕು. ಹಾಗಾಗಿ ಅವರಿಗೂ ಒಂದು ಸ್ವಲ್ಪ ಕಾಲಾವಕಾಶ ಕೊಡಬೇಕಾಗಿದೆ. ಸುಮಲತಾ ಅವರು ಯಾವುದೇ ಆತುರದ ತೀರ್ಮಾನ ಕೈಗೊಳ್ಳುವುದಿಲ್ಲ ಎಂಬ ವಿಶ್ವಾಸವಿದೆ ಎಂದರು.
ಜೆಡಿಎಸ್ ರಾಜ್ಯಾದ್ಯಕ್ಷ ಎಚ್ ವಿಶ್ವನಾಥ್ ಅವರನ್ನು ಅರ್ಥ ಮಾಡಿಕೊಳ್ಳಲು ಆಗುತ್ತಿಲ್ಲ. ಒಂದೊಂದು ಸಲ‌ ಒಂದೊಂದು ರೀತಿ ಮಾತನಾಡುತ್ತಿದ್ದಾರೆ. ಇದುವರೆಗೆ ಸಿದ್ದರಾಮಯ್ಯ ವಿರುದ್ಧ ಹರಿಹಾಯುತ್ತಿದ್ದರು. ಈಗ ಅವರದ್ದೇ ಪಕ್ಷದ ನಾಯಕರ ವಿರುದ್ಧ ಮಾತನಾಡುತ್ತಿದ್ದಾರೆ ಎಂದು ಚೆಲುವರಾಯಸ್ವಾಮಿ ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.