ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಸೋಲಿನ ಭೀತಿ, ಹೀಗಾಗಿ ಆಪರೇಷನ್ ಹಸ್ತಕ್ಕೆ ಕೈ ಹಾಕಿದೆ: ಮಾಜಿ ಸಿಎಂ ಬೊಮ್ಮಾಯಿ
2024ರ ಲೋಕಸಭೆ ಚುನಾವಣೆಗೆ ಏಳೆಂಟು ತಿಂಗಳು ಮಾತ್ರ ಬಾಕಿ, ಹೀಗಿರುವಾಗ ಕರ್ನಾಟಕದಲ್ಲಿ ಆಪರೇಷನ್ ಹಸ್ತ ಸದ್ದು ಮಾಡುತ್ತಿದೆ. ಬಿಜೆಪಿ, ಜೆಡಿಎಸ್ ನ ಅತೃಪ್ತ ಶಾಸಕರನ್ನು ತನ್ನತ್ತ ಸೆಳೆಯಲು ನೋಡುತ್ತಿದ್ದು, ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವುದು ಕಾಂಗ್ರೆಸ್ ನ ಯೋಜನೆಯಾಗಿದೆ.

ಹುಬ್ಬಳ್ಳಿ: 2024ರ ಲೋಕಸಭೆ ಚುನಾವಣೆಗೆ ಏಳೆಂಟು ತಿಂಗಳು ಮಾತ್ರ ಬಾಕಿ, ಹೀಗಿರುವಾಗ ಕರ್ನಾಟಕದಲ್ಲಿ ಆಪರೇಷನ್ ಹಸ್ತ ಸದ್ದು ಮಾಡುತ್ತಿದೆ. ಬಿಜೆಪಿ, ಜೆಡಿಎಸ್ ನ ಅತೃಪ್ತ ಶಾಸಕರನ್ನು ತನ್ನತ್ತ ಸೆಳೆಯಲು ನೋಡುತ್ತಿದ್ದು, ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವುದು ಕಾಂಗ್ರೆಸ್ ನ ಯೋಜನೆಯಾಗಿದೆ.
ಇತ್ತ ಬಿಜೆಪಿಯಲ್ಲಿ ವಿರೋಧ ಪಕ್ಷದ ನಾಯಕನ ಆಯ್ಕೆಯಾಗಿಲ್ಲ, ರಾಜ್ಯಾಧ್ಯಕ್ಷರ ಬದಲಾವಣೆಯಾಗುತ್ತದೆ ಎಂದು ಹೇಳಲಾಗುತ್ತಿದ್ದರೂ ಅದಿನ್ನೂ ಕಾರ್ಯರೂಪಕ್ಕೆ ಬಂದಿಲ್ಲ. ಈ ಬಗ್ಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಪರೇಷನ್ ಹಸ್ತದ ಬಗ್ಗೆ ಮಾತನಾಡಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಸೋಲಿನ ಭೀತಿ ಇದೆ. ರಾಜ್ಯದಲ್ಲಿ ಹೆಚ್ಚು ಲೋಕಸಭಾ ಸೀಟು ಬರಲ್ಲ ಅಂತ ಮಾಹಿತಿ ಇದೆ. ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲದಿದ್ದರೆ ಕಾಂಗ್ರೆಸ್ ಸರ್ಕಾರದ ಭವಿಷ್ಯಕ್ಕೆ ಸಮಸ್ಯೆ ಇದೆ. ಹೀಗಾಗಿ ರಾಜ್ಯದಲ್ಲಿ ಆಪರೇಷನ್ ಹಸ್ತಕ್ಕೆ ಕಾಂಗ್ರೆಸ್ ಪಕ್ಷ ಕೈ ಹಾಕಿದೆ ಎಂದು ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದವರ ಆಪರೇಷನ್ ಹಸ್ತ ಯಶಸ್ವಿ ಆಗುವುದಿಲ್ಲ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.
