ಕರ್ನಾಟಕದಲ್ಲಿ ಇನ್ನು ಆರು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ, ಪೊಲೀಸರಿಗೆ ತಕ್ಕ ಪಾಠ ಕಲಿಸುತ್ತೇವೆ: ಸಿದ್ದರಾಮಯ್ಯ
ಕರ್ನಾಟಕದಲ್ಲಿ ಇನ್ನು 6 ತಿಂಗಳಲ್ಲಿ ಸರ್ಕಾರ ಬದಲಾಗಲಿದೆ. ತಾರತಮ್ಯ ಮಾಡುತ್ತಿರುವ ಪೊಲೀಸರಿಗೆ ಆಗ ಬುದ್ಧಿ ಕಲಿಸುತ್ತೇವೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಗುಡುಗಿದ್ದಾರೆ.

ಚಾಮರಾಜನಗರ: ಕರ್ನಾಟಕದಲ್ಲಿ ಇನ್ನು 6 ತಿಂಗಳಲ್ಲಿ ಸರ್ಕಾರ ಬದಲಾಗಲಿದೆ. ತಾರತಮ್ಯ ಮಾಡುತ್ತಿರುವ ಪೊಲೀಸರಿಗೆ ಆಗ ಬುದ್ಧಿ ಕಲಿಸುತ್ತೇವೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಗುಡುಗಿದ್ದಾರೆ. ಗುಂಡ್ಲುಪೇಟೆಯಲ್ಲಿ ಇಂದು ಆರಂಭವಾದ ಭಾರತ್ ಜೋಡೋ ಸಮಾವೇಶದಲ್ಲಿ ಮಾತನಾಡಿದ ಅವರು, ಬೇರೆ ಯಾವುದೇ ನಾಯಕರು ಈ ರೀತಿಯ ಪಾದಯಾತ್ರೆ ಮಾಡಿಲ್ಲ. ಈ ಪಾದಯಾತ್ರೆ ಯಶಸ್ವಿಯಾಗಲಿದೆ, ಕರ್ನಾಟಕ, ಭಾರತ ರಾಜಕೀಯ ಚಿತ್ರಣ ಬದಲಾಗಲಿದೆ ಎಂದರು.
ನರೇಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ ದೇಶದಲ್ಲಿ ದ್ವೇಷದ ರಾಜಕಾರಣ ಹೆಚ್ಚಾಗಿದೆ. ಜನರು ಈಗ ಆತಂಕದ ಪರಿಸ್ಥಿತಿಯಲ್ಲಿ ಬದುಕುವ ವಾತಾವರಣ ನಿರ್ಮಾಣವಾಗಿದೆ. ಅಂಬೇಡ್ಕರ್ ರೂಪಿಸಿರುವ ಸಂವಿಧಾನ ಬೇಡ ಎಂದು ಇವರು ಹಲವು ಬಾರಿ ಹೇಳಿದ್ದಾರೆ. ಪ್ರಜಾಪ್ರಭುತ್ವ, ಸಂವಿಧಾನದ ಮೇಲೆ ಇವರಿಗೆ ನಂಬಿಕೆ ಇಲ್ಲ. ಬಿಜೆಪಿಯವರಿಗೆ ದೇಶದಲ್ಲಿ ಶಾಂತಿ, ಸಾಮರಸ್ಯ ಇರಬಾರದು. ಜನರನ್ನು ಇಬ್ಭಾಗ ಮಾಡುವುದೇ ಇವರ ಉದ್ದೇಶ. ಸಂವಿಧಾನ ಉಳಿಸುವ ಕೆಲಸಕ್ಕೆ ನಾವೆಲ್ಲರೂ ಬದ್ಧರಾಗಬೇಕಿದೆ ಎಂದು ಹೇಳಿದರು.
ದೇಶದಲ್ಲಿ ಈಗ ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ. ಕೋಮುವಾದಿ ಶಕ್ತಿಗಳ ವಿರುದ್ಧ ಹೋರಾಡುವುದು ಅನಿವಾರ್ಯವಾಗಿದೆ. ಸಂವಿಧಾನ ಉಳಿಸಲು ನಾವು ಎಲ್ಲ ರೀತಿಯ ತ್ಯಾಗಕ್ಕೂ ಸಿದ್ಧರಾಗಬೇಕು ಎಂದು ಕರೆ ನೀಡಿದರು.
