ಎನ್ ಇಪಿ ಎಂದರೆ ಸರ್ಕಾರಿ ಸ್ವತ್ತನ್ನು ಭೂರಕ್ಕಸರ ಬಾಯಿಗೆ ಹಾಕುವುದಾ? ಪ್ರಧಾನಿ ಮೋದಿ ಅವರು ಹೇಳಿಕೊಟ್ಟ ವಿಶ್ವಗುರು ಪರಿಕಲ್ಪನೆ ಇದೇನಾ?
ಸದನದಲ್ಲಿ ನಾನಿಟ್ಟ ಪ್ರತಿ ದಾಖಲೆ ಅಕ್ರಮಕ್ಕೆ ಕನ್ನಡಿ. ನಿಮ್ಮ ಕಣ್ಣಿಗೆ ಈ ಅಕ್ರಮವೆಲ್ಲಾ ಸಕ್ರಮವಾಗಿದ್ದರೆ, ಇದಕ್ಕಿಂತ ದುರಂತ ಇನ್ನೊಂದಿಲ್ಲ. ಎಲ್ಲಾ ದಾಖಲೆಗಳನ್ನು ಮತ್ತೊಮ್ಮೆ ನೋಡಿ. ಅಷ್ಟೂ ಆಸ್ತಿಯನ್ನು ಲಪಟಾಯಿಸಲು ಟ್ರಸ್ಟ್ ನಲ್ಲಿ ನಡೆದ ಷಡ್ಯಂತ್ರಕ್ಕೆ ಸಚಿವರಾಗಿ ನೀವು ಹೇಗೆಲ್ಲಾ ಸಹಕಾರ ನೀಡಿದ್ದೀರಿ ಎನ್ನುವುದು ಈಗ ಜಗಜ್ಜಾಹೀರು.

ಬೆಂಗಳೂರು: ಬಿಎಂಎಸ್ ಟ್ರಸ್ಟ್ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ ನಾರಾಯಣ ಅವರು ರಾಜೀನಾಮೆಯನ್ನು ನೀಡಬೇಕು ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು ಮೂರು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ಗುರುವಾರ ವಿಧಾನಸಭೆಯಲ್ಲೂ ಬಿಎಂಎಸ್ ಟ್ರಸ್ಟ್ ಅಕ್ರಮ ಭಾರಿ ಸದ್ದು ಗದ್ದಲಕ್ಕೆ ಕಾರಣವಾಗಿತ್ತು. ಅಕ್ರಮದ ಬಗ್ಗೆ ತನಿಖೆಗೆ ಆಗ್ರಹಿಸಿ ಜೆಡಿಎಸ್ ಸದಸ್ಯರು ಅಹೋರಾತ್ರಿ ಧರಣಿಗೆ ಮುಂದಾಗಿದ್ದರು. ಶುಕ್ರವಾರವೂ ಈ ಬಗ್ಗೆ ತನಿಖೆಗೆ ಆಗ್ರಹಿಸಿ ಜೆಡಿಎಸ್ ಧರಣಿ ಮುಂದುವರಿಸಲಿದ್ದಾರೆ.
ವಿಧಾನಸಭೆಯಲ್ಲೇ ಎಲ್ಲವನ್ನೂ ದಾಖಲೆ ಸಮೇತ ಇಟ್ಟಿದ್ದೇನೆ. ಆ ದಾಖಲೆಗಳೇ ಎಲ್ಲವನ್ನೂ ಮಾತನಾಡುತ್ತಿವೆ. ಇನ್ನು ನನ್ನ ಹೊಡೆದ ಗುಂಡು ಎಲ್ಲಿ ವಿಫಲವಾಗಿದೆ? ಅದನ್ನು ವಿಫಲಗೊಳಿಸುವ ಇನ್ನೊಂದು ಹುನ್ನಾರ, ಷಡ್ಯಂತ್ರ ಈಗ ನಡೆದಿದೆ ಅಷ್ಟೇ ಎಂದಿದ್ದಾರೆ.