ರಾಜ್ಯದಲ್ಲಿ ಮಳೆ ಬಾರದೆ, ಬೆಳೆಗಳಿಗೆ ನೀರಿಲ್ಲದೆ ರೈತರು ಸಂಕಷ್ಟದಲ್ಲಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ಬರಗಾಲ ಘೋಷಣೆ ಮಾಡಬೇಕು. ಮಳೆ ಇಲ್ಲದೇ ರಾಜ್ಯದಲ್ಲಿ ಬರಗಾಲದ ಛಾಯೆ ಆವರಿಸಿದೆ. ಇದರಿಂದ ಬೆಳೆ ಕಳೆದುಕೊಂಡು ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ಮೂರು ತಿಂಗಳಿಂದ ಬರಗಾಲ ಘೋಷಣೆ ಮಾಡಿಲ್ಲ. ಬೆಳೆ ನಷ್ಟ, ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಕ್ರಮಕೈಗೊಂಡಿಲ್ಲ. ಕುಡಿಯುವ ನೀರು, ಬೆಳೆ ಸಮೀಕ್ಷೆ ಮಾಡಿ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ತೀವ್ರ ಕ್ಷಾಮ ಉಂಟಾಗುವ ಸಾಧ್ಯತೆ ಇದೆ. ನೀರಿನ ಕೊರತೆಯಿಂದಾಗಿ ವಿದ್ಯುತ್ ಉತ್ಪಾದನೆ ಕಡಿಮೆ ಆಗಿದೆ. ಇದರಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಿ ರೈತರಿಗೆ ಸಮಸ್ಯೆಯಾಗಲಿದೆ. ಯಾವುದೇ ಕ್ರಮಕ್ಕೆ ಮುಂದಾಗದೆ ಸರ್ಕಾರ ಕಣ್ಮುಚ್ಚಿ ಕುಳಿತಿದೆ. ರಾಜ್ಯದಲ್ಲಿ ಮುಂಗಾರು ಜೂನ್ ತಿಂಗಳ ಕೊನೆವರೆಗೂ ಬರಲಿಲ್ಲ. ಮಳೆ ಇಲ್ಲದೇ ರಾಜ್ಯದಲ್ಲಿ ಬರಗಾಲದ ಛಾಯೆ ಆವರಿಸಿದೆ. ಇದರಿಂದ ರೈತರಿಗೆ ಸಾಕಷ್ಟು ನಷ್ಟ ಆಗಿದೆ. ಇದರ ಬಗ್ಗೆ ಸರ್ಕಾರ ಯೋಚನೆ ಮಾಡಬೇಕು. ಆಗಸ್ಟ್ನಲ್ಲೂ ಮಳೆ ಬಾರದೆ ರೈತರು ಸಂಕಷ್ಟದಲ್ಲಿದ್ದಾರೆ ಎಂದರು.
ವರ್ಗಾವಣೆ ದಂದೆ ಸೇರಿದಂತೆ ಹಲವು ವಿಚಾರದಲ್ಲಿ ತಮ್ಮ ಸ್ವಹಿತಾಸಕ್ತಿಗಾಗಿ ಕಾಂಗ್ರೆಸ್ನವರು ಬಡಿದಾಡುತ್ತಿದ್ದಾರೆ. ಇದು ರಾಜ್ಯದ ದುಸ್ಥಿತಿ ಹಾಗೂ ವಿಪರ್ಯಾಸ. ಸರ್ಕಾರದ ವಿರುದ್ಧ ಧ್ವನಿ ಎತ್ತುವವರ ವಿರುದ್ಧ ಧಮನ ಮಾಡುವ ಕೆಲಸ ನಡೆದಿದೆ. ಪತ್ರಕರ್ತರು ಶಾಸಕರ ಪತ್ರ ಹೊರಗೆ ತಂದರೇ ಪತ್ರಕರ್ತರಿಗೆ ನೋಟಿಸ್ ಕೊಡುತ್ತಾರೆ. ಪತ್ರಿಕಾ ಸ್ವಾತಂತ್ರ್ಯ ದಮನ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