ಪೊಲೀಸರ ವಿರುದ್ಧ ಆಕ್ರೋಶ: ಗುಂಡ್ಲುಪೇಟೆಯಲ್ಲಿ ಕಾಂಗ್ರೆಸ್ ಫ್ಲೆಕ್ಸ್ ಹರಿದು ಹಾಕಿದ್ದನ್ನು ಸಮಾವೇಶದಲ್ಲಿ ಪ್ರಸ್ತಾಪಿಸಿದ ಸಿದ್ದರಾಮಯ್ಯ, ಇದೇ ರೀತಿ ಮುಂದುವರಿದರೆ ರಾಜ್ಯದಲ್ಲಿ ಬಿಜೆಪಿ ನಾಯಕರು ತಿರುಗಾಡಲು ಕಷ್ಟವಾಗುವಂತೆ ಮಾಡುತ್ತೇವೆ. ಬಿಜೆಪಿಯವರ ಜತೆ ಪೊಲೀಸರು ಶಾಮೀಲಾಗಿದ್ದರೆ ಅವರಿಗೂ ತಕ್ಕ ಪಾಠ ಕಲಿಸುತ್ತೇವೆ. ಮುಂದಿನ 6 ತಿಂಗಳಲ್ಲಿ ರಾಜ್ಯದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಆಗ ತಕ್ಕ ಪಾಠ ಕಲಿಸುತ್ತೇವೆ ಎಂದು ಪೊಲೀಸರಿಗೆ ಎಚ್ಚರಿಕೆ ನೀಡಿದರು.
ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆ: ಗುಂಡ್ಲುಪೇಟೆಯಲ್ಲಿ ರಾಹುಲ್ ಗಾಂಧಿ, ಕಾಂಗ್ರೆಸ್ ನಾಯಕರ ಫ್ಲೆಕ್ಸ್ ಹರಿದ ಕಿಡಿಗೇಡಿಗಳು
ರಾಹುಲ್ ಗಾಂಧಿ ಅವರು 510 ಕಿಮೀ ಪಾದಯಾತ್ರೆ ಮಾಡಲಿದ್ದಾರೆ. ಸ್ವಾತಂತ್ರ್ಯಾನಂತರ ಒಂದೇ ಬಾರಿ ಇಷ್ಟೊಂದು ದೂರವನ್ನು ಪಾದಯಾತ್ರೆ ಬೇರೆ ಯಾವ ನಾಯಕರೂ ಪಕ್ಷವೂ ಕೂಡ ಕ್ರಮಿಸಿಲ್ಲ. ಕೋಮುವಾದಿ ರಾಜಕಾರಣದಿಂದ ಬೇಸತ್ತು ರಾಹುಲ್ ಗಾಂಧಿ ಈ ಪಾದಯಾತ್ರೆ ಮಾಡುತ್ತಿದ್ದಾರೆ. ದೇಶದಲ್ಲಿ ಪ್ರಸ್ತುತ ಅಲ್ಪಸಂಖ್ಯಾತರು, ದಲಿತರು, ಮಹಿಳೆಯರು ಆತಂಕದಲ್ಲಿ ಬದುಕುತ್ತಿದ್ದಾರೆ. ಬಿಜೆಪಿಯು ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಟ್ಟುಕೊಂಡ ಪಕ್ಷ ಅಲ್ಲ. ಬಿಜೆಪಿ ನಾಯಕರು ಹಲವು ಬಾರಿ ಸಂವಿಧಾನ ಬದಲಾವಣೆಯ ಬಗ್ಗೆ ಮಾತನಾಡಿದ್ದಾರೆ. ಜಾತ್ಯತೀತ ತತ್ವದಲ್ಲಿ ಅವರಿಗೆ ನಂಬಿಕೆ ಇಲ್ಲ ಎಂದು ಟೀಕಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