ಬಿಎಂಎಸ್ ಟ್ರಸ್ಟ್ ಬಗ್ಗೆ ಬಿಜೆಪಿ ಸರಕಾರ ಕಾನೂನುರೀತ್ಯ ಕ್ರಮ ವಹಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ಹೇಳಿದ್ದಾರೆ. ಕಾನೂನುರೀತ್ಯ ಕ್ರಮ ಎಂದರೆ, ಸಾವಿರಾರು ಕೋಟಿ ರೂ. ಮೌಲ್ಯದ ಸರಕಾರಿ ಸ್ವತ್ತನ್ನು ಸದ್ದಿಲ್ಲದೆ ಖಾಸಗಿ ರಿಯಲ್ ಎಸ್ಟೇಟ್ ಪಟ್ಟಭದ್ರರಿಗೆ ಧಾರೆ ಎರೆದುಕೊಡುವುದಾ ಸಚಿವರೇ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಸದನದಲ್ಲಿ ನಾನಿಟ್ಟ ಪ್ರತಿ ದಾಖಲೆ ಅಕ್ರಮಕ್ಕೆ ಕನ್ನಡಿ. ನಿಮ್ಮ ಕಣ್ಣಿಗೆ ಈ ಅಕ್ರಮವೆಲ್ಲಾ ಸಕ್ರಮವಾಗಿದ್ದರೆ, ಇದಕ್ಕಿಂತ ದುರಂತ ಇನ್ನೊಂದಿಲ್ಲ. ಎಲ್ಲಾ ದಾಖಲೆಗಳನ್ನು ಮತ್ತೊಮ್ಮೆ ನೋಡಿ. ಅಷ್ಟೂ ಆಸ್ತಿಯನ್ನು ಲಪಟಾಯಿಸಲು ಟ್ರಸ್ಟ್ ನಲ್ಲಿ ನಡೆದ ಷಡ್ಯಂತ್ರಕ್ಕೆ ಸಚಿವರಾಗಿ ನೀವು ಹೇಗೆಲ್ಲಾ ಸಹಕಾರ ನೀಡಿದ್ದೀರಿ ಎನ್ನುವುದು ಈಗ ಜಗಜ್ಜಾಹೀರು ಎಂದು ಎಚ್ ಡಿಕೆ ವಿವರಿಸಿದ್ದಾರೆ.
ಉನ್ನತ ಶಿಕ್ಷಣ ಸಚಿವರೇ, 1957ರಲ್ಲಿ ರಚನೆಗೊಂಡು ನೋಂದಣಿಯಾದ ಬಿಎಂಎಸ್ ಟ್ರಸ್ಟಿನ ಮೂಲ ಡೀಡನ್ನು ಒಮ್ಮೆ ಓದಿ. ದಾನಿ ಟ್ರಸ್ಟಿ, ಆಜೀವ ಟ್ರಸ್ಟಿ ನೇಮಕದ ಬಗ್ಗೆ ಇರುವ ಷರತ್ತುಗಳನ್ನೂ ತಿಳಿಯಿರಿ. ಆದರೆ, ನೀವು ಜನರಿಗೆ ಮತ್ತು ಸರಕಾರಕ್ಕೆ ಸೇರಿದ ಇಡೀ ಟ್ರಸ್ಟಿನ ಆಸ್ತಿ ಹೊಡೆಯಲು ನಿಂತವರ ಪರ ನಾಚಿಕೆ ಇಲ್ಲದೆ ವಕಾಲತ್ತು ವಹಿಸುತ್ತಿದ್ದೀರಿ ಎಂದು ತಪರಾಕಿ ಹಾಕಿದ್ದಾರೆ.
ಬಿಎಂಎಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸೀಟ್ ಬ್ಲಾಕಿಂಗ್, ಪೇಮೆಂಟ್ ಸೀಟುಗಳನ್ನು 50:50 ರಂತೆ ಟ್ರಸ್ಟಿಗಳಿಬ್ಬರು ಹಂಚಿಕೊಂಡಿದ್ದು ನಿಮ್ಮ ಗಮನಕ್ಕೆ ಬರಲಿಲ್ಲವೇ? ಕಾಮೆಡ್-ಕೆ ಆಕ್ಷೇಪಣಾ ಪತ್ರ, ಸರಕಾರದ ಇಬ್ಬರು ಅಧಿಕಾರಿಗಳು ಟ್ರಸ್ಟಿನ ಅಕ್ರಮಗಳ ಬಗ್ಗೆ ಬರೆದ ಪತ್ರಗಳನ್ನು ನೀವು ಓದಲಿಲ್ಲವೇ ಸಚಿವರೇ? ಓದಲಿಲ್ಲ ಎಂದರೆ, ಅದಕ್ಕೆ ಕಾರಣವೇನು?
ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಎಂದರೆ ಸರಕಾರಿ ಸ್ವತ್ತುಗಳನ್ನು ಭೂರಕ್ಕಸರ ಬಾಯಿಗೆ ಹಾಕುವುದಾ? ಮುಜರಾಯಿ ಇಲಾಖೆಯ ಶ್ರೀ ದೊಡ್ಡ ಬಸವಣ್ಣ, ಕಾರಂಜಿ ಶ್ರೀ ಆಂಜನೇಯ ಸ್ವಾಮಿ ದೇಗುಲಗಳಿಗೆ ಸೇರಿದ ಕೋಟ್ಯಂತರ ರೂ. ಬೆಲೆಯ ಆಸ್ತಿಯನ್ನು ನುಂಗಲು ಹೊರಟ ನುಂಗಣ್ಣರಿಗೆ ದಾರಿ ಸಲೀಸು ಮಾಡಿಕೊಡುವುದಾ?ಇದ್ಯಾವ ಶಿಕ್ಷಣ ನೀತಿ? ಇದ್ಯಾವ ಧರ್ಮನೀತಿ?
