ರಾಜಕೀಯ

ಮೈತ್ರಿ ಸರ್ಕಾರದ ವಿರುದ್ಧ ಮೇ 6 ರಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ದ್ವೇಷ ರಾಜಕಾರಣ ಮಾಡುತ್ತಿರುವ ಗೃಹ ಸಚಿವ ಎಂ ಬಿ ಪಾಟೀಲ್ ಹಾಗೂ ಪ್ರತಿಪಕ್ಷಗಳನ್ನು ಹತ್ತಿಕ್ಕುವ ಮೈತ್ರಿ ಸರ್ಕಾರದ ಧೋರಣೆ ವಿರುದ್ಧ ಮೇ 6ರಂದು...

ಮೈತ್ರಿ ಸರ್ಕಾರದ ವಿರುದ್ಧ ಮೇ 6 ರಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ
ಸಾಂದರ್ಭಿಕ ಚಿತ್ರ
Published On :
ಬೆಂಗಳೂರು: ದ್ವೇಷ ರಾಜಕಾರಣ ಮಾಡುತ್ತಿರುವ ಗೃಹ ಸಚಿವ ಎಂ ಬಿ ಪಾಟೀಲ್ ಹಾಗೂ ಪ್ರತಿಪಕ್ಷಗಳನ್ನು ಹತ್ತಿಕ್ಕುವ ಮೈತ್ರಿ ಸರ್ಕಾರದ ಧೋರಣೆ ವಿರುದ್ಧ ಮೇ 6ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಬಿಜೆಪಿ ಶನಿವಾರ ತಿಳಿಸಿದೆ.
ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಈ ಕುರಿತು ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದು, ರಾಜ್ಯದ ಕಾಂಗ್ರೆಸ್ - ಜೆಡಿಎಸ್ ಸಮ್ಮಿಶ್ರ ಸರ್ಕಾರ ಜನರ ಹಿತಕ್ಕಾಗಿ ಆಡಳಿತ ನಡೆಸುವ ನಿರೀಕ್ಷೆ ಹುಸಿಯಾಗಿದೆ. ದೋಸ್ತಿ ಪಕ್ಷಗಳ ನಡುವಿನ ಆಂತರಿಕ ಕಚ್ಚಾಟ ಮಿತಿ ಮೀರಿದೆ. ರಾಜ್ಯ ಸರ್ಕಾರದಲ್ಲಿ ಮಂತ್ರಿಗಳು ಅಧಿಕಾರ ದುರುಪಯೋಗ ಪಡಿಸಿಕೊಂಡು ವಿರೋಧ ಪಕ್ಷಗಳನ್ನು ಹತ್ತಿಕ್ಕುವ ದ್ವೇಷ ರಾಜಕಾರಣದಲ್ಲಿ ನಿರತರಾಗಿದ್ದಾರೆ ಎಂದು ಆರೋಪಿಸಿದ್ದಾರೆ. 
ಸಮ್ಮಿಶ್ರ ಸರ್ಕಾರದಲ್ಲಿ ದ್ವೇಷದ ರಾಜಕಾರಣ ಮಿತಿ ಮೀರಿದ್ದು, ರಾಜಕೀಯ ವಿರೋಧಿಗಳು ಮತ್ತು ಮಾಧ್ಯಮದ ವಿರುದ್ಧವೂ ಸರ್ಕಾರ ಪ್ರತೀಕಾರದ ಕ್ರಮಕ್ಕೆ ಮುಂದಾಗಿರುವುದು ಸ್ಪಷ್ಟವಾಗಿದೆ. ಪ್ರಧಾನ ಮಂತ್ರಿಯವರನ್ನು ಹತ್ಯೆ ಮಾಡುವಂತೆ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿಕೆ ನೀಡಿದ್ದರು. ಅದೇ ರೀತಿ ಜೆಡಿಎಸ್ ಶಾಸಕರಾದ ನಾರಾಯಣಗೌಡ ಅವರು ನಟರಾದ ದರ್ಶನ್, ಯಶ್ ಹಾಗೂ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದರೂ ಯಾವುದೇ ಕ್ರಮ ಜರುಗಿಸಲಿಲ್ಲ ಎಂದು ಆಪಾದಿಸಿದ್ದಾರೆ. 
ಆದರೆ ಬಿಜೆಪಿ ಕಾರ್ಯಕರ್ತರು ಮತ್ತು ಬಿಜೆಪಿ ಹಿತೈಷಿಗಳ ವಿರುದ್ಧ ದೂರು ದಾಖಲಿಸಿ ಬೆದರಿಸಲು ಪೊಲೀಸರನ್ನು ದುರ್ಬಳಕೆ ಮಾಡಲಾಗುತ್ತಿದೆ. ಐಪಿಸಿ 307ರ ಅಡಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ಪ್ರಕರಣಗಳು ದಾಖಲಾಗಿದ್ದರೂ ಕೇವಲ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಲಾಗುತ್ತಿದೆ. ಪ್ರಧಾನಿಗಳ ಹತ್ಯೆ ಮಾಡುವಂತೆ ಪ್ರಚೋದನಾತ್ಮಕ ಹೇಳಿಕೆ ನೀಡಿದವರನ್ನು ಬಂಧಿಸದ ಸರ್ಕಾರ, ಕೇವಲ ಸರ್ಕಾರದ ವಿರುದ್ಧದ ಮಾಹಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಕಾರಣಕ್ಕೆ ಬಿಜೆಪಿ ಬಗ್ಗೆ ಅಭಿಮಾನ ಹೊಂದಿರುವ ಪತ್ರಕರ್ತರಿಗೂ ಕಿರುಕುಳ ನೀಡಿ ಬಂಧಿಸಿದೆ. ಸಮ್ಮಿಶ್ರ ಸರ್ಕಾರದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಕವಡೆ ಕಾಸಿನ ಬೆಲೆಯೂ ಉಳಿದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. 
ಸ್ವತಃ ಧರ್ಮ ವಿಭಜನೆಗೆ ಯತ್ನಿಸಿದ ಸಚಿವ ಎಂ.ಬಿ. ಪಾಟೀಲ್ ದ್ವೇಷ ರಾಜಕಾರಣದ ಮುಂಚೂಣಿಯಲ್ಲಿ ನಿಂತಿರುವುದು ಖಂಡನೀಯ. ವಿರೋಧ ಪಕ್ಷಗಳನ್ನು ಹತ್ತಿಕ್ಕಿ, ಮಾಧ್ಯಮಗಳನ್ನು ಬೆದರಿಸಿ ಬಾಯಿ ಮುಚ್ಚಿಸಲು ಹೊರಟಿರುವ ಮೈತ್ರಿ ಸರ್ಕಾರದ ವಿರುದ್ಧ, ರಾಜ್ಯದ ಗೃಹ ಸಚಿವರ ದ್ವೇಷದ ರಾಜಕಾರಣ ಖಂಡಿಸಿ ಮೇ ೬ರ ಸೋಮವಾರ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.