ಬಿಜೆಪಿ ಸರ್ಕಾರ ಸಾಮಾಜಿಕ ನ್ಯಾಯಕ್ಕೆ ಚಟ್ಟಕಟ್ಟಿ ಸ್ಮಶಾನ ಕೇಕೆ ಹಾಕುತ್ತಿದೆ: ಕುಮಾರಸ್ವಾಮಿ ಕಿಡಿ
ಹೊಸ ಮೀಸಲಾತಿ ಘೋಷಿಸಿದ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಅವರು, ಸಾಮಾಜಿಕ ನ್ಯಾಯದಿಂದಲೇ ಇಡೀ ದೇಶಕ್ಕೆ ಮೇಲ್ಪಂಕ್ತಿಯಾಗಿದ್ದ...

ಬೆಂಗಳೂರು: ಹೊಸ ಮೀಸಲಾತಿ ಘೋಷಿಸಿದ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಅವರು, ಸಾಮಾಜಿಕ ನ್ಯಾಯದಿಂದಲೇ ಇಡೀ ದೇಶಕ್ಕೆ ಮೇಲ್ಪಂಕ್ತಿಯಾಗಿದ್ದ ಕರ್ನಾಟಕವನ್ನು ಮೀಸಲು ಮೂಲಕವೇ ವಿಭಜಿಸಿ ಮತಫಸಲು ತೆಗೆಯುವ ದುರಾಲೋಚನೆಯೊಂದಿಗೆ ಬಿಜೆಪಿ, ಸಾಮಾಜಿಕ ನ್ಯಾಯಕ್ಕೆ ಚಟ್ಟ ಕಟ್ಟಿ ಸ್ಮಶಾಣ ಕೇಕೆ ಹಾಕುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಸರಣಿ ಟ್ವೀಟ್ ಮಾಡುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದ ಮಾಜಿ ಸಿಎಂ, ರಾಜ್ಯ ಬಿಜೆಪಿ ಸರ್ಕಾರ ಪ್ರತಿಯೊಂದರಲ್ಲಿಯೂ ರಾಜಕೀಯ ಮಾಡುತ್ತಿದೆ. ಪ್ರತಿಯೊಂದರಲ್ಲಿಯೂ ಚುನಾವಣೆಯನ್ನೇ ಕಾಣುತ್ತದೆ! ಸಂಪುಟ ಸಭೆಯ ಮೀಸಲಾತಿ ಹಕೀಕತ್ತೇ ಒಂದು ಖತರ್ನಾಕ್ ನಾಟಕ. ಕೊಡಲು ಕೈ ಬಾರದು, ಕೊಡಲೂ ಆಗದು. ಹಣೆಗೆ ಮಣೆಯಿಂದ ಬಾರಿಸಿಕೊಳ್ಳುವುದೂ ಎಂದರೆ ಇದೆ. ಪಾಪದ ಪಾಶ ಬಿಜೆಪಿ ಬೆನ್ನುಬಿದ್ದಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಚುನಾವಣೆ ಎಂಬ ಚದುರಂಗದಾಟದಲ್ಲಿ ಬಿಜೆಪಿ ಬಿಸಿಲುಗುದರೆಯ ಮೇಲೆ ಸವಾರಿ ಮಾಡುತ್ತಿದೆ. ಅಷ್ಟೇ ಅಲ್ಲ; ಕ್ರೂರ ವ್ಯಾಘ್ರನ ಮೇಲೂ ಕುಳಿತು ಕುರುಡಾಗಿ ಸರ್ಕಸ್ ಮಾಡುತ್ತಿದೆ. ಸಾಗು, ಇಲ್ಲವೇ ಹೋಗು ಎನ್ನುವ ದುಸ್ಥಿತಿಯಲ್ಲಿ ತೋಯ್ದಾಡುತ್ತಿದೆ ಎಂದು ಕಿಡಿಕಾರಿದ್ದಾರೆ.
ಇದನ್ನು ಓದಿ: ಮೀಸಲಾತಿ ಬದಲಾವಣೆ ಚುನಾವಣಾ ಗಿಮಿಕ್: ಸಿದ್ದರಾಮಯ್ಯ
ಮತದ ಹೆಸರಿನಲ್ಲಿ ಮತಯುದ್ಧ ಗೆಲ್ಲಬಹುದೆಂದು ಚಟಕ್ಕೆ ಬಿದ್ದಿರುವ ಬಿಜೆಪಿ ಈಗ ಸರ್ವಜನರ ಕಲ್ಯಾಣದ ಪ್ರತೀಕವಾದ ಕರ್ನಾಟಕದಲ್ಲಿ ಮೀಸಲು ಕಳ್ಳಾಟ ಆಡಿದೆ. ಗೆಲ್ಲಲೇಬೇಕು, ಗೆಲ್ಲದಿದ್ದರೆ ಇನ್ನೊಬ್ಬರ ತಟ್ಟೆಗೆ ಕೈ ಹಾಕು, ಆಗದಿದ್ದರೆ ಕಸಿದುಕೋ.. ಇದೇ ಕಮಲಪಕ್ಷದ ಕುಟಿಲತೆ ಎಂದು ಟೀಕಿಸಿದ್ದಾರೆ.
ಮೂರೂವರೆ ವರ್ಷದಿಂದ ಗಾಳಿಯಲ್ಲಿ ಗಾಳೀಪಟ ಹಾರಿಸಿಕೊಂಡೇ ಕಾಗಕ್ಕಗುಬ್ಬಕ್ಕನ ಕಥೆ ಹೇಳಿದ್ದ ಬಿಜೆಪಿ ಚುನಾವಣೆ ಗಿಮಿಕ್ಕಿನ ಸಂಪುಟ ಸಭೆಯಲ್ಲಿ ಮೀಸಲು ತುಪ್ಪವನ್ನು ಜನರ ಹಣೆಗೆ ಸವರುವ ಬೂಟಾಟಿಕೆ ನಡೆಸಿದೆ. ಕಳ್ಳಬೆಕ್ಕು ಕಣ್ಮುಚ್ಚಿ ಹಾಲು ಕುಡಿಯಲು ಹೊರಟಿದೆ. ಒಬ್ಬರ ಅನ್ನ ಕಸಿದುಕೊಂಡು ಇನ್ನೊಬ್ಬರ ಹೊಟ್ಟೆ ತುಂಬಿಸಬಹುದು ಎನ್ನುವ ಬಿಜೆಪಿಗರ ರಕ್ಕಸಚಾಳಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯಕ್ಕೆ ಶಾಶ್ವತ ಸಮಾಧಿ ಕಟ್ಟುವಂತಿದೆ. ಪ್ರಜಾಪ್ರಭುತ್ವದಲ್ಲಿ ನಂಬಿಕೆಯೇ ಇಲ್ಲದವರ ನಡವಳಿಕೆ ಇದು ಎಂದು ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