ನಮ್ಮ ಅವಧಿಯಲ್ಲಿ ಶೈಕ್ಷಣಿಕ ಸುಧಾರಣೆಗಾಗಿ ಬಹಳ ಕ್ರಮ ಕೈಗೊಂಡಿದ್ದೇವೆ ಎನ್ನುತ್ತೀರಿ. ಸುಧಾರಣೆ ಎಂದರೆ, ಸಾರ್ವಜನಿಕ ಟ್ರಸ್ಟುಗಳನ್ನು ಹೀಗೆ ನುಂಗಿ ನೀರು ಕುಡಿಯಲು ಒಳಗೊಳಗೇ ಸಹಕಾರ ನೀಡುವುದಾ? ಪ್ರಧಾನಿ ಮೋದಿ ಅವರು ಹೇಳಿಕೊಟ್ಟ ವಿಶ್ವಗುರು ಪರಿಕಲ್ಪನೆ ಇದೇನಾ?ಶೈಕ್ಷಣಿಕೋದ್ಧಾರ ಮಾಡುವುದು ಎಂದರೆ ಹೀಗೆನಾ?
2018ರಲ್ಲಿ ನನ್ನ ನೇತೃತ್ವದ ಸರಕಾರವು ದಾನಿ ಟ್ರಸ್ಟಿ, ಅಜೀವ ಟ್ರಸ್ಟಿ ನೇಮಕದ ಬಗ್ಗೆ ಬಿಎಂಎಸ್ ಟ್ರಸ್ಟಿನಲ್ಲಿ ಕೈಗೊಂಡಿದ್ದ ತಿದ್ದುಪಡಿಗಳು ಅಕ್ರಮ ಎಂದು ಸಾರಿ, ಆ ತಿದ್ದುಪಡಿಗಳನ್ನು ಸಾರಾಸಗಟಾಗಿ ತಿರಸ್ಕರಿತ್ತು. ನನ್ನ ಸರಕಾರ ಹೋದ ಮೇಲೆ ಬಂದಬಿಜೆಪಿ ಸರಕಾರ ಈ ಅಕ್ರಮ ತಿದ್ದುಪಡಿಗಳನ್ನು ಶರವೇಗದಲ್ಲಿ ಪುರಸ್ಕರಿಸಿದ್ದು ಹೇಗೆ?
ಟ್ರಸ್ಟಿನಲ್ಲಿ ಸರಕಾರದ ಟ್ರಸ್ಟಿಗೇ ಕೊಕ್ ಕೊಟ್ಟು, ಈ ಟ್ರಸ್ಟಿನಲ್ಲಾಗುತ್ತಿದ್ದ ಗೋಲ್ಮಾಲ್ ಬಗ್ಗೆ ಸರಕಾರಿ ಟ್ರಸ್ಟಿಯಾಗಿದ್ದ ಐಎಎಸ್ ಅಧಿಕಾರಿ ಡಾ.ಮಂಜುಳಾ ಮತ್ತುಇನ್ನೊರ್ವ ಐಎಎಸ್ ಅಧಿಕಾರಿ ಮದನ್ ಗೋಪಾಲ್ ಅವರು ಬರೆದ ಪತ್ರಗಳನ್ನು ಕಸದಬುಟ್ಟಿಗೆ ಹಾಕಿದ್ದು ಏಕೆ? ಇದರ ಹಿಂದಿನ ಹುನ್ನಾರ ಏನು ಉನ್ನತ ಶಿಕ್ಷಣ ಸಚಿವರೇ?
ಟ್ರಸ್ಟಿನಲ್ಲಿ ಕೈಗೊಂಡ ಅಕ್ರಮ ತಿದ್ದುಪಡಿಗಳನ್ನು ಸಕ್ರಮಗೊಳಿಸಲು ತಾವು ತೋರಿದ ಆತುರ, ಕಾಳಜಿ ಎಂಥದ್ದು ಎಂಬುದು ನನಗೆ ಗೊತ್ತು. ಅವುಗಳ ಅನುಮೋದನೆಗಾಗಿ ತಾವೇ ಬರೆದ ಟಿಪ್ಪಣಿಯ ಒಕ್ಕಣಿಯನ್ನು ಒಮ್ಮೆ ಓದಿಕೊಳ್ಳಿ ಅಶ್ವತ್ಥನಾರಾಯಣ ಅವರೇ. ಉನ್ನತ ಶಿಕ್ಷಣ ಸಚಿವರಾದ ನಿಮ್ಮ ಉನ್ನತ ಮಟ್ಟ ಎಷ್ಟು ಕೆಳಮಟ್ಟದಲ್ಲಿದೆ ಎಂಬುದು ಅರ್ಥವಾಗುತ್ತದೆ ಎಂದು ಕುಮಾರಸ್ವಾಮಿ ಟ್ವೀಟ್ ನಲ್ಲಿ ತಿವಿದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


