ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ: ಎಸ್.ಆರ್. ಶ್ರೀನಿವಾಸ್ ಮತ್ತು ಕೆ. ಶ್ರೀನಿವಾಸ ಗೌಡ ಜೆಡಿಎಸ್ ನಿಂದ ಉಚ್ಛಾಟನೆ
ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿ ಅಡ್ಡ ಮತದಾನ ಮಾಡಿದ ಕೋಲಾರ ಶಾಸಕ ಕೆ.ಶ್ರೀನಿವಾಸ ಗೌಡ ಹಾಗೂ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಅವರನ್ನು ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ ಮಾಡಲಾಗಿದೆ.

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿ ಅಡ್ಡ ಮತದಾನ ಮಾಡಿದ ಕೋಲಾರ ಶಾಸಕ ಕೆ.ಶ್ರೀನಿವಾಸ ಗೌಡ ಹಾಗೂ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಅವರನ್ನು ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ ಮಾಡಲಾಗಿದೆ.
ಇಬ್ಬರೂ ಶಾಸಕರನ್ನು ಪಕ್ಷದಿಂದ ಉಚ್ಛಾಟನೆ ಮಾಡಲು ಶಾಸಕ ಬಂಡೆಪ್ಪ ಕಾಶೆಂಪುರ ಅಧ್ಯಕ್ಷತೆಯಲ್ಲಿ ನಡೆದ ಜೆಡಿಎಸ್ ರಾಜ್ಯ ಘಟಕದ ಪ್ರಮುಖರ ಸಮಿತಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು. ಈ ನಿರ್ಣಯಕ್ಕೆ ಪೂರಕವಾಗಿ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಆದೇಶ ಹೊರಡಿಸಿದ್ದಾರೆ.
ಹಾಗೆಯೇ ಪಕ್ಷಾಂತರ ನಿಷೇಧ ಕಾಯ್ದೆ ಅಡಿ ಇಬ್ಬರೂ ಶಾಸಕರನ್ನು ವಿಧಾನಸಭೆ ಸದಸ್ಯತ್ವದಿಂದ ಅನರ್ಹಗೊಳಿಸಲು ತಕ್ಷಣವೇ ವಿಧಾನಸಭಾಧ್ಯಕ್ಷರಿಗೆ ದೂರು ನೀಡಲು ಕೂಡ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಎರಡು ಮೂರು ದಿನದೊಳಗೆ ಸ್ಪೀಕರ್ ಅವರಿಗೆ ದೂರು ನೀಡಲಾಗುವುದು ಎಂದು ಅವರು ಮಾಹಿತಿ ನೀಡಿದರು.
ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಡಿ. ಕುಪೇಂದ್ರ ರೆಡ್ಡಿ ಅವರಿಗೆ ಮತ ಚಲಾಯಿಸಬೇಕೆಂಬ ವಿಪ್ ಅನ್ನು ಇಬ್ಬರೂ ಉಲ್ಲಂಘಿಸಿದ್ದಾರೆ. ಗುಬ್ಬಿ ಶ್ರೀನಿವಾಸ್ ಅವರು ತಮ್ಮ ಪ್ರಥಮ ಪ್ರಾಶಸ್ತ್ಯದ ಮತವನ್ನು ಬಿಜೆಪಿ ಅಭ್ಯರ್ಥಿ ಲಹರ್ ಸಿಂಗ್ ಅವರಿಗೆ ಮತ್ತು ದ್ವಿತೀಯ ಪ್ರಾಶಸ್ತ್ಯದ ಮತವನ್ನು ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ಅವರಿಗೆ ನೀಡಿದ್ದರು.
ಕೆ. ಶ್ರೀನಿವಾಸ ಗೌಡ ತಮ್ಮ ಪ್ರಥಮ ಪ್ರಾಶಸ್ತ್ಯದ ಮತವನ್ನು ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್‌ಗೆ ಹಾಗೂ ದ್ವಿತೀಯ ಪ್ರಾಶಸ್ತ್ಯದ ಮತವನ್ನು ಬಿಜೆಪಿಯ ಲಹರ್ ಸಿಂಗ್ ಅವರಿಗೆ ನೀಡಿದ್ದರು ಎಂಬುದಾಗಿ ಜೆಡಿಎಸ್ ಮತಗಟ್ಟೆ ಏಜೆಂಟ್ ಎಚ್.ಡಿ. ರೇವಣ್ಣ ವರದಿ ನೀಡಿದ್ದಾರೆ ಎಂಬ ಉಲ್ಲೇಖ ಉಚ್ಛಾಟನೆ ಆದೇಶದಲ್ಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


