ಬೆಂಗಳೂರು ಉತ್ತರದಲ್ಲಿ ಜೆಡಿಎಸ್ ಸ್ಪರ್ಧೆಗೆ ಅಸಮಾಧಾನ: ಕಾಂಗ್ರೆಸ್ ಶಾಸಕರಿಂದ ಸಿದ್ದರಾಮಯ್ಯ ಭೇಟಿ
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್‍ಗೆ ಬಿಟ್ಟುಕೊಟ್ಟಿದ್ದು, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಕ್ಷೇತ್ರದಿಂದ ಸ್ಪರ್ಧಿಸಲು....

Published On :
ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್‍ಗೆ ಬಿಟ್ಟುಕೊಟ್ಟಿದ್ದು, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಕ್ಷೇತ್ರದಿಂದ ಸ್ಪರ್ಧಿಸಲು ಮುಂದಾಗಿರುವ ಬಗ್ಗೆ ಕ್ಷೇತ್ರದ ಕಾಂಗ್ರೆಸ್ ಶಾಸಕರು ಅಸಮಾಧಾನಗೊಂಡಿದ್ದಾರೆ.
ಈ ಹಿನ್ನೆಲೆಯಲ್ಲಿ ಇಂದು ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರನ್ನು ಶಾಸಕರಾದ ಎಸ್.ಟಿ.ಸೋಮಶೇಖರ್, ಬೈರತಿ ಬಸವರಾಜ್, ಅಖಂಡ ಶ್ರೀನಿವಾಸಮೂರ್ತಿ, ಬೈರತಿ ಸುರೇಶ್ ಭೇಟಿ ಮಾಡಿದರು.
ಕಾವೇರಿ ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಶಾಸಕರು ತಮ್ಮ ಬೇಡಿಕೆಗಳನ್ನು ಅವರ ಮುಂದಿಟ್ಟರು. ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಸರ್ಕಾರದಿಂದಾಗಿ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳು ನಡೆದಿಲ್ಲ. ಕ್ಷೇತ್ರಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಬೇಕು. ಇಲ್ಲಿಯವರೆಗೂ ಕ್ಷೇತ್ರದಲ್ಲಿ ವಿರೋಧ ಪಕ್ಷವಾಗಿದ್ದ ಜೆಡಿಎಸ್ ವಿರುದ್ಧ ಸೆಣಸಾಡಿಕೊಂಡು ಬಂದಿದ್ದು, ಈಗ ಚುನಾವಣೆಗೆ ಜೆಡಿಎಸ್ ಪರ ಕೆಲಸ ಮಾಡಲು ಮುಜುಗರವಾಗುತ್ತದೆ. ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಿದರೆ ಮತದಾರರ ಮುಂದೆ ಮತ ಯಾಚಿಸಬಹುದು. ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ದೇವೇಗೌಡ ಹಾಗೂ ಕುಮಾರಸ್ವಾಮಿ ಅವರು ತಮ್ಮೊಂದಿಗೆ ಮಾತುಕತೆ ನಡೆಸಲೇಬೇಕು. ಹೀಗಾಗಿ ಸಮಸ್ಯೆಗಳನ್ನು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಜೆಡಿಎಸ್ ವರಿಷ್ಠ ದೇವೇಗೌಡ ಅವರ ಮುಂದೆ ಪ್ರಸ್ತಾಪಿಸುವ ಮೂಲಕ ಭೇಟಿಗೆ ಸಮಯ ನಿಗದಿಪಡಿಸುವಂತೆ ಸಿದ್ದರಾಮಯ್ಯ ಅವರಲ್ಲಿ ಕಾಂಗ್ರೆಸ್ ಶಾಸಕರು ಮನವಿ ಮಾಡಿದರು. ಒಂದು ವೇಳೆ ಸಮಸ್ಯೆ ಬಗೆಹರಿಸದಿದ್ದರೆ ಮುಂದಿನ ನಿರ್ಧಾರವನ್ನು ನಾವೇ ತೆಗೆದುಕೊಳ್ಳುತ್ತೇವೆ ಎಂದರು.
ಶಾಸಕರ ಸಮಸ್ಯೆಗಳಿಗೆ ಸ್ಪಂದಿಸಿದ ಸಿದ್ದರಾಮಯ್ಯ ಇನ್ನೆರೆಡು ದಿನಗಳಲ್ಲಿ ಕುಮಾರಸ್ವಾಮಿ ಅವರ ಜೊತೆ ಚರ್ಚಿಸಲು ಸಭೆ ಏರ್ಪಾಡು ಮಾಡುವುದಾಗಿ ಭರವಸೆ ನೀಡಿದ್ದಾರೆ ಎನ್ನಲಾಗಿದೆ.
ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು, ಕ್ಷೇತ್ರದಲ್ಲಿ ಕಾಂಗ್ರೆಸ್-ಜೆಡಿಎಸ್ ಇನ್ನೂ ಒಂದಾಗಿಲ್ಲ. ಚುನಾವಣೆಗೆ ಜೆಡಿಎಸ್ ಪರ ಮತಯಾಚಿಸುವ ಬಗ್ಗೆ ಕಾರ್ಯಕರ್ತರು ಅಸಮಾಧಾನಗೊಂಡಿದ್ದಾರೆ. ಜೆಡಿಎಸ್ ಅಭ್ಯರ್ಥಿ ಬಗ್ಗೆ ತಮಗೆ ವಿರೋಧವಿಲ್ಲವಾದರೂ ಆ ಪಕ್ಷದ ಪರ ಮತ ಕೇಳಲು ತೊಂದರೆಯಾಗುತ್ತಿದೆ. ಕ್ಷೇತ್ರದಲ್ಲಿರುವ ಸಮಸ್ಯೆಗಳ ಬಗ್ಗೆ ಸಿದ್ದರಾಮಯ್ಯ ಅವರ ಗಮನಕ್ಕೆ ತರಲಾಗಿದೆ. ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರನ್ನೂ ಸಹ ಭೇಟಿ ಮಾಡುವುದಾಗಿ ತಿಳಿಸಿದರು.
ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ದೇವೇಗೌಡರು ಸಭೆ ಕರೆದು ತಮ್ಮೊಂದಿಗೆ ಚರ್ಚಿಸಬೇಕು. ಜೆಡಿಎಸ್ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಪಕ್ಷದ ಹೈಕಮಾಂಡ್ ಸೂಚನೆ ನೀಡಿದೆ. ವರಿಷ್ಠರು ಹೇಳಿದಂತೆ ನೂರಕ್ಕೆ ನೂರು ಕೆಲಸ ಮಾಡುತ್ತೇವಾದರೂ ಅದಕ್ಕೂ ಮೊದಲು ತಮ್ಮ ಸಮಸ್ಯೆಗಳು ಬಗೆಹರಿಯಬೇಕು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


