ಶಾಸಕ ಜಮೀರ್ ಅಹ್ಮದ್ ಮನೆ ಮೇಲೆ ಇಡಿ ದಾಳಿ: ಬಿಜೆಪಿ, ಕಾಂಗ್ರೆಸ್ ನಡುವೆ ವಾಕ್ಸಮರ
ಶಾಸಕ ಜಮೀರ್ ಅಹ್ಮದ್ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ವಾಕ್ಸಮರ ಶುರುವಾಗಿದೆ.

ಬೆಂಗಳೂರು: ಶಾಸಕ ಜಮೀರ್ ಅಹ್ಮದ್ ಖಾನ್ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ವಾಕ್ಸಮರ ಶುರುವಾಗಿದೆ.
ಇಡಿ ದಾಳಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಮರ್ಥಿಸಿಕೊಂಡಿದ್ದರು. ನಿನ್ನೆಯಷ್ಟೇ ಪ್ರತಿಕ್ರಿಯೆ ನೀಡಿದ್ದ ಅವರು, ನಾನು ಇಡಿ ಅಥವಾ ಐಟಿ ಅಧಿಕಾರಿಯಲ್ಲ ಈ ಬಗ್ಗೆ ಉತ್ತರ ನೀಡಲು. ಐಟಿ ಹಾಗೂ ಇಡಿ ಬಗ್ಗೆ ಕಾಂಗ್ರೆಸ್ ನಾಯಕರು ತಜ್ಞರಾಗಿಬಿಟ್ಟಿದ್ದಾರೆ. ಅವರಿಗೆ ಈ ಬಗ್ಗೆ ಎಲ್ಲಾ ರೀತಿಯ ಅನುಭವಗಳಿವೆ. ಎಲ್ಲರ ಮನೆಯ ಮೇಲೂ ದಾಳಿ ಮಾಡಲು ಸಾಧ್ಯವೇ? ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಎಲ್ಲರ ಮನೆ ಮೇಲೂ ದಾಳಿಗಳು ನಡೆಯುತ್ತವೆ ಎಂದು ಹೇಳಿದ್ದರು.
ಇದೇ ವೇಳೆ ವಿರೋಧ ಪಕ್ಷಗಳ ನಾಯಕರ ಮೇಲೆ ಕೇಂದ್ರ ಸರ್ಕಾರ ಕೇಂದ್ರೀಯ ಸಂಸ್ಥೆಗಳನ್ನು ಬಳಸಿಕೊಂಡು ದಾಳಿ ನಡೆಸುತ್ತದೆ ಎಂಬ ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಇಡಿ ಹಾಗೂ ಐಟಿ ದಾಳಿ ರಾಜಕೀಯ ಪ್ರೇರಿತ ಎಂಬುದು ತಮ್ಮ ತಪ್ಪುಗಳನ್ನು ಮರೆಮಾಚಿಕೊಳ್ಳಲು ಕಾಂಗ್ರೆಸ್ ಬಳಸುವ ಮಂತ್ರವಾಗಿ ಬಿಟ್ಟಿದೆ ಎಂದು ತಿಳಿಸಿದ್ದಾರೆ.
ಜಮೀರ್ ಅಹ್ಮದ್ ಮನೆ ಮೇಲಿನ ಇಡಿ ದಾಳಿ ಕುರಿತಂತೆ ನಿನ್ನೆಯಷ್ಟೇ ಪ್ರತಿಕ್ರಿಯೆ ನೀಡಿದ್ದ, ಕೆಪಿಸಿಸಿ ಅಧ್ಯಕ್ಷ, ಡಿಕೆ.ಶಿವಕುಮಾರ್, ಸಿದ್ದರಾಮಯ್ಯ ಹಾಗೂ ಇನ್ನಿತರೆ ಕಾಂಗ್ರೆಸ್ ನಾಯಕರು, ದಾಳಿಯೊಂದು ರಾಜಕೀಯ ಪ್ರೇರಿತ ಎಂದು ಆರೋಪಿಸಿದ್ದರು.
ಕಾನೂನು ಪ್ರಕಾರ ಅದನ್ನು ಎದುರಿಸಲು ಜಮೀರ್ ಅವರು ಸಮರ್ಥರಿದ್ದಾರೆ. ಎರಡು ವರ್ಷಗಳ ಹಿಂದೆ ಇ.ಡಿ. ಅಧಿಕಾರಿಗಳು ಜಮೀರ್ ಅವರಿಗೆ ನೋಟೀಸ್ ಜಾರಿ ಮಾಡಿ, ಅವರನ್ನು ಕರೆಸಿ ವಿಚಾರಣೆ ಮಾಡಿದ್ದಾರೆ. ಅವರ ಪ್ರಶ್ನೆಗಳಿಗೆ ಉತ್ತರ ನೀಡಿರುವುದಾಗಿ ಜಮೀರ್ ಅವರೇ ನನಗೆ ತಿಳಿಸಿದ್ದರು. ಈಗಿನ ಸಂದರ್ಭದಲ್ಲಿ ದಾಳಿ ಅಗತ್ಯ ಇರಲಿಲ್ಲ ಎಂದು ಡಿಕೆ.ಶಿವಕುಮಾರ್ ಅವರು ಹೇಳಿದ್ದಾರೆ.
