ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ನಮ್ಮ ಗೆಲುವಿಗೆ ದಿಕ್ಸೂಚಿ: ಸಿಎಂ ಬಸವರಾಜ ಬೊಮ್ಮಾಯಿ
ಪಕ್ಷದ ವತಿಯಿಂದ ಬಿಡುಗಡೆ ಮಾಡಿರುವ 189 ಅಭ್ಯರ್ಥಿಗಳ ಮೊದಲ ಪಟ್ಟಿ ಈ ಬಾರಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಗೆಲುವಿನ ದಿಕ್ಸೂಚಿಯನ್ನು ತೋರಿಸುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರು: ಪಕ್ಷದ ವತಿಯಿಂದ ಬಿಡುಗಡೆ ಮಾಡಿರುವ 189 ಅಭ್ಯರ್ಥಿಗಳ ಮೊದಲ ಪಟ್ಟಿ ಈ ಬಾರಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಗೆಲುವಿನ ದಿಕ್ಸೂಚಿಯನ್ನು ತೋರಿಸುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ನಿನ್ನೆ ದೆಹಲಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಂಬಂಧ ಮಾತುಕತೆ ನಡೆಸಿ ರಾತ್ರಿ ಪಟ್ಟಿ ಬಿಡುಗಡೆಯಾದ ನಂತರ ಬೆಂಗಳೂರಿಗೆ ಆಗಮಿಸಿದ ಸಿಎಂ ಬೊಮ್ಮಾಯಿ ಎಚ್ ಎ ಎಲ್ ವಿಮಾನ ನಿಲ್ದಾಣದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. 189 ಅಭ್ಯರ್ಥಿಗಳಲ್ಲಿ ಹೊಸ ಮುಖ ತರುವ ನಿಟ್ಟಿನಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಮೊದಲ ಪಟ್ಟಿ ನೋಡಿದರೆ ಈ ಬಾರಿ ಬಿಜೆಪಿ ಮತ್ತೊಮ್ಮೆ ಗೆಲುವು ಸಾಧಿಸುವ ದಿಕ್ಸೂಚಿ ಆಗಿದೆ ಎಂದರು.
ಟಿಕೆಟ್ ಕೈ ತಪ್ಪಿದವರು ಬಂಡಾಯ ಏಳುವ ಸಾಧ್ಯತೆ ಹಿನ್ನೆಲೆಯಲ್ಲಿ ಅವರಿಗೆ ಟಿಕೆಟ್ ಕೈ ತಪ್ಪುವ ಬಗ್ಗೆ ಹಿಂದೆಯೇ ಹೇಳಿದ್ದೆವು. ಒಟ್ಟು 3 ದಿನ ಚರ್ಚೆ ಮಾಡಿ ಈ ನಿರ್ಧಾರ ಮಾಡಿದ್ದೇವೆ ಎಂದರು.
ಹಿರಿಯ ನಾಯಕರಿಗೆ ಟಿಕೆಟ್ ಕೈ ತಪ್ಪಿರುವ ವಿಚಾರ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಹಿರಿಯರು ಪಕ್ಷವನ್ನು ಕಟ್ಟಿ ಬೆಳೆಸಿದ್ದಾರೆ. ಪಕ್ಷ ಹಿರಿಯರನ್ನು ಬೆಳೆಸಿದೆ. ಅವರಿಗೆ ಪಕ್ಷದೊಂದಿಗೆ ಅನ್ಯೋನ್ಯ ಸಂಬಂಧ ಇರುವ ಕಾರಣ ಯಾವುದು ತೊಂದರೆ ಆಗುವುದಿಲ್ಲ. ಟಿಕೆಟ್ ತಪ್ಪುವವರಿಗೆ ಯಾಕೆ ಏನು ಕಾರಣ ಮುಂದೆ ಯಾವ ರೀತಿಯ ಅವಕಾಶ ಇದೆ ಎಂಬುದನ್ನ ಹೇಳಿದ್ದೀವಿ. ನಮ್ಮದು ರಾಷ್ಟ್ರೀಯ ಪಕ್ಷ, ಶಿಸ್ತಿನ ಪಕ್ಷ ಬಿಜೆಪಿ. ಎಲ್ಲ ನಿಭಾಯಿಸುವ ಶಕ್ತಿ ಬಿಜೆಪಿಗೆ ಇದೆ ಎಂದರು.
ಇದನ್ನೂ ಓದಿ: 189 ಅಭ್ಯರ್ಥಿಗಳ ಬಿಜೆಪಿ ಪಟ್ಟಿ ಬಿಡುಗಡೆ: ಟಿಕೆಟ್ ವಂಚಿತರು & ಸ್ಪರ್ಧಿಸಲು ಅವಕಾಶ ಪಡೆದ ಅಭ್ಯರ್ಥಿಗಳು ಇವರು
ಇನ್ನು ಪಟ್ಟಿ ತಯಾರಿಸುವ ವೇಳೆ ಯಡಿಯೂರಪ್ಪ ಅಸಮಾಧಾನಗೊಂಡಿದ್ದಾರೆ ಎನ್ನುವುದು ಊಹಾಪೋಹ. ಎರಡು ದಿನ ಪೂರ್ಣ ಪ್ರಮಾಣದಲ್ಲಿ ಅವರು ಕುಳಿತು ಚರ್ಚೆ ನಡೆಸಿ ಪಟ್ಟಿ ತಯಾರಿಸಲಾಗಿದೆ. ರಾಷ್ಟ್ರೀಯ ಅಧ್ಯಕ್ಷರನ್ನ ಭೇಟಿ ಮಾಡಿ ಕೆಲವು ಸಲಹೆ ಪಡೆಯಲಾಗಿದೆ. ಸಂಪೂರ್ಣವಾಗಿ ಯಡಿಯೂರಪ್ಪ ಅವರು ಈ ಪಟ್ಟಿ ತಯಾರಿಸುವಲ್ಲಿ ಭಾಗಿಯಾಗಿದ್ದಾರೆ ಎಂದರು.
ಇನ್ನೆರಡು ದಿನಗಳಲ್ಲಿ ಎರಡನೇ ಪಟ್ಟಿ: ಇನ್ನು 34 ಕ್ಷೇತ್ರಗಳ ಪಟ್ಟಿ ಎರಡು ದಿನಗಳಲ್ಲಿ ಪ್ರಕಟವಾಗುವ ಸಾಧ್ಯತೆ ಇದೆ. ನಾವು ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಮುಂದಿಟ್ಟುಕೊಂಡು ಜನರ ಬಳಿ ಮತ ಕೇಳುತ್ತೇವೆ. ಬೂತ್ ಮಟ್ಟದಲ್ಲಿ ತೆರಳಿ, ಹಳ್ಳಿ ಹಳ್ಳಿಗೂ ಹೋಗಿ ಪ್ರಚಾರ ಮಾಡುತ್ತೇವೆ. ರಾಜ್ಯದ ಸಮರ್ಥ ಅಭಿವೃದ್ಧಿ, ಕೋವಿಡ್ ವೇಳೆ ಎದುರಿಸಿದ ಸವಾಲುಗಳು, ಹಲವಾರು ಯುವಕರಿಗೆ ಕೊಟ್ಟ ಕೆಲಸ ಹಿನ್ನೆಲೆಯಲ್ಲಿ ದೊಡ್ಡ ಮಟ್ಟದಲ್ಲಿ ಗೆಲುವಿನ ವಿಶ್ವಾಸ ಇದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


