ರಾಜಕೀಯ

ಅನರ್ಹ ಶಾಸಕರ ಕ್ಷೇತ್ರ ಗೆಲ್ಲಲು ಕಾಂಗ್ರೆಸ್ ರಣತಂತ್ರ, 6 ಕ್ಷೇತ್ರಗಳ ಪ್ರಮುಖ ಮುಖಂಡರ ಸರಣಿ ಸಭೆ

ಅನರ್ಹ ಶಾಸಕರ 17 ಕ್ಷೇತ್ರಗಳ ಮುಖಂಡರ ಜೊತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿಂದು ಸಭೆ ನಡೆಸಿದ್ದಾರೆ.

ಅನರ್ಹ ಶಾಸಕರ ಕ್ಷೇತ್ರ ಗೆಲ್ಲಲು ಕಾಂಗ್ರೆಸ್ ರಣತಂತ್ರ, 6 ಕ್ಷೇತ್ರಗಳ ಪ್ರಮುಖ ಮುಖಂಡರ ಸರಣಿ ಸಭೆ
ಅನರ್ಹ ಶಾಸಕರ ಕ್ಷೇತ್ರ ಗೆಲ್ಲಲು ಕಾಂಗ್ರೆಸ್ ರಣತಂತ್ರ, 6 ಕ್ಷೇತ್ರಗಳ ಪ್ರಮುಖ ಮುಖಂಡರ ಸರಣಿ ಸಭೆ
Published On :

ಬೆಂಗಳೂರು: ಅನರ್ಹ ಶಾಸಕರ 17 ಕ್ಷೇತ್ರಗಳ ಮುಖಂಡರ ಜೊತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿಂದು ಸಭೆ ನಡೆಸಿದ್ದಾರೆ. 

ಚಿಕ್ಕಬಳ್ಳಾಪುರ, ಹಿರೇಕೆರೂರು, ರಾಣೆಬೆನ್ನೂರು, ಹುಣಸೂರು, ಮಸ್ಕಿ, ಕೆ.ಆರ್ ಪೇಟೆ ಕ್ಷೇತ್ರಗಳ ಮುಖಂಡರ ಸಭೆ ಇಂದು ಬೆಳಗ್ಗೆ ನಡೆಸಲಾಯಿತು. 

ಮಧ್ಯಾಹ್ನದ ಬಳಿಕ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಸಭೆ ನಡೆಸಲಾಗಿದೆ. ಆಯಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜಿಲ್ಲಾಧ್ಯಕ್ಷರು, ಬ್ಲಾಕ್ ಅಧ್ಯಕ್ಷರು, ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ದರು. ಉಪ ಚುನಾವಣೆ ಎದುರಾಗುವ ಹಿನ್ನೆಲೆಯಲ್ಲಿ ಪರ್ಯಾಯ ಅಭ್ಯರ್ಥಿಗಳ ಆಯ್ಕೆ ಕುರಿತು ಸಭೆಯಲ್ಲಿ ಚರ್ಚೆ ನಡೆಸಿದ್ದಾರೆ. ಶುಕ್ರವಾರವಷ್ಟೇ ಅನರ್ಹ ಶಾಸಕ ಡಾ.ಸುಧಾಕರ್ ಅತಿಥಿ ಗೃಹದಲ್ಲಿ ಎಲ್ಲಾ ಅನರ್ಹ ಶಾಸಕರು ಸಭೆ ಸೇರಿ ಚರ್ಚಿಸಿದ್ದರು. ಇಂದು ಕಾಂಗ್ರೆಸ್ ಪಕ್ಷ ಸಹ ಕ್ಷೇತ್ರವಾರು ಸಭೆ ನಡೆಸಿದೆ. ಶೀಘ್ರದಲ್ಲಿಯೇ 17 ಕ್ಷೇತ್ರಗಳಲ್ಲಿ ಉಪ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಈ ಕ್ಷೇತ್ರಗಳನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳಲು ಸಿದ್ಧತೆ ಆರಂಭಿಸಿದ್ದು, ಕಾಂಗ್ರೆಸ್ ನಾಯಕರು ಇಂದು ಆರು ಕ್ಷೇತ್ರಗಳ ಮುಖಂಡರ ಸಭೆ ನಡೆಸಿದರು. ಚಿಕ್ಕಬಳ್ಳಾಪುರ ಕ್ಷೇತ್ರ : ಚಿಕ್ಕಬಳ್ಳಾಪುರ ವಿಧಾನಸಭೆ ಕ್ಷೇತ್ರದಿಂದ ಎರಡನೇ ಬಾರಿ ಆಯ್ಕೆಯಾಗಿರುವ ಡಾ ಕೆ ಸುಧಾಕರ್ ವಿರುದ್ಧ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಸಂಬಂಧ ಸಭೆಯಲ್ಲಿ ಚರ್ಚೆ ನಡೆದಿದ್ದು, ಸಭೆಯಲ್ಲಿ ಜಿಲ್ಲಾಧ್ಯಕ್ಷ ಕೇಶವರೆಡ್ಡಿ, ಮಾಜಿ ಶಾಸಕ ಸಂಪಂಗಿ ಮತ್ತಿತರರು ಪಾಲ್ಗೊಂಡಿದ್ದಾರೆ. 

ಸಭೆಯಲ್ಲಿ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಸಂಸದ ವೀರಪ್ಪ ಮೊಯಿಲಿ ಅವರ ಶಿಷ್ಯ ಆಂಜಿನಪ್ಪ ಅವರನ್ನು ಜೆಡಿಎಸ್ ನಿಂದ ಕಾಂಗ್ರೆಸ್ ಪಕ್ಷಕ್ಕೆ ಮರಳಿ ಕರೆತಂದು ಅಭ್ಯರ್ಥಿ ಮಾಡುವ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ. ಶಿಡ್ಲಘಟ್ಟ ಶಾಸಕ ವಿ. ಮುನಿಯಪ್ಪ ಹಾಗೂ ಮಾಜಿ ಸಚಿವ ಶಿವಶಂಕರ್ ರೆಡ್ಡಿ ಸಭೆಯಲ್ಲಿ ಉಪಸ್ಥಿತರಿದ್ದು ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ ಸಭೆಗೆ ಗೈರು ಹಾಜರಾಗಿದ್ದರು. ಸಭೆಗೆ ಆಗಮಿಸಲು ಸಾಧ್ಯವಿಲ್ಲ ಎಂದು ಅವರು ಮುಂಚಿತವಾಗಿಯೇ ತಿಳಿಸಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.