ಜಮೀರ್ ಹೇಳಿಕೆಗಳು ಮುಗಿದಿರುವಾಗ ಅವರ ನಿವಾಸ ಹಾಗೂ ಆಪ್ತರ ಮನೆಗಳ ಮೇಲೆ ದಾಳಿ ಮಾಡಿ, ಕಿರುಕುಳ ನೀಡುತ್ತಿರುವುದು ಖಂಡನೀಯ. ಆದಾಯ ತೆರಿಗೆ, ಜಾರಿ ನಿರ್ದೇಶನಾಲಯ, ಎಸಿಬಿ ನಿಜಕ್ಕೂ ಕಾರ್ಯಪ್ರವೃತ್ತವಾಗಿದ್ದರೆ, ಮಾಜಿ ಸಚಿವ ಶ್ರೀನಿವಾಸಗೌಡರು ವಿಧಾನಸಭೆಯಲ್ಲಿ ಆಪರೇಷನ್ ಕಮಲದ ವಿಚಾರವಾಗಿ ಸಿ.ಪಿ. ಯೋಗೇಶ್ವರ್ ಹಾಗೂ ಅಶ್ವಥ್ ನಾರಾಯಣ ಅವರು 30 ಕೋಟಿ ಹಣದ ಆಮಿಷ ನೀಡಿ, 5 ಕೋಟಿ ಹಣವನ್ನು ನನ್ನ ಮನೆಯಲ್ಲಿ ಇಟ್ಟು ಹೋಗಿದ್ದರು ಎಂದು ಆರೋಪ ಮಾಡಿದಾಗ ಈ ಇಲಾಖೆಗಳು ಎಲ್ಲಿ ಹೋಗಿದ್ದವು?. ಸಿ.ಪಿ. ಯೋಗೇಶ್ವರ್ ಮನೆ ಮಾರಿ 9 ಕೋಟಿ ಹಣ ಖರ್ಚು ಮಾಡಿ ಸರ್ಕಾರ ರಚನೆ ಮಾಡಿದ್ದಾರೆ ಎಂದು ರಮೇಶ್ ಜಾರಕಿಹೊಳಿ ಅವರು ಹೇಳಿದಾಗ ಈ ಇಲಾಖೆಗಳು ಏನಾಗಿದ್ದವು? ಎಂದು ಪ್ರಶ್ನಿಸಿದ್ದಾರೆ.
ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರು ಮಾತನಾಡಿ, ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಅವರ ಮನೆಯ ಮೇಲಿನ ಇಡಿ ದಾಳಿ ರಾಜಕೀಯ ಪ್ರೇರಿತ. ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ತನ್ನ ಅಧಿಕಾರ ದುರುಪಯೋಗಪಡಿಸಿಕೊಂಡು ಪ್ರತಿಪಕ್ಷಗಳನ್ನು ಹೆದರಿಸುವ ಕೆಲಸ ಮಾಡುತ್ತಿದೆ. ಐಟಿ, ಇಡಿ ಬಳಸಿಕೊಂಡು ಕಿರುಕುಳ ನೀಡುವ ಬಿಜೆಪಿಯ ವರ್ತನೆ ಖಂಡನೀಯ ಎಂದು ಹೇಳಿದ್ದಾರೆ.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸದಸ್ಯ ಡಿ. ಕೆ. ಸುರೇಶ್ ಅವರು ಮಾತನಾಡಿ, ಐಎಂಎ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕರಾದ ಜಮೀರ್ ಅಹ್ಮದ್ ಅವರು ಬಹಳ ಹಿಂದೆಯೇ ಇ.ಡಿ. ಅಧಿಕಾರಿಗಳ ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ. ಆದರೆ ಎರಡು ವರ್ಷಗಳ ನಂತರ ದಿಲ್ಲಿ ಕಚೇರಿ ಇಡಿ ಅಧಿಕಾರಿಗಳು ಮತ್ತೆ ದಾಳಿ ನಡೆಸಿರುವುದು ಆಶ್ಚರ್ಯ ಮೂಡಿಸಿದೆ. ಇದೊಂದು ರಾಜಕೀಯ ಪ್ರೇರಿತ ಎಂಬುದು ಸ್ಪಷ್ಟವಾಗಿ ಕಾಣುತ್ತಿದೆ. ಕಾರಣ, ಬೆಂಗಳೂರಿನಲ್ಲೇ ಇಡಿ ಕಚೇರಿ ಇದೆ. ರಾಜಕೀಯ ಪ್ರೇರಿತ ಹಾಗೂ ರಾಜಕೀಯ ಹಿತಾಸಕ್ತಿ ಪ್ರೇರಿತ ಪ್ರಕರಣವನ್ನು ದಿಲ್ಲಿಗೆ ವರ್ಗಾವಣೆ ಮಾಡಿಕೊಂಡು, ಸಂಬಂಧಪಟ್ಟವರಿಗೆ ರಾಜಕೀಯ ತೊಂದರೆ ನೀಡುವ ಪರಿಪಾಠವನ್ನು ಕೇಂದ್ರ ಸರ್ಕಾರ ಪಾಲಿಸುತ್ತಾ ಬಂದಿದೆ. ಇದನ್ನು ನಾವು ಬಹಳ ಹತ್ತಿರದಿಂದ ಗಮನಿಸುತ್ತಿದ್ದೇವೆ. ಇದು ದ್ವೇಷದ ರಾಜಕಾರಣ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


