ಪ್ರತಿವರ್ಷ 2 ಕೋಟಿ ನಿರುದ್ಯೋಗಿಗಳ ಸೃಷ್ಟಿಸುವ ಗುಪ್ತಾ ಅಜೆಂಡಾ ಇದೆಯೇ? ರೈತರ ಬಲಿಗೊಟ್ಟಾಯಿತು, ಈಗ ಸೈನಿಕರ ಸರದಿಯೇ?
ಉದ್ಯೋಗಾವಕಾಶದ ಬಾಗಿಲುಗಳನ್ನು ಒಂದೊಂದಾಗಿ ಮುಚ್ಚುತ್ತಾ ಇರುವ ನಿಮಗೆ ಪ್ರತಿವರ್ಷ ಎರಡು ಕೋಟಿ ನಿರುದ್ಯೋಗಿಗಳನ್ನು ಸೃಷ್ಟಿಸುವ ಗುಪ್ತಾ ಅಜೆಂಡಾ ಏನಾದರೂ ಇದೆಯೇ? ರೈತರನ್ನು ಬಲಿಗೊಟ್ಟಾಯಿತು, ಈಗ ಸೈನಿಕರ ಸರದಿಯೇ?

ಬೆಂಗಳೂರು: ದೇಶದ ಯುವಜನರನ್ನು ನಿರುದ್ಯೋಗದ ಕೂಪಕ್ಕೆ ತಳ್ಳುವ ಮತ್ತು ದೇಶದ ಭದ್ರತೆಗೆ ಅಪಾಯಕಾರಿಯಾಗಬಲ್ಲ ಅಗ್ನಿಪಥ್ ಎಂಬ ಯೋಜನೆಯನ್ನು ಕೇಂದ್ರದ ಬಿಜೆಪಿ ಸರ್ಕಾರ ತಕ್ಷಣ ರದ್ದುಪಡಿಸಿ ಈಗಿನ ಸೇನಾ ನೇಮಕಾತಿ ಯೋಜನೆಯಡಿಯಲ್ಲಿಯೇ ಸೈನಿಕರ ನೇಮಕಾತಿ ನಡೆಯಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ವರ್ಷಕ್ಕೆ ಎರಡು ಕೋಟಿ ಉದ್ಯೋಗದ ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ, ಅವರೇ, ಉದ್ಯೋಗಾವಕಾಶದ ಬಾಗಿಲುಗಳನ್ನು ಒಂದೊಂದಾಗಿ ಮುಚ್ಚುತ್ತಾ ಇರುವ ನಿಮಗೆ ಪ್ರತಿವರ್ಷ ಎರಡು ಕೋಟಿ ನಿರುದ್ಯೋಗಿಗಳನ್ನು ಸೃಷ್ಟಿಸುವ ಗುಪ್ತಾ ಅಜೆಂಡಾ ಏನಾದರೂ ಇದೆಯೇ? ರೈತರನ್ನು ಬಲಿಗೊಟ್ಟಾಯಿತು, ಈಗ ಸೈನಿಕರ ಸರದಿಯೇ? ಎಂದು ಪ್ರಶ್ನಿಸಿದ್ದಾರೆ.
ಉದ್ಯೋಗದ ಅಭದ್ರತೆ, ಭವಿಷ್ಯದ ಬಗೆಗಿನ ಭಯ ಮತ್ತು ವೃತ್ತಿ ಬಗೆಗಿನ ಅತೃಪ್ತಿಯನ್ನು ಹುಟ್ಟುಹಾಕಲಿರುವ ಅಗ್ನಿಪಥ್ ಯೋಜನೆಯಡಿ ನೇಮಕಗೊಂಡ ಸೈನಿಕರು ತಮ್ಮ ವೃತ್ತಿಯಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಲು ಸಾಧ್ಯವೇ? ಶತ್ರುಗಳ ಜೊತೆ ಕಾದಾಡಲಿರುವ ಸೈನಿಕರ ಈ ಮನಸ್ಥಿತಿ ಅಪಾಯಕಾರಿಯಲ್ಲವೇ?
ದೇಶಕ್ಕಾಗಿ ಪ್ರಾಣತ್ಯಾಗ ಮಾಡಲು ಸಿದ್ಧರಾಗುವ ಸೈನಿಕರಿಗೆ ಉದ್ಯೋಗದ ಭದ್ರತೆ, ನ್ಯಾಯಬದ್ಧ ಸಂಬಳ, ಪಿಂಚಣಿ ಮತ್ತಿತರ ಸೌಲಭ್ಯಗಳನ್ನು ಒದಗಿಸಲಾಗದಷ್ಟು ಕೇಂದ್ರದ ಬಿಜೆಪಿ ಸರ್ಕಾರ ದಿವಾಳಿಯಾಗಿದೆಯೇ? ನಿಮ್ಮ ದಿವಾಳಿತನ ಮುಚ್ಚಿಡಲು ದೇಶದ ಭದ್ರತೆಯ ಜೊತೆ ಚೆಲ್ಲಾಟವಾಡಲು ಹೋಗಬೇಡಿ, ಹೊಸಸೇನಾ ನೇಮಕಾತಿ ಅಗ್ನಿಪಥ್ ಕೇವಲ ಸೇನಾ ನೇಮಕಾತಿಗಷ್ಟೇ ಸೀಮಿತವಾಗಲಾರದು. ಸೈನಿಕರ ಅನ್ನ ಕಸಿಯಲು ಹೊರಟಿರುವ ಈ ದೇಶದ್ರೋಹಿ, ಜನವಿರೋಧಿ ಬಿಜೆಪಿ ಸರ್ಕಾರ ಮುಂದಿನ ದಿನಗಳಲ್ಲಿ ಇತರ ಸರ್ಕಾರಿ ಉದ್ಯೋಗಗಳ ಮೇಲೆಯೂ ಸವಾರಿ ಮಾಡಲು ಹೊರಡುವುದು ಖಚಿತ ಎಚ್ಚೆತ್ತುಕೊಳ್ಳಲು ಇದು ಸಕಾಲ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ರೈತರ ಬದುಕು ನಾಶ ಮಾಡಲು ಕರಾಳ ಕೃಷಿ ಕಾಯ್ದೆಗಳನ್ನು ತಂದಿದ್ದ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ದೇಶದ ಜನ ಪಾಠ ಕಲಿಸಿದ್ದಾರೆ. ಈಗ ಯುವಜನರ ಬದುಕು ನಾಶದ ಜೊತೆಯಲ್ಲಿ ಸೈನಿಕರ ಬದುಕಿನ ಜೊತೆ ಚೆಲ್ಲಾಟವಾಡುತ್ತಿರುವವರಿಗೂ ಪಾಠ ಕಲಿಸಲು ದೇಶದ ಜನತೆ ಮುಂದಾಗಬೇಕು ಎಂದು ಸಿದ್ದರಾಮಯ್ಯ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